ಮತದಾನ ಪ್ರಮಾಣ
ಹಾವೇರಿ: ಹಾವೇರಿ ಜಿಲ್ಲೆಯ ಆರು ವಿಧಾನಸಭೆ ಕ್ಷೇತ್ರಗಳಿಗೆ ಭಾನುವಾರ ನಡೆದ ಚುನಾವಣೆಯಲ್ಲಿ ಸರಾಸರಿ ಶೇ. 79.3ಷ್ಟು ಮತದಾನವಾಗಿದೆ. ಹಾವೇರಿ (ಮೀಸಲು) ವಿಧಾನಸಭೆ ಕ್ಷೇತ್ರದಲ್ಲಿ ಶೇ. 74.4ರಷ್ಟು ಮತದಾನವಾಗಿದ್ದರೆ, ಬ್ಯಾಡಗಿ ವಿಧಾನಸಭೆ ಕ್ಷೇತ್ರಕ್ಕೆ ಶೇ. 77ರಷ್ಟು ಮತದಾನವಾಗಿದೆ. ರಾಣಿಬೆನ್ನೂರು ವಿಧಾನಸಭೆ ಕ್ಷೇತ್ರದಲ್ಲಿ ಶೇ. 76.5, ಹಿರೇಕೆರೂರು ವಿಧಾನಸಭೆ ಕ್ಷೇತ್ರದಲ್ಲಿ ಶೇ. 66.2ರಷ್ಟು ಮತದಾನವಾಗಿದೆ. ಹಾನಗಲ್ ಹಾಗೂ ಶಿಗ್ಗಾಂವಿ ವಿಧಾನಸಭೆ ಮತಕ್ಷೇತ್ರದಲ್ಲಿ ತಲಾ ಶೇ. 80 ಮತ್ತು ಶೇ. 77.84ರಷ್ಟು ಮತದಾನವಾಗಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಹೃದಯಾಘಾತ: ಶಿಕ್ಷಕಿ ಸಾವು
ಹಾವೇರಿ: ಚುನಾವಣೆ ಕಾರ್ಯಕ್ಕೆ ನಿಯೋಜನೆಗೊಂಡಿದ್ದ ಶಿಕ್ಷಕಿಯೊಬ್ಬರಿಗೆ ಹೃದಯಾಘಾತವಾಗಿ ಭಾನುವಾರ ಬೆಳಗ್ಗೆ ಮೃತಪಟ್ಟ ಘಟನೆ ಸಂಭವಿಸಿದೆ. ನೆಗಳೂರು ಗ್ರಾಮದ ಮತಗಟ್ಟೆ ಸಂಖ್ಯೆ 119ರಲ್ಲಿ ಎರಡನೇ ಮತಗಟ್ಟೆ ಅಧಿಕಾರಿಯಾಗಿದ್ದ ರಾಣಿಬೆನ್ನೂರು ತಾಲೂಕಿನ ತುಮ್ಮಿನಕಟ್ಟಿ ಗ್ರಾಮದ ನಿವಾಸಿ ಲೀಲಾವತಿ ಹುಚ್ಚಪ್ಪ ಮೂಡಬಾಗಿಲು (38) ಎಂಬುವರೆ ಹೃದಯಾಘಾತದಿಂದ ಸಾವನ್ನಪ್ಪಿದ ದುರ್ದೈವಿ ಶಿಕ್ಷಕಿ. ಹಿರೇಕೆರೂರು ತಾಲೂಕಿನ ಕಿರಗೇರಿಯ ಶಾಲೆಯಲ್ಲಿ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಲೀಲಾವತಿ ಅವರನ್ನು ಮತದಾನ ಕಾರ್ಯಕ್ಕೆ ಹಾವೇರಿ ತಾಲೂಕಿನ ನೆಗಳೂರು ಮತದಾನ ಕೇಂದ್ರಕ್ಕೆ ನಿಯೋಜಿಸಲಾಗಿತ್ತು. ಶನಿವಾರ ಸಂಜೆಯೇ ಮತದಾನ ಕೇಂದ್ರಕ್ಕೆ ಆಗಮಿಸಿದ್ದ ಅವರಿಗೆ ಏಕಾಏಕಿ ಹೃದಯಾಘಾತವಾಗಿ ತೀವ್ರ ಅಸ್ವಸ್ಥರಾದರು. ತಕ್ಷಣ ಅವರನ್ನು ಚಿಕಿತ್ಸೆಗಾಗಿ ರಾಣಿಬೆನ್ನೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಉಪಚಾರ ಫಲಿಸದೆ ಭಾನುವಾರ ಬೆಳಗ್ಗೆ ಸಾವನ್ನಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ. ಜಿಲ್ಲಾಧಿಕಾರಿ ಹಾಗೂ ಜಿಲ್ಲಾಡಳಿತದ ವತಿಯಿಂದ ಸಂತಾಪ ಸೂಚಿಸಲಾಯಿತು.
