ಹಾವೇರಿ

ಕಾಮಗಾರಿ ಶೀಘ್ರ ಮುಗಿಸಿ: ಶಿವಣ್ಣ ಸೂಚನೆ

Published On :

ಕನ್ನಡಪ್ರಭ ವಾರ್ತೆ, ರಾಣಿಬೆನ್ನೂರು, ಜ.15
ತಾಲೂಕಿನ ಸರ್ವತೋಮುಖ ಅಭಿವೃದ್ಧಿಗೆ ವಿವಿಧ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ನಾಲ್ಕುವರೆ ವರ್ಷಗಳಿಂದ ಕೈಗೆತ್ತಿಕೊಂಡಿರುವ ಎಲ್ಲ ಅಭಿವೃದ್ಧಿ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸುವುದರೊಂದಿಗೆ ತಾಲೂಕಿನ ಸಮಸ್ತ ಜನ-ಜಾನುವಾರು ಮತ್ತು ರೈತರ ಭೂಮಿಗೆ ಸರ್ಮಪಕ ನೀರುಣಿಸಲು ಮುಂದಾಗಬೇಕೆಂದು ಶಾಸಕ ಜಿ. ಶಿವಣ್ಣ ಹೇಳಿದರು.
ನಗರದ ತಾಲೂಕು ಪಂಚಾಯಿತಿ ಸಭಾ ಭವನದಲ್ಲಿ ಮಂಗಳವಾರ ಕರೆದಿದ್ದ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಶೀಘ್ರ ಪೂರ್ಣಗೊಳಿಸಿ: ಕೇಂದ್ರ ಹಾಗೂ ರಾಜ್ಯ ಸರ್ಕಾರದ ವ್ಯಾಪ್ತಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ಸರ್ಕಾರಿ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ತಾಲೂಕಿನ ಸರ್ವತೋಮುಖ ಅಭಿವೃದ್ಧಿಗೆ ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ವಿವಿಧ ಯೋಜನೆಗಳ ಅಡಿ ಕೈಗೊಂಡಿರುವ ಕಾಮಗಾರಿಗಳನ್ನು ಪೂರ್ಣಗೊಳಿಸುವುದರೊಂದಿಗೆ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಬೇಕು.
ಸಮಗ್ರ ಅಭಿವೃದ್ಧಿ ಕೈಗೊಳ್ಳಿ: ತಾಲೂಕಿನ 35 ಗ್ರಾಪಂ ವ್ಯಾಪಿಯಲ್ಲಿ ಬರುವ ಎಲ್ಲಾ ಹಳ್ಳಿಗಳ ಜನ-ಜಾನುವಾರುಗಳಿಗೆ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಓದುತ್ತಿರುವ ಶಾಲಾ ಮಕ್ಕಳಿಗೆ, ವಿದ್ಯಾರ್ಥಿ ನಿಲಯಗಳಲ್ಲಿ ವಾಸಿಸುತ್ತಿರುವ ವಿದ್ಯಾರ್ಥಿಗಳಿಗಾಗಿ ಮತ್ತು ಗ್ರಾಮೀಣ ಪ್ರದೇಶದಲ್ಲಿನ ಸಾರ್ವಜನಿಕರ ಆರೋಗ್ಯ ಕಾಪಾಡುವುದಕ್ಕಾಗಿ ಸೇವೆ ಸಲ್ಲಿಸುತ್ತಿರುವ ಸಾರ್ವಜನಿಕ ಆಸ್ಪತ್ರೆಗಳಿಗೆ ಬರುವ ರೋಗಿಗಳಿಗೆ, ಪಶು ಆಸ್ಪತ್ರೆಗೆ ಬರುವ ದನಕರುಗಳಿಗೆ ಕುಡಿಯುವ ನೀರನ್ನು ಪೂರೈಸುವುದಕ್ಕಾಗಿ ರಾಜ್ಯ ಗ್ರಾಮಿಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಜಿಲ್ಲಾ ಪಂಚಾಯಿತಿಯಿಂದ ವಿವಿಧ ಯೋಜನೆಗಳ ಅಡಿ ಕೋಟ್ಯಂತರ ಹಣ ಖರ್ಚು ಮಾಡಲಾಗಿದ್ದು, ಕುಡಿಯುವ ನೀರನ್ನು ಸಮಯಕ್ಕೆ ಸರಿಯಾಗಿ ಸಾರ್ವಜನಿಕರಿಗೆ ಪೂರೈಸುವ ಬದಲು ಪೋಲು ಮಾಡುತ್ತಿರುವ ಗ್ರಾಮ ಪಂಚಾಯಿತಿ ಸಿಬ್ಬಂದಿ ಹಾಗೂ ಅಭಿವೃದ್ಧಿ ಅಧಿಕಾರಿಗಳ ಮೇಲೆ ಕ್ರಮಕೈಗೊಳಲು ಕಾರ್ಯನಿರ್ವಣಾಧಿಕಾರಿಗಳು ಮುಂದಾಗಬೇಕು.
