ಹಾವೇರಿ

ಶೋಷಣೆ ವಿರುದ್ಧ ಸಂಘಟಿತರಾಗಿ: ಸಲೀಂ

Published On :

ಕನ್ನಡಪ್ರಭ ವಾರ್ತೆ, ಹಾವೇರಿ, ಜು. 21
ಪತ್ರಕರ್ತರ ಮೇಲೆ ನಡೆಯುತ್ತಿರುವ ಶೋಷಣೆ ತಡೆಗಟ್ಟಲು ಪತ್ರಕರ್ತರೆಲ್ಲರೂ ಸಂಘಟಿತರಾಗಬೇಕು ಎಂದು ಕೇಂದ್ರ ಸರ್ಕಾರದ ನೆಹರು ಯುವ ಕೇಂದ್ರ ಸಂಘಟನೆಯ ಮಹಾನಿರ್ದೇಶಕ ಸಲೀಂ ಅಹ್ಮದ ಅಭಿಪ್ರಾಯಪಟ್ಟರು.
ನಗರದ ಜಿಲ್ಲಾ ಸರ್ಕಾರಿ ನೌಕರರ ಭವನದಲ್ಲಿ ಭಾನುವಾರ ಬೆಳಗ್ಗೆ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಏರ್ಪಡಿಸಿದ್ದ ಪತ್ರಿಕಾ ದಿನಾಚರಣೆ ಹಾಗೂ ಜಿಲ್ಲಾ ಪತ್ರಕರ್ತರ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.
ಪತ್ರಕರ್ತ ಸಂಘಟನೆಗಳು ಒಗ್ಗಟ್ಟಾಗಿ ಕ್ಷೇತ್ರದ ಒಳಿತಿಗಾಗಿ ಶ್ರಮಿಸಬೇಕು. ಅಂದಾಗ ಮಾತ್ರ ಪತ್ರಿಕಾ ರಂಗದಲ್ಲಿ ದುಡಿಯುವ ವರ್ಗ ಅಭಿವೃದ್ಧಿ ಹೊಂದಲು ಸಾಧ್ಯ ಎಂದೂ ಸಲೀಂ ಅಹ್ಮದ್ ಹೇಳಿದರು.
ಸರ್ಕಾರ ಹಾಗೂ ಸಮಾಜಕ್ಕೆ ಸೂಕ್ತ ಮಾರ್ಗದರ್ಶನ ಮಾಡುವಲ್ಲಿ ಪತ್ರಿಕಾ ಕ್ಷೇತ್ರದ ಕೊಡುಗೆ ಅಪಾರವಾಗಿದೆ ಎಂದರು. ಶಾಸಕ ರುದ್ರಪ್ಪ ಲಮಾಣಿ, ಪತ್ರಿಕಾ ಕ್ಷೇತ್ರ ಸಮಾಜದಲ್ಲಿ ಅವ್ಯವಸ್ಥೆ ಮೇಲೆ ಬೆಳಕು ಚೆಲ್ಲುವ ಮೂಲಕ ಸಮಾಜ ತಿದ್ದುವ ಕೆಲಸ ಮಾಡುತ್ತ ಬಂದಿದೆ ಎಂದು ಬಣ್ಣಿಸಿದರು. ಶಾಸಕ ಬಸವರಾಜ ಶಿವಣ್ಣವರ, ವಸ್ತುನಿಷ್ಠ ವರದಿಗಳಿಂದ ಪತ್ರಿಕಾ ರಂಗದ ವರ್ಚಸ್ಸು ಮತ್ತಷ್ಟು ಹೆಚ್ಚುತ್ತದೆ ಎಂದ ಅವರು, ಪತ್ರಿಕೋದ್ಯಮ ಸರ್ಕಾರ ಹಾಗೂ ಸಮಾಜದ ಮಧ್ಯೆ ಕೊಂಡಿಯಾಗಿ ಕೆಲಸ ನಿರ್ವಹಿಸುತ್ತಿದೆ ಎಂದರು. ಸಾನ್ನಿಧ್ಯ ವಹಿಸಿದ್ದ ಹುಕ್ಕೇರಿಮಠದ ಸದಾಶಿವ ಸ್ವಾಮೀಜಿ, ಗ್ರಾಮೀಣ ಪ್ರದೇಶದಲ್ಲಿರುವ ಬಿಡಿ ವರದಿಗಾರರಿಗೆ ಸೂಕ್ತ ಸೌಲಭ್ಯ ನೀಡಲು ಸರ್ಕಾರ ಮುಂದಾಗಬೇಕು. ಟಿವಿ ಮಾಧ್ಯಮಗಳ ಹಾವಳಿಯಿಂದಾಗಿ ಜನರಲ್ಲಿ ಪತ್ರಿಕೆಗಳನ್ನು ಓದುವ ಹವ್ಯಾಸ ಕಡಿಮೆಯಾಗುತ್ತಿದೆ ಎಂದು ವಿಷಾದ ವ್ಯಕ್ತಪಡಿಸಿದರು. ವಿಪ ಸದಸ್ಯ ಸೋಮಣ್ಣ ಬೇವಿನಮರದ, ಹಿರಿಯ ಪತ್ರಕರ್ತ ಗೋಪಾಲಕೃಷ್ಣ ಹೆಗಡೆ ಮಾತನಾಡಿದರು. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ನಿಂಗಪ್ಪ ಚಾವಡಿ ಅಧ್ಯಕ್ಷತೆ ವಹಿಸಿದ್ದರು. ಪತ್ರಕರ್ತರಾದ ವಸಂತಗೌಡ ಪಾಟೀಲ, ಪರುಶುರಾಮ ಕೆರಿ, ಷಡಕ್ಷರಿ ಕಂಪನವರ, ಪರಶುರಾಮ ಅಗಡಿ ಮತ್ತಿತರರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.