ಬಾಲ ಕಾರ್ಮಿಕ ಪದ್ಧತಿ ತೊಲಗಿಸಿ
ಹಾವೇರಿ: ಭಾರತದಲ್ಲಿ 1.25 ಕೋಟಿ ಮಕ್ಕಳು ಬಾಲ ಕಾರ್ಮಿಕರಾಗಿ ದುಡಿಯುತ್ತಿದ್ದು, ಈ ಕರಾಳ ಪದ್ಧತಿಯ ನಿರ್ಮೂಲನೆಗೆ ಸಂಬಂಧಪಟ್ಟವರು ಬದ್ಧತೆಯಿಂದ ಕಾರ್ಯನಿರ್ವಹಿಸಬೇಕಾದ ಅಗತ್ಯವಿದೆ ಎಂದು ಜಿಲ್ಲಾ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷ ಎಚ್.ಪಿ. ಸಂದೇಶ ತಿಳಿಸಿದರು.
ಹಾವೇರಿಯ ಜಿಲ್ಲಾ ಗುರುಭವನದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಸಾರ್ವಜನಿಕ ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಕಾರ್ಮಿಕ ಇಲಾಖೆ ಮತ್ತು ರಾಷ್ಟ್ರೀಯ ಬಾಲಕಾರ್ಮಿಕ ಯೋಜನಾ ಸಂಸ್ಥೆ ಆಶ್ರಯದಲ್ಲಿ ಏರ್ಪಡಿಸಲಾಗಿದ್ದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.
ಕೇವಲ ದಿನಾಚರಣೆ ಆಚರಿಸಿ ಜಾಗೃತಿ ಮೂಡಿಸಿದರೆ, ಬಾಲಕಾರ್ಮಿಕ ಪದ್ಧತಿ ನಿರ್ಮೂಲನವಾಗದು. ಬದಲಿಗೆ ಪಾಲಕರು ತಮ್ಮ ಮಕ್ಕಳ ಉತ್ತಮ ಭವಿಷ್ಯಕ್ಕಾಗಿ ಆಯೋಗ ನೀಡುವ ಶಿಕ್ಷಣದ ಮೂಲಕ ಮಕ್ಕಳನ್ನು ಬಾಲ್ಯದಲ್ಲಿಯೇ ದುಡಿಮೆಯಿಂದ ದೂರ ಇಡಬೇಕು. ಭಾರತದ ಸಂವಿಧಾನ ಸಹ 6ರಿಂದ 14ನೇ ವಯಸ್ಸಿನವರೆಗೆ ಮಕ್ಕಳಿಗೆ ಕಡ್ಡಾಯ ಶಿಕ್ಷಣ ನೀಡಲು ನಿಬಂಧನೆ ವಿಧಿಸಿದೆ. ಅದರಂತೆ ಸರ್ಕಾರಿ ಶಾಲೆಗಳಲ್ಲಿ ಬಿಸಿಯೂಟ ಮತ್ತಿತರ ಶೈಕ್ಷಣಿಕ ಸೌಲಭ್ಯಗಳನ್ನು ಕಲ್ಪಿಸಿದೆ. ಸೌಲಭ್ಯ ಬಳಸಿಕೊಂಡು ಬಾಲ ಕಾರ್ಮಿಕ ಪದ್ಧತಿ ನಿವಾರಿಸುವಂತೆ ಸಲಹೆ ಮಾಡಿದರು.
ಅರಿವು ಮೂಡಿಸಿ: ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಸ್ಥೆ ಅಧ್ಯಕ್ಷರೂ ಆದ ಪಾಂಡುರಂಗ ನಾಯಕ ಮಾತನಾಡಿ, ಶಿಕ್ಷಣ ನಮ್ಮ ಸಮಾಜದ ಎಲ್ಲ ಮೌಢ್ಯ ಹಾಗೂ ಸಮಸ್ಯೆಗಳಿಗೆ ಪರಿಹಾರವಾಗಿದ್ದು, ಮಕ್ಕಳ ಭವಿಷ್ಯದ ದೃಷ್ಟಿಯಿಂದ ಪಾಲಕರ ಪಾತ್ರ ಹಿರಿದಾಗಿದೆ. ಬಾಲಕಾರ್ಮಿಕ ಪದ್ಧತಿಯ ಅನಿಷ್ಟಗಳ ಬಗ್ಗೆ ಜನಸಾಮಾನ್ಯರಲ್ಲಿ ನಿರಂತರ ಜಾಗೃತಿ ಮೂಡಿಸುವುದು ಅಗತ್ಯವಿದ್ದು, ಸರ್ಕಾರಿ ಇಲಾಖೆಗಳಾದ ಮಾಹಿತಿ, ಶಿಕ್ಷಣ ಹಾಗೂ ಸಂವಹನ ಚಟುವಟಿಕೆ ಹೊಂದಿರುವ ಆರೋಗ್ಯ, ಶಿಕ್ಷಣ ಮತ್ತು ಕೃಷಿ ಮತ್ತಿತರ ಇಲಾಖೆಗಳು ತಮ್ಮ ಕಾರ್ಯಕ್ರಮಗಳಲ್ಲಿ ಬಾಲಕಾರ್ಮಿಕ ಪದ್ಧತಿಯ ದುಷ್ಪರಿಣಾಮಗಳನ್ನು ಬಿಂಬಿಸಿ, ಅರಿವು ಮೂಡಿಸಬೇಕೆಂದರು.