ತಾಲೂಕು ಸುಂದರವಾಗಿಸಿ: ಸಾಮಾಜಿಕ ಅರಣ್ಯ ಮತ್ತು ವಲಯ ಅರಣ್ಯ ಇಲಾಖೆ, ಜಲಾನಯನ ಅಭಿವೃದ್ಧಿ ಇಲಾಖೆಗಳಿಂದ ತಾಲೂಕಿನ ಗ್ರಾಮೀಣ ಪ್ರದೆಶದ ರಸ್ತೆಗಳ ಬದುವುಗಳು, ಶಾಲೆಗಳ ಮತ್ತು ಸಾರ್ವಜನಿಕ ಆಸ್ಪತ್ರೆಗಳ ಆವರಣದಲ್ಲಿ ನೆಟ್ಟಿರುವ ಸಸಿಗಳಿಗೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಸಮಯಕ್ಕೆ ಸರಿಯಾಗಿ ನೀರು ಹಾಕುವುದರೊಂದಿಗೆ ಗಿಡಗಳನ್ನೆಲ್ಲ ಬೆಳೆಸಿ, ತಾಲೂಕನ್ನು ನಂದನವನವನ್ನಾಗಿಸಲು ಶ್ರಮಿಸಬೇಕು ಎಂದು ಹೇಳಿದರು.
ಕೆರೆಗೆ ನೀರು ತುಂಬಿಸಿ: ತುಂಗಾ ಮೇಲ್ದಂಡೆ ಯೋಜನೆ ಕಾಲುವೆಗಳನ್ನು ಒಡೆದು ಅನಧಿಕೃತವಾಗಿ ನೀರನ್ನು ಪಡೆದು ಕಾಲುವೆಗೆ ಹಾನಿಯನ್ನುಂಟು ಮಾಡಿರುವವರ ಮೇಲೆ ನಿರ್ಧಾಕ್ಷಿಣ್ಯ ಕ್ರಮ ತಗೆದುಕೊಳ್ಳುವುದರೊಂದಿಗೆ ಸಂಬಂಧಿಸಿದ ರೈತರ ಜಮೀನುಗಳಿಗೆ ನೀರುಣಿಸಲು ಹಾಗೂ ಮುಖ್ಯ ಕಾಲುವೆ ಅಕ್ಕಪಕ್ಕದ ಗ್ರಾಮಗಳ ಕೆರೆಗಳಿಗೆ ನೀರು ತುಂಬಿಸಿ, ಕೆರೆ ವ್ಯಾಪ್ತಿಯ ಹಳ್ಳಿಗಳ ರೈತರ ಹೊಲಗಳಲ್ಲಿನ ಬೋರ್‌ವೆಲ್‌ಗಳಲ್ಲಿ ಅಂತರ್ಜಲ ಹೆಚ್ಚಿಸುವುದಕ್ಕಾಗಿ ತುಂಗಾ ಮೇಲ್ದಂಡೆ ಯೋಜನಾಧಿಕಾರಿಗಳು ಮತ್ತು ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ಮುಂದಾಗಬೇಕೆಂದರು. ಬಸ್ ಸೌಲಭ್ಯ ಕಲ್ಪಿಸಿ ಗ್ರಾಮೀಣ ಪ್ರದೇಶಗಳ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸಾರಿಗೆ ಇಲಾಖೆಯವರು ಬಸ್ಸುಗಳನ್ನು ಓಡಿಸಲು ಮುಂದಾಗಬೇಕೆಂದು ಶಾಸಕ ಜಿ. ಶಿವಣ್ಣ ತಿಳಿಸಿದರು.
ತಾಪಂ ಅಧ್ಯಕ್ಷೆ ಶಾರದಾ ಲಮಾಣಿ, ಉಪಾಧ್ಯಕ್ಷೆ ರೇಣುಕಾ ಮಲಕನಹಳ್ಳಿ, ಜಿಪಂ ಮಾಜಿ ಅಧ್ಯಕ್ಷ ಮಂಜುನಾಥ ಓಲೇಕಾರ, ಶಿವಕುಮಾರ ಮುದ್ದಪ್ಪಳವರ, ಲಲಿತಾ ಜಾಧವ, ಮಂಜುಳಾ ಅಂಬಲಿ, ಸಂತೋಷ ಪಾಟೀಲ್ ಉಪಸ್ಥಿತರಿದ್ದರು. ತಾಲೂಕು ಪಂಚಾಯಿತಿ ಇಓ ಉಜನೆಪ್ಪ ಸ್ವಾಗತಿಸಿದರು. ಎಂ.ಎಚ್. ಪಾಟೀಲ್ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.