ಸ್ಥಳೀಯ ಸಂಸ್ಥೆ ಚುನಾವಣಾ ಪ್ರಚಾರಕ್ಕೆ ಸಿಎಂ
ಕನ್ನಡಪ್ರಭ ವಾರ್ತೆ, ಹಾವೇರಿ, ಫೆ. 27
ಜಿಲ್ಲೆಯ ಎಲ್ಲ 8 ಸ್ಥಳೀಯ ಸಂಸ್ಥೆಗಳ 193 ಸ್ಥಾನಗಳಲ್ಲಿ 190 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ನಿಲ್ಲಿಸಲಾಗಿದ್ದು, ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆಯಲ್ಲಿ ಮಾ. 1ರಂದು ಪ್ರಚಾರಾರ್ಥ ಜಿಲ್ಲೆಯಲ್ಲಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಸಂಚರಿಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸೋಮಣ್ಣ ಬೇವಿನಮರದ ತಿಳಿಸಿದರು.
ಈ ಕುರಿತಂತೆ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸ್ತುತ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಜಿಲ್ಲೆಯ ಎಲ್ಲ ಸ್ಥಳೀಯ ಸಂಸ್ಥೆಗಳಲ್ಲಿ ಮತ್ತೆ ತನ್ನ ಪಾರುಪತ್ಯ ಮೆರೆಯಲಿದೆ ಎಂದರು.
ಸೂಕ್ತ ಸ್ಥಾನ-ಮಾನ: ಜಿಲ್ಲೆಯಲ್ಲಿನ ಸ್ಥಳೀಯ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಪ್ರಣಾಳಿಕೆ ಸಿದ್ಧಪಡಿಸಿಕೊಂಡಿದ್ದು, ಅದರಂತೆ ಕಾರ್ಯನಿರ್ವಹಿಸಲಾಗುತ್ತಿದೆ. ಎಲ್ಲ ಪಕ್ಷಗಳಂತೆ ಬಿಜೆಪಿಯಲ್ಲಿಯೂ ಅತೃಪ್ತರಿದ್ದಾರೆ. ಬರುವ ದಿನಗಳಲ್ಲಿ ಅವರಿಗೆ ಪಕ್ಷ ಸಂಘಟನೆಯಲ್ಲಿ ಸೂಕ್ತ ಸ್ಥಾನ-ಮಾನ ಕಲ್ಪಿಸಲಾಗುತ್ತದೆ ಎಂದರು.
ಪ್ರಚಾರಕ್ಕೆ ಗಣ್ಯರ ದಂಡು: ಮಾ. 2ರಂದು ಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ, 3ರಂದು ಸಂಸದ ಪ್ರಹ್ಲಾದ ಜೋಶಿ, 4ರಂದು ಸಂಸದ ಅನಂತಕುಮಾರ ಹೆಗಡೆ ಹಾಗೂ 5ರಂದು ಜಲಸಂಪನ್ಮೂಲ ಸಚಿವ ಬಸವರಾಜ ಬೊಮ್ಮಾಯಿ ಜಿಲ್ಲೆಯ ವಿವಿಧೆಡೆ ಪ್ರಚಾರ ಕಾರ್ಯ ಕೈಗೊಳ್ಳಲಿದ್ದಾರೆ ಎಂದರು.
ಜಿಲ್ಲೆಯಲ್ಲಿ ಕಳೆದ ಬಾರಿ ಒಟ್ಟು 89 ಬಿಜೆಪಿ ಸದಸ್ಯರು ಸ್ಥಳೀಯ ಸಂಸ್ಥೆಗಳಲ್ಲಿದ್ದು, ಅದರಲ್ಲಿ ಪ್ರಸ್ತುತ 47 ಜನ ಇಂದಿಗೂ ಬಿಜೆಪಿಯಲ್ಲಿದ್ದಾರೆ. 8-10 ಸದಸ್ಯರು ಬಿಜೆಪಿಗೆ ಮರಳುವ ತಯಾರಿಯಲ್ಲಿದ್ದಾರೆ. ಸ್ಥಳೀಯ ಮಟ್ಟದಲ್ಲಿ ಚುನಾವಣಾ ನಿರ್ವಹಣಾ ಸಮಿತಿ ಮಾಡಲಾಗಿದ್ದು, ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿರುವುದರಿಂದ ಗೊಂದಲ ಸಹಜವಾಗಿದೆ. ಎಲ್ಲವನ್ನೂ ಪರಿಹರಿಸಿಕೊಂಡು ಚುನಾವಣೆ ಎದುರಿಸಲಾಗುವುದು ಎಂದರು.
ಸುದ್ದಿಗೋಷ್ಠಿಯಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಾಗೇಂದ್ರ ಕಡಕೋಳ, ಧಾರವಾಡ ಹಾಲು ಒಕ್ಕೂಟದ ಅಧ್ಯಕ್ಷ ಬಸವರಾಜ ಅರಬಗೊಂಡ, ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ಸಿದ್ದರಾಜ ಕಲಕೋಟಿ, ಜಿಪಂ ಸದಸ್ಯ ಬಸವರಾಜ ಹಾದಿಮನಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಭು ಹಿಟ್ನಳ್ಳಿ, ಮತ್ತಿತರರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

