ಹಾವೇರಿ

ಇಂದು ದ್ವಿ.ದ. ಲೆಕ್ಕ ಸಹಾಯಕರ ಪರೀಕ್ಷೆ

Published On :

ಕನ್ನಡಪ್ರಭ ವಾರ್ತೆ, ಹಾವೇರಿ, ಫೆ. 22
ಲೋಕಸೇವಾ ಆಯೋಗದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ ರಾಜ್ ಇಲಾಖೆಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ಹುದ್ದೆಗೆ ಫೆ. 23 ಹಾಗೂ 24ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ. ಅವ್ಯವಹಾರ ತಡೆಗಟ್ಟಲು ಆಯೋಗ ಪರೀಕ್ಷೆಯ ಪೂರ್ಣ ವಿಡಿಯೋ ಚಿತ್ರೀಕರಣ ಮಾಡಲು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸೂಕ್ತ ವ್ಯವಸ್ಥೆ ಮಾಡಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಜಿ. ಜಗದೀಶ ಹೇಳಿದರು.
ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜರುಗಿದ ಪರೀಕ್ಷಾಪೂರ್ವ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರತಿಭಾನ್ವಿತ ಅಭ್ಯರ್ಥಿಗಳು ಪರೀಕ್ಷೆಗಳಲ್ಲಿ ಆಯ್ಕೆಯಾಗಲಿದ್ದು, ಪರೀಕ್ಷೆ ಅಚ್ಚುಕಟ್ಟಾಗಿ ನಡೆಯುವಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮ ಮೇಲಿದೆ. ಇದನ್ನು ಶ್ರದ್ಧೆಯಿಂದ ನಿಭಾಯಿಸಲು ಸನ್ನದ್ಧರಾಗೋಣ ಎಂದು ತಿಳಿಸಿದರು.
ಆಯೋಗ ಪ್ರಥಮ ಬಾರಿಗೆ ಅಂಧ ಮತ್ತು ದೃಷ್ಟಿಮಾಂದ್ಯ ಅಭ್ಯರ್ಥಿಗಳಿಗೆ ಜಿಲ್ಲಾ ಮಟ್ಟದಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದೆ. ಅವರಿಗೆ ಪ್ರತ್ಯೇಕ ಕೊಠಡಿಯಲ್ಲಿ ಆಸನ ವ್ಯವಸ್ಥೆ ಕಲ್ಪಿಸಬೇಕು. ಪರೀಕ್ಷೆ ಬರೆಯಲು ಲಿಪಿಕಾರರನ್ನು ಅಭ್ಯರ್ಥಿಗಳೇ ಕರೆತರುತ್ತಾರೆ. ಅವರಿಗೆ ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಸಹಕರಿಸಬೇಕು. ಪರೀಕ್ಷಾ ಕೇಂದ್ರಗಳು ವಿಶಾಲವಾಗಿದ್ದಲ್ಲಿ ಎಲ್ಲ ಅಭ್ಯರ್ಥಿಗಳಿಗೆ ಗಂಟೆ ಶಬ್ದ ಕೇಳಿಸುವಂತೆ ವ್ಯವಸ್ಥೆ ಮಾಡುವಂತೆ ಪರೀಕ್ಷಾ ಕೇಂದ್ರದ ಮುಖ್ಯಸ್ಥರಿಗೆ ಸೂಚಿಸಿದರು.
ಫೆ. 23ರಂದು ಕನ್ನಡ ಪರೀಕ್ಷೆ ಮಧ್ಯಾಹ್ನ 2.30ರಿಂದ 5.30ರವರೆಗೆ ಹಾನಗಲ್ಲ ರಸ್ತೆಯ ಆದರ್ಶ ಐಟಿಐ ಕಾಲೇಜಿನಲ್ಲಿ ಜರುಗಲಿದೆ. ಒಟ್ಟು 79 ಅಭ್ಯರ್ಥಿಗಳು ಹಾಜರಾಗಲಿದ್ದಾರೆ. ಫೆ. 24ರಂದು ನಡೆಯುವ ಪರೀಕ್ಷಾ ವೇಳಾಪಟ್ಟಿಯಲ್ಲಿ ಬದಲಾವಣೆ ಇಲ್ಲ. ಈ ಪರೀಕ್ಷೆಗೆ ಜಿಲ್ಲಾ ಕೇಂದ್ರದಲ್ಲಿ 21 ಹಾಗೂ ರಾಣಿಬೆನ್ನೂರಿನಲ್ಲಿ 8ಕೇಂದ್ರಗಳನ್ನು ತೆರೆಯಲಾಗಿದೆ. ಒಟ್ಟು 9,888 ಅಭ್ಯರ್ಥಿಗಳು ಹಾಜರಾಗುವರು ಎಂದು ತಿಳಿದರು.
ಡಿಡಿಪಿಐ ಎಸ್.ಬಿ. ಕೊಡ್ಲಿ ಮಾತನಾಡಿ, ಪರೀಕ್ಷಾ ಕೇಂದ್ರಗಳಿಗೆ ಗೌಪ್ಯ ಸಾಮಗ್ರಿಗಳನ್ನು ತಲುಪಿಸಲು 4-5ಪರೀಕ್ಷಾ ಕೇಂದ್ರಕ್ಕೆ ಒಬ್ಬರಂತೆ ಒಟ್ಟು 7 ಮಾರ್ಗಾಧಿಕಾರಿಗಳನ್ನು ನೇಮಿಸಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರಕ್ಕೆ ಅಗತ್ಯವಿರುವ ಪೊಲೀಸ್ ಸಿಬ್ಬಂದಿಯನ್ನು ಬಂದೋಬಸ್ತ್‌ಗೆ ನಿಯೋಜಿಸಲಾಗಿದೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.