ಮೋಟೆಬೆನ್ನೂರಿಗೆ ಐಟಿಐ ಕಾಲೇಜು, ಆಸ್ಪತ್ರೆ
ಕನ್ನಡಪ್ರಭ ವಾರ್ತೆ, ಬ್ಯಾಡಗಿ, ಜು. 11
ಸ್ವಾತಂತ್ರ್ಯ ಹೋರಾಟಗಾರ ಮೈಲಾರ ಮಹದೇವ ಜನಿಸಿದ ಮೋಟೆಬೆನ್ನೂರು ಗ್ರಾಮ ಮೂಲಭೂತ ಸೌಲಭ್ಯಗಳಿಂದ ವಂಚಿತವಾಗಿದೆ. ಈ ಹಿನ್ನೆಲೆಯಲ್ಲಿ 17 ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಹೊಂದಿರುವ ಗ್ರಾಮಕ್ಕೆ ಪ್ರಾಥಮಿಕ ಆರೋಗ್ಯ ಕೇಂದ್ರ ಸೇರಿದಂತೆ ಸರ್ಕಾರಿ ಐಟಿಐ ಕಾಲೇಜು ಹಾಗೂ ಶುದ್ಧ ಕುಡಿಯುವ ನೀರಿನ ಘಟಕ ಆರಂಭಿಸುವುದಾಗಿ ಶಾಸಕ ಬಸವರಾಜ ಶಿವಣ್ಣನವರ ಹೇಳಿದರು.
ತಾಲೂಕಿನ ಮೋಟೆಬೆನ್ನೂರು ಗ್ರಾಮದಲ್ಲಿ ಶಾಸಕ ಬಸವರಾಜ ಶಿವಣ್ಣನವರ ಹಾಗೂ ಹಾವೇರಿ ಶಾಸಕ ರುದ್ರಪ್ಪ ಲಮಾಣಿ ಅವರನ್ನು ಸನ್ಮಾನಿಸಲಾಯಿತು.
ಸೌಲಭ್ಯ: ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಯಿಂದ ದೇಶದ ಪ್ರಗತಿ ಸಾಧ್ಯ. ಗ್ರಾಮೀಣ ಪ್ರದೇಶಗಳ ಅಭಿವೃದ್ಧಿ ಕಾಂಗ್ರೆಸ್ ಪಕ್ಷದ ಜನಪ್ರಿಯ ಕಾರ್ಯಕ್ರಮಗಳಲ್ಲೊಂದಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಅನುದಾನದಲ್ಲಿ ರಾಜೀವ್ ಗಾಂಧಿ ಸಬ್ ಮಿಷನ್ನಡಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಅನುಷ್ಠಾನಗೊಳಿಸಿದ್ದು, ಈಗಾಗಲೇ ಗ್ರಾಮಕ್ಕೆ ಶಾಶ್ವತ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲಾಗಿದೆ ಎಂದರು.
ಅಭಿವೃದ್ಧಿಗೆ ಶ್ರಮ: ಕಳೆದ 10 ವರ್ಷಗಳಿಂದ ಕಾಂಗ್ರೆಸ್ ಪಕ್ಷವು ಅಧಿಕಾರದಿಂದ ವಂಚಿತವಾಗಿತ್ತು. ಈ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಕರ್ತರು ಸಾಕಷ್ಟು ತೊಂದರೆ ಅನುಭವಿಸಿದ್ದಾರೆ. ನನ್ನ ಆಡಳಿತದಲ್ಲಿ ಪಕ್ಷ ಭೇದ ಮರೆತು ತಾಲೂಕಿನ ಸರ್ವಾಂಗೀಣ ಅಭಿವೃದ್ಧಿ ಹಾಗೂ ಬಡವ, ದೀನ ದಲಿತರ ಮತ್ತು ಶೋಷಣೆಗೊಳಗಾದವರ ಒಳಿತಿಗೆ ಶ್ರಮಿಸುವ ಮೂಲಕ ತಾಲೂಕನ್ನು ಮಾದರಿ ಕ್ಷೇತ್ರವನ್ನಾಗಿಸಲು ಪ್ರಯತ್ನಿಸುವುದಾಗಿ ಹೇಳಿದರು. ಹಾವೇರಿ ಶಾಸಕ ರುದ್ರಪ್ಪ ಲಮಾಣಿ ಮಾತನಾಡಿ, ಬಡವರಿಗೆ ರು. 1ಗೆ ಕೆ.ಜಿ ಅಕ್ಕಿ ವಿತರಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಆಶ್ರಯ ಹಾಗೂ ಅಂಬೇಡ್ಕರ್ ಸೇರಿದಂತೆ ಇತರೆ ಯೋಜನೆಗಳಲ್ಲಿ ಬಡತನ ರೇಖೆಗಿಂತ ಕೆಳಗಿನವರಿಗೆ ಮನೆ ನಿರ್ಮಿಸಿಕೊಳ್ಳಲು 1.20 ಲಕ್ಷ ನೀಡುವ ಮೂಲಕ ಕಾಂಗ್ರೆಸ್ ನೇತೃತ್ವದ ಸರ್ಕಾರ ಬಡವರಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದರು. ಮುಂಬರುವ ದಿನಗಳಲ್ಲಿ ಬಸವರಾಜ ಶಿವಣ್ಣನವರ ಅವರೊಂದಿಗೆ ಕೈಜೋಡಿಸಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಶ್ರಮಿಸುವುದಾಗಿ ಶಾಸಕ ಲಮಾಣಿ ತಿಳಿಸಿದರು. ಇದೇ ಸಂದರ್ಭದಲ್ಲಿ ಗ್ರಾಮದ ವ್ಯವಸಾಯ ಸಹಕಾರಿ ಬ್ಯಾಂಕ್ ಸೇರಿದಂತೆ ವಿವಿಧ ಸಂಘ ಸಂಸ್ಥೆಯವರು ಶಾಸಕರನ್ನು ಸನ್ಮಾನಿಸಿದರು. ಬಸವರಾಜ ದಿಡಗೂರ ಸಭೆ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಎಸ್.ಆರ್. ಪಾಟೀಲ ತಾಲೂಕು ಕಾಂಗ್ರೆಸ್ ಅಧ್ಯಕ್ಷ ಹುಸೇನಸಾಬ್ ದೊಡ್ಮನಿ, ಸುರೇಶಗೌಡ ಪಾಟೀಲ, ಗ್ರಾಪಂ ಅಧ್ಯಕ್ಷೆ ನೀಲಮ್ಮ ಗೊರವರ, ಉಪಾಧ್ಯಕ್ಷ ವಿಜಯ ಸವಣೂರು, ಕೆ.ಎಫ್. ಹೊಂಬರಡಿ, ಶೇಖಣ್ಣ ಮೈಲಾರ, ವೀರಣ್ಣ ಬಳ್ಳಾರಿ, ಭೋಜರಾಜ ಬಳ್ಳಾರಿ, ಬಸವರಾಜ ಬ್ಯಾಟ್ಟಪ್ಪನವರ, ಬಸವರಾಜ ಬಳ್ಳಾರಿ, ಮಾಲತೇಶ ಕುರಿ, ಮಂಜಣ್ಣ ಎಲಿ, ದಾನಪ್ಪ ಚೂರಿ, ಪುಟ್ಟನಗೌಡ ಪಾಟೀಲ, ಶಿವಪುತ್ರಪ್ಪ ಅಗಡಿ ಇನ್ನಿತರರು ಉಪಸ್ಥಿತರಿದ್ದರು.
--
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