ಜಿಲ್ಲಾ ಕಾರ್ಮಿಕ ಅಧಿಕಾರಿ ಸಿ.ವಿ. ಹೊರಟ್ಟಿ ಅವರು ಬಾಲಕಾರ್ಮಿಕ ಪದ್ಧತಿ ನಿಷೇಧ ಮತ್ತು 1986ರ ನಿಯಂತ್ರಣ ಕಾಯ್ದೆ ಕುರಿತು ಮಾತನಾಡಿ, ಬಾಲ ಕಾರ್ಮಿಕ ಪದ್ಧತಿ ತಡೆಯಲು ಸರ್ವೋಚ್ಚ ನ್ಯಾಯಾಲಯದ ತೀರ್ಪಿನ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಸೂಚನೆಯಂತೆ ದೇಶದ ಎಲ್ಲ ರಾಜ್ಯಗಳಲ್ಲಿ ಬಾಲಕಾರ್ಮಿಕರ ಸಮೀಕ್ಷೆ ನಡೆಸಲಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಅಪಾಯಕಾರಿ ಉದ್ದಿಮೆಗಳಲ್ಲಿ ಕೆಲಸ ಮಾಡುವ ಬಾಲಕಾರ್ಮಿಕರನ್ನು ಗುರುತಿಸಿ, ಅವರ ಪುನರ್ವಸತಿಗೆ ಸರ್ಕಾರ ಯೋಜನೆ ರೂಪಿಸಿದೆ. ಕೇಂದ್ರ ಸರ್ಕಾರದ ರಾಷ್ಟ್ರೀಯ ಬಾಲ ಕಾರ್ಮಿಕ ಯೋಜನೆಯಡಿ ಹಾವೇರಿ ಜಿಲ್ಲೆಯಲ್ಲಿ ರಾಷ್ಟ್ರೀಯ ಬಾಲಕಾರ್ಮಿಕ ಯೋಜನಾ ಸಂಸ್ಥೆ ಅಸ್ತಿತ್ವಕ್ಕೆ ಬಂದಿದ್ದು, ಬಾಲಕಾರ್ಮಿಕರನ್ನು ಗುರುತಿಸಿ, ಅವರನ್ನು ಕಲಿಕಾ ಕೇಂದ್ರಗಳಿಗೆ ಸೇರಿಸಿ, ಶಿಕ್ಷಣ ಊಟೋಪಚಾರ ಹಾಗೂ ಸ್ಟೈಫಂಡ್ ನೀಡುವ ವ್ಯವಸ್ಥೆ ಕಲ್ಪಿಸಲಾಗುತ್ತಿದೆ ಎಂದರು.
ಜಿಲ್ಲಾ ಪೊಲೀಸ್ ಉಪಾಧೀಕ್ಷಕ ಸಿ.ಸಿ.ಪಾಟೀಲ, ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಎಸ್.ಎ. ಹುದ್ದಾರ, ಹಾವೇರಿಯ ಇಡಾರಿ ಸ್ವಯಂಸೇವಾ ಸಂಸ್ಥೆ ಅಧ್ಯಕ್ಷೆ ಪರಿಮಳಾ ಜೈನ್ ಮಾತನಾಡಿದರು.
ಸಮಾರಂಭದಲ್ಲಿ ಎನ್.ಎಸ್. ಪಾಟೀಲ, ಜಿಪಂ ಸಿಇಓ ಅಧಿಕಾರಿ ಉಮೇಶ ಕುಸುಗಲ್ಲ, ಎಸ್.ಎಸ್. ಹಿರೇತನದ, ಸಹಾಯಕ ನಿರ್ದೇಶಕ ಸಿ. ವಿಜಯಕುಮಾರ, ಡಿಎಚ್ಓ ಡಾ ಎಚ್.ಎಸ್. ರಾಘವೇಂದ್ರಸ್ವಾಮಿ, ಜಿಲ್ಲಾ ವಾರ್ತಾಧಿಕಾರಿ ಸಿ.ಪಿ. ಮಾಯಾಚಾರಿ, ಲಕ್ಷ್ಮೀನಾರಾಯಣ ಕುಂದಾಪುರ ಉಪಸ್ಥಿತರಿದ್ದರು. ವಿನಯ ಘೋರ್ಪಡೆ ಸ್ವಾಗತಿಸಿದರು. ರುದ್ರೇಶ ಚಿಣ್ಣನವರ ವಂದಿಸಿದರು.
ಬೃಹತ್ ಜಾಥಾ: ಬೆಳಗ್ಗೆ 9-30ಕ್ಕೆ ನಗರದ ಹುತಾತ್ಮ ಮೈಲಾರ ಮಹಾದೇವ ಚೌಕ್ದಲ್ಲಿ ಪ್ರಧಾನ ಸಿವಿಲ್ ನ್ಯಾಯಾಧೀಶ ಎನ್. ಶ್ರೀಪಾದ ಅವರು ಡೋಲು ಬಾರಿಸುವ ಮೂಲಕ ಮಕ್ಕಳ ಜಾಥಾಕ್ಕೆ ಚಾಲ ನೀಡಿದರು. ಈ ಸಂದರ್ಭ ಹಿರಿಯ ಸಿವಿಲ್ ನ್ಯಾಯಾಧೀಶ ಎನ್.ಎಸ್. ಪಾಟೀಲ, ಜಿಲ್ಲಾ ಕಾರ್ಮಿಕ ಅಧಿಕಾರಿ ಸಿ.ವಿ. ಹೊರಟ್ಟಿ, ದೈಹಿಕ ಶಿಕ್ಷಣ ನಿರ್ದೇಶಕ ನಾಗರಾಜ ಇಚ್ಚಂಗಿ, ಆಶಾಕಿರಣ ಸಂಸ್ಥೆ ಅಧ್ಯಕ್ಷ ಮುತ್ತುರಾಜ ಮಾದರ, ವಿನಯ ಘೋರ್ಪಡೆ, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಜಾಥಾದಲ್ಲಿ ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

