ಪ್ರಾದೇಶಿಕ ಪಕ್ಷ ಅಧಿಕಾರಕ್ಕೆ ಬಂದರೆ ರಾಜ್ಯದ ಅಭಿವೃದ್ಧಿ
ಗಂಗಾವತಿ: ಕೇಂದ್ರದಲ್ಲಿ ಅಧಿಕಾರಕ್ಕೆ ಬರುವ ಪಕ್ಷಗಳು ರಾಜ್ಯವನ್ನು ನಿರ್ಲಕ್ಷಿಸುತ್ತಿದ್ದು, ರಾಜ್ಯದ ಅಭಿವೃದ್ಧಿಗಾಗಿ ಪ್ರಾದೇಶಿಕ ಪಕ್ಷ ಅಧಿಕಾರಕ್ಕೆ ಬರುವ ಅವಶ್ಯಕತೆ ಇದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪ್ರತಿಪಾದಿಸಿದರು. ಅವರು ತಾಲೂಕಿನ ಕಾರಟಗಿ ಸರ್ಕಾರಿ ಸಂಯುಕ್ತ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಸೋಮವಾರ ಸಂಜೆ ನಡೆದ ಕೆಜೆಪಿ ಕಾರ್ಯಕರ್ತರ ಬಹಿರಂಗ ಸಭೆಯಲ್ಲಿ ಮಾತನಾಡಿದರು. ವಿದ್ಯುತ್ ಅಭಾವ, ಬರದಿಂದ ರಾಜ್ಯ ತತ್ತರಿಸಿದ್ದು, ಕೇಂದ್ರ ಸರ್ಕಾರ ಸಕಾಲದಲ್ಲಿ ನೆರವಿಗೆ ಬಂದಿಲ್ಲ. ಮುಖ್ಯಮಂತ್ರಿ ಶೆಟ್ಟರ್ ಮೇಲೆ ಒತ್ತಡ ಹೇರಿ ರಾಜ್ಯದ ರೈತರ ರು. 25 ಸಾವಿರ ವರೆಗಿನ ಸಾಲವನ್ನು ಮನ್ನಾ ಮಾಡಿಸಿದ್ದೇನೆ. ಒಟ್ಟು ರು. 3,600 ಕೋಟಿ ಸಾಲ ಮನ್ನಾ ಆಗಿದ್ದು, ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆ, ಭಾಗ್ಯಲಕ್ಷ್ಮಿ ಯೋಜನೆ ಸೇರಿದಂತೆ ಮತ್ತಿತರ ಜನಪರ ಕಾರ್ಯಕ್ರಮಗಳು ತಮ್ಮ ಕಾಲಾವಧಿಯಲ್ಲಿ ಜಾರಿಗೆ ಬಂದಿವೆ. ಕಲ್ಯಾಣ ಕರ್ನಾಟಕ ನನ್ನ ಕನಸಾಗಿದ್ದು, ಮುಂಬರುವ ಚುನಾವಣೆಯಲ್ಲಿ ಕೆಜೆಪಿಗೆ ಅಧಿಕಾರ ನೀಡಿದರೆ ಈ ಭಾಗದ ಸಂಪೂರ್ಣ ಅಭಿವೃದ್ಧಿ ಮಾಡುವುದಾಗಿ ಭರವಸೆ ನೀಡಿದರು.
ಕನಕಗಿರಿ ದತ್ತು: ಮೀಸಲು ಕ್ಷೇತ್ರವಾದ ಕನಕಗಿರಿಯಲ್ಲಿ ಕೆಜೆಪಿ ಅಭ್ಯರ್ಥಿಯನ್ನು ಆಯ್ಕೆ ಮಾಡಿದರೆ ಕ್ಷೇತ್ರವನ್ನು ದತ್ತು ಪಡೆದು ಸಂಪೂರ್ಣ ಅಭಿವೃದ್ಧಿ ಮಾಡುವುದಾಗಿ ಅವರು ಹೇಳಿದರು. ಈ ಮಧ್ಯೆ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕನಕಗಿರಿ ಕ್ಷೇತ್ರದಿಂದ ಧಡೇಸುಗೂರು ಬಸವರಾಜ್‌ಗೆ ಪಕ್ಷದ ಟಿಕೆಟ್ ನೀಡುವುದಾಗಿ ಅವರು ಇದೇ ಸಂದರ್ಭದಲ್ಲಿ ಘೋಷಿಸಿದರು. ಕಾರ್ಯಕರ್ತರು ಅವರ ಗೆಲವಿಗೆ ಶ್ರಮಿಸಬೇಕು ಎಂದು ಮನವಿ ಮಾಡಿದರು. ತಮ್ಮ ಅಧಿಕಾರಾವಧಿಯಲ್ಲಿ ಹಾವೇರಿ ಜಿಲ್ಲೆಯ ಕಾಗಿನೆಲೆ ಅಭಿವೃದ್ಧಿಗೆ ರು. 40 ಕೋಟಿ ಅನುದಾನ ನೀಡಿದ್ದಾಗಿ ಹೇಳಿದ ಅವರು, ಹಾವೇರಿ ಕೆಜೆಪಿ ಸಮಾವೇಶದ ನಂತರ ಒಂದೂವರೆ ತಿಂಗಳ ಅವಧಿಯಲ್ಲಿ ರಾಜ್ಯದಲ್ಲಿ ನೂರು ಸಭೆ ನಡೆಸಿ ಪಕ್ಷದ ಸಂಘಟನೆ ಮಾಡಿರುವುದಾಗಿ ಹೇಳಿದರು. ಕೇಂದ್ರದ ಮಾಜಿ ಸಚಿವ ಬಸವರಾಜ್ ಪಾಟೀಲ್ ಅನ್ವರಿ ಮಾತನಾಡಿ,ಯಡಿಯೂರಪ್ಪ ರೈತಪರ ಹೋರಾಟ ಮಾಡಿದ್ದು, ಅವರಿಗೆ ರಾಜ್ಯದ ಜನತೆ ಮತ್ತೊಮ್ಮೆ ಆಶೀರ್ವದಿಸಬೇಕು ಎಂದು ಮನವಿ ಮಾಡಿದರು. ಪಕ್ಷದ ಮುಖಂಡರಾದ ಶಿವರಾಜಗೌಡ, ರಾಜಶೇಖರ ಪಾಟೀಲ್, ಹೇಮಲತಾ ಹಿರೇಮಠ, ಡಾ. ಅರವಟಿಗಿಮಠ ಮತ್ತಿತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

