ಹಾವೇರಿ

ಮೂಲಸೌಲಭ್ಯಕ್ಕೆ ಆಗ್ರಹಿಸಿ ಗ್ರಾಪಂಗೆ ಬೀಗ

Published On :

ರಾಣಿಬೆನ್ನೂರು: ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಸೇರಿದಂತೆ ಗ್ರಾಮ ಪಂಚಾಯತಿಯಿಂದ ತಮ್ಮ ಗ್ರಾಮಕ್ಕೆ ಒದಗಿಸಬೇಕಾಗಿರುವ ಮೂಲಸೌಲಭ್ಯಗಳನ್ನು ಒದಗಿಸಬೇಕೆಂದು ತಾಲೂಕಿನ ಕೆರಿಮಲ್ಲಾಪುರ ಗ್ರಾಮದ ಗ್ರಾಮಸ್ಥರು ಸ್ವಾಭಿಮಾನಿ ಕರವೇ ಕಾರ್ಯಕರ್ತರ ನೇತೃತ್ವದಲ್ಲಿ ಹೊನ್ನತ್ತಿ ಗ್ರಾಪಂ ಕಾರ್ಯಾಲಯಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಕೆರಿಮಲ್ಲಾಪುರ ಗ್ರಾಮದಿಂದ ಹೊನ್ನತ್ತಿ ಗ್ರಾಮ ಪಂಚಾಯಿತಿ ಕಾರ್ಯಾಲಯದವರೆಗೆ ನಡೆದ, ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರು, ಜಿಲ್ಲಾ ಪಂಚಾಯಿತಿ, ತಾಲೂಕಾ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿದರು.
ಪ್ರತಿಭಟನೆ ನೇತೃತ್ವ ವಹಿಸಿದ್ದ ಸ್ವಾಭಿಮಾನಿ ಕರವೇ ಕೆರಿಮಲ್ಲಾಪುರ ಗ್ರಾಮ ಘಟಕದ ಅಧ್ಯಕ್ಷ ಮಲ್ಲಿಕಾರ್ಜುನ ಹಿತ್ತಲಮನಿ ಮಾತನಾಡಿ, ಬೇಸಿಗೆ ಕಾಲ ಆರಂಭಗೊಂಡಿದೆ. ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಅಧಿಕಾರಿಗಳಾಗಲಿ ಹೊನ್ನತ್ತಿ ಗ್ರಾಮ ಪಂಚಾಯಿತಿ ಅಧಿಕಾರಿಗಳಾಗಲಿ ಕೆರಿಮಲ್ಲಾಪುರ ಗ್ರಾಮದಲ್ಲಿ ತಲೆದೋರಿರುವ ಕುಡಿಯುವ ನೀರಿನ ಸಮಸ್ಯೆ, ಬೀದಿ ದೀಪ ಸಮಸ್ಯೆ, ತುಂಬಿ ನಿಂತಿರುವ ಗಟಾರಗಳನ್ನು ಸ್ವಚ್ಛಗೊಳಿಸಲು ಕ್ರಮ ಕೈಗೊಳ್ಳದಿರುವುದು ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಹಿಡಿದ ಕನ್ನಡಿ ಎಂದು ಆಕ್ರೋಶ ವ್ಯಕ್ತಪಡಿಸಿದರು. ಗ್ರಾಮಸ್ಥರು ನಿತ್ಯ ಗಬ್ಬು ನಾರುತ್ತಿರುವ ಗಟಾರುಗಳು ಸೊಳ್ಳೆಗಳ ಕಡಿತ ಸಹಿಸಿಕೊಂಡು ಬೀದಿ ದೀಪಗಳಿಲ್ಲದ ಓಣಿಗಳಲ್ಲಿ ಕತ್ತಲ ಕೂಪದಲ್ಲಿ ಜೀವನ ಸಾಗಿಸುತ್ತಿದ್ದಾರೆ. ಈ ಕುರಿತಂತೆ ಹಲವಾರು ಬಾರಿ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರೂ ಸಮಸ್ಯೆಗಳ ಇತ್ಯರ್ಥಕ್ಕೆ ಮುಂದಾಗದಿರುವುದು ಜನರಲ್ಲಿ ಆಕ್ರೋಶ ಮಡುಗಟ್ಟುವಂತಾಗಿದೆ ಎಂದು ದೂರಿದರು.
ಗ್ರಾಮಸ್ಥರ ಪಟ್ಟು ಗ್ರಾಪಂಗೆ ಮುತ್ತಿಗೆ ಹಾಕಿದ್ದ ಸ್ವಾಭಿಮಾನಿ ಕರವೇ ಕಾರ್ಯಕರ್ತರು ಮತ್ತು ಗ್ರಾಮಸ್ಥರನ್ನು ಸಮಾಧಾನಪಡಿಸಲು ಹೊನ್ನತ್ತಿ ಗ್ರಾಪಂ ಅಭಿವೃದ್ಧಿ ಅಧಿಕಾರಿ ರಾಠೋಡ ಮುಂದಾಗಿದ್ದರಿಂದ ಉದ್ನಿಗ್ನಗೊಂಡ ಸಾರ್ವಜನಿಕರು ಪಿಡಿಓ ರಾಠೋಡ ಅವರನ್ನು ಗ್ರಾಪಂ ಕಾರ್ಯಾಲಯದಲ್ಲಿ ಕೂಡಿಹಾಕಿ ತಾಲೂಕು ಪಂಚಾಯಿತಿ ಅಧಿಕಾರಿಗಳು ಸ್ಥಳಕ್ಕೆ ಆಗಮಿಸುವವರೆಗೂ ಗ್ರಾಪಂಗೆ ಹಾಕಿರುವ ಬೀಗ ತೆರವುಗೊಳಿಸುವುದಿಲ್ಲ ಎಂದು ಪಟ್ಟು ಹಿಡಿದರು. ಸುದ್ದಿ ತಿಳಿದು ಪ್ರತಿಭಟನಾ ಸ್ಥಳಕ್ಕೆ ಆಗಿಮಿಸಿದ ತಾಪಂ ಇಓ ಎಸ್. ಉಜನೆಪ್ಪ ಗ್ರಾಮಸ್ಥರೊಂದಿಗೆ ಚರ್ಚಿಸಿ ಕೇರಿಮಲ್ಲಾಪುರ ಗ್ರಾಮದೊಳಗೆ ಸಂಚರಿಸಿ, ಸಮಸ್ಯೆ ಇತ್ಯರ್ಥಕ್ಕೆ ತಕ್ಷಣ ಸ್ಪಂದಿಸಿದರು. ಇದರಿಂದಾಗಿ ಶಾಂತಗೊಂಡ ಗ್ರಾಮಸ್ಥರು ಪ್ರತಿಭಟನೆಯಿಂದ ಹಿಂದೆ ಸರಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.