ಬಸ್ಗಾಗಿ ವಿದ್ಯಾರ್ಥಿಗಳ ಪ್ರತಿಭಟನೆ
ರಾಣಿಬೆನ್ನೂರು: ನಗರದದಿಂದ 5 ಕಿ.ಮೀ ದೂರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಬಸ್ ಸಂಚಾರ ಆರಂಭಿಸುವಂತೆ ಒತ್ತಾಯಿಸಿ, ಸ್ವಾಭಿಮಾನಿ ಕರ್ನಾಟಕ ರಕ್ಷಣಾ ವೇದಿಕೆಯ ವಿದ್ಯಾರ್ಥಿ ಘಟಕದ ಕಾರ್ಯಕರ್ತರು ಮಂಗಳವಾರ ಬಸ್ ನಿಲ್ದಾಣದ ಎದುರು ರಾಷ್ಟ್ರೀಯ ಹೆದ್ದಾರಿ ತಡೆ ನಡೆಸಿ ಪ್ರತಿಭಟಿಸಿದರು. ನಂತರ ಸಾರಿಗೆ ಸಂಸ್ಥೆಯ ಸ್ಥಳೀಯ ನಿಯಂತ್ರಣಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಕಾಲೇಜಿನ ಸುಮಾರು 500ಕ್ಕೂ ಹೆಚ್ಚು ವಿದ್ಯಾರ್ಥಿ-ವಿದ್ಯಾರ್ಥಿನಿಯರು ನಿಲ್ದಾಣಾಧಿಕಾರಿ ಹಾಗೂ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಬಸ್ ನಿಲ್ದಾಣದ ಎದುರೇ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿದರು.
ನೇತೃತ್ವ ವಹಿಸಿದ್ದ ಸ್ವಾಕರವೇ ವಿದ್ಯಾರ್ಥಿ ಘಟಕದ ಜಿಲ್ಲಾಧ್ಯಕ್ಷ ಸಂಜೀವ ಕನವಳ್ಳಿ ಮಾತನಾಡಿ, ತಾಲೂಕಿನ ಬಹುತೇಕ ವಿದ್ಯಾರ್ಥಿಗಳಿಗೆ ಪದವಿ ಶಿಕ್ಷಣ ನೀಡಲು ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯ ತೆರೆಯಲಾಗಿದೆ. ಇದು ಬಸ್ ನಿಲ್ದಾಣದಿಂದ 5 ಕಿ.ಮೀ ದೂರದಲ್ಲಿದೆ. ಈ ಕಾಲೇಜಿನಲ್ಲಿ 950ಕ್ಕೂ ಅಧಿಕ ವಿದ್ಯಾರ್ಥಿಗಳು ಅಧ್ಯಯನ ಮಾಡುತ್ತಿದ್ದು, ಸಮಯಕ್ಕೆ ಸರಿಯಾಗಿ ಬಾರದ ಬಸ್ಗಳಿಂದಾಗಿ ತರಗತಿಗಳನ್ನು ತಪ್ಪಿಸಿಕೊಳ್ಳುವಂತಾಗಿದೆ. ಅಲ್ಲದೇ ನಿತ್ಯ ನೂರಾರು ತೊಂದರೆಗಳನ್ನು ಅನುಭವಿಸುವಂತಾಗಿದೆ ಎಂದು ದೂರಿದರು.
ಪ್ರತಿಭಟನಾಕಾರರಿಂದ ಮನವಿ ಸ್ವೀಕರಿಸಿದ ನಿಯಂತ್ರಣಾಧಿಕಾರಿ ಎನ್.ಬಿ. ಚವ್ಹಾಣ ಮಾತನಾಡಿ, ಮೈಲಾರ ಜಾತ್ರೆ ಮುಗಿದ ನಂತರ ಪ್ರತಿ ದಿನ ಬೆಳಗ್ಗೆ ಮತ್ತು ಸಂಜೆ 4 ಟ್ರಿಪ್ ಬಸ್ ಸಂಚಾರ ಆರಂಭಿಸುವ ಭರವಸೆ ನೀಡಿದರು. ಬಳಿಕ ಪ್ರತಿಭಟನೆ ಹಿಂಪಡೆಯಲಾಯಿತು.
ಪ್ರತಿಭಟನೆಯಲ್ಲಿ ರೂಪಾ ಕಾಟಿ, ನಂದಾ ಹುಲ್ಮನಿ, ರೇಷ್ಮಾ, ಬಸವರಾಜ ಬಸಪ್ಪಳವರ, ಅಣ್ಣಪ್ಪ ಹುನಗುಂದ, ವಿಶಾಲಾ ಮಡಿವಾಳರ, ಹನುಮಂತಪ್ಪ ತಾವರಗೊಂದಿ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