ಕಾಂಗ್ರೆಸ್ ಗೆಲವು ಖಚಿತ
ಹಾವೇರಿ: ಬಿಜೆಪಿ ಸರ್ಕಾರದ ಭ್ರಷ್ಟಾಚಾರದಿಂದ ಬೇಸತ್ತಿರುವ ಜನತೆ ಕಾಂಗ್ರೆಸ್ನತ್ತ ಮುಖ ಮಾಡಿದ್ದಾರೆ. ಆದ್ದರಿಂದ ಈ ಬಾರಿ ಜಿಲ್ಲೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಲಿದೆ. ಅಲ್ಲದೆ ರಾಜ್ಯದ ಆಡಳಿತ ಚುಕ್ಕಾಣಿಯನ್ನು ಕಾಂಗ್ರೆಸ್ ಹಿಡಿಯುವುದು ಶತಸಿದ್ಧ ಎಂದು ಶಿಗ್ಗಾಂವಿ ವಿಧಾನಸಭೆ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೈಯದ್ ಅಜ್ಜಂಪೀರ ಖಾದ್ರಿ ವಿಶ್ವಾಸ ವ್ಯಕ್ತಪಡಿಸಿದರು. ಭಾನುವಾರ ಕ್ಷೇತ್ರದ ವಿವಿಧ ಮತಗಟ್ಟೆಗಳಿಗೆ ತೆರಳಿ ಪರಿಶೀಲನೆ ನಡೆಸಿದ ನಂತರ ತಮ್ಮನ್ನು ಭೇಟಿಯಾದ ಸುದ್ದಿಗಾರರ ಜತೆ ಅವರು ಮಾತನಾಡಿದರು. ಬಿಜೆಪಿಯವರಿಗೆ ಮತದಾರ ತಕ್ಕಪಾಠ ಕಲಿಸಿದ್ದಾನೆ ಎಂಬುದು ಮೇ 8ರಂದು ಪ್ರಕಟಗೊಳ್ಳುವ ಫಲಿತಾಂಶದಿಂದ ಸಾಬೀತಾಗಲಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಕ್ಷೇತ್ರ ಅಭಿವೃದ್ಧಿಪಡಿಸುವ ಜತೆಗೆ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಮೂಲ ಸೌಕರ್ಯ ಒದಗಿಸಿಕೊಡಲು ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು ಎಂದು ಖಾದ್ರಿ ಹೇಳಿದರು.
ಗದಗ: ಎಚ್ಕೆ, ಬಂಡಿ, ಸಿ.ಸಿ. ಪಾಟೀಲ್ ಹಕ್ಕು ಚಲಾವಣೆ
ಗದಗ: ವಿಧಾನಸಭಾ ಚುನಾವಣೆ ಕಣದಲ್ಲಿರುವ ಅಭ್ಯರ್ಥಿಗಳು ಹಾಗೂ ಪ್ರಮುಖರು ಭಾನುವಾರ ಮತದಾನ ಮಾಡಿದರು. ಗದಗ ಕಾಂಗ್ರೆಸ್ ಅಭ್ಯರ್ಥಿ ಎಚ್.ಕೆ. ಪಾಟೀಲ ಹುಲಕೋಟಿಯಲ್ಲಿ ಕುಟುಂಬ ಸಮೇತರಾಗಿ ಆಗಮಿಸಿ ಮತದಾನ ಮಾಡಿ, ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದರು. ಮಾರ್ಚ್ 17ರಂದು ಗುಂಡೇಟಿನಿಂದ ಗಾಯಗೊಂಡಿದ್ದ ಮಾಜಿ ಸಚಿವ, ನರಗುಂದ ಶಾಸಕ ಸಿ.ಸಿ. ಪಾಟೀಲ ಎರಡು ದಿನಗಳ ಹಿಂದಷ್ಟೇ ನರಗುಂದ ಕ್ಷೇತ್ರಕ್ಕೆ ಮರಳಿದ್ದು, ಭಾನುವಾರ ಪಟ್ಟಣದ 66ನೇ ಮತಗಟ್ಟೆಯಲ್ಲಿ ಕುಟುಂಬ ಸಮೇತರಾಗಿ ಆಗಮಿಸಿ ಮತದಾನ ಮಾಡಿದರು. ಗುಂಡೇಟಿನಿಂದ ಚೇತರಿಸಿಕೊಂಡಿರುವ ಅವರು ಆಪ್ತರ ನೆರವಿನೊಂದಿಗೆ ಆಗಮಿಸಿ ಹಕ್ಕು ಚಲಾಯಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ಕಳಕಪ್ಪ ಬಂಡಿ ಗಜೇಂದ್ರಗಡ ಪಟ್ಟಣದಲ್ಲಿ ಕುಟುಂಬ ಸಮೇತರಾಗಿ ಆಗಮಿಸಿ ಮತದಾನ ಮಾಡಿದರು. ಗದಗನಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀಶೈಲಪ್ಪ ಬಿದರೂರ, ಬಿಎಸ್ಸಾರ್ ಅಭ್ಯರ್ಥಿ ಅನಿಲ ಮೆಣಸಿನಕಾಯಿ, ಕೆಜೆಪಿಯ ಎಸ್.ಬಿ. ಸಂಕಣ್ಣವರ ಮತದಾನ ಮಾಡಿದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಿ.ಎಸ್. ಗಡ್ಡದೇವರಮಠ ಲಕ್ಷ್ಮೇಶ್ವರದಲ್ಲಿ, ಜಿಲ್ಲಾ ಬಿಜೆಪಿ ಅಧ್ಯಕ್ಷ ಎಂ.ಎಸ್. ಕರಿಗೌಡ್ರ, ಜಿಲ್ಲಾ ಜೆಡಿಎಸ್ ಅಧ್ಯಕ್ಷ ವಿ.ವಿ. ಕಪ್ಪತ್ತನವರ ಶಿರಹಟ್ಟಿಯಲ್ಲಿ, ಕೆಜೆಪಿ ಜಿಲ್ಲಾಧ್ಯಕ್ಷ ರಾಜು ಕುರಡಗಿ ಗದಗನಲ್ಲಿ ಮತದಾನ ಮಾಡಿದರು. ರೋಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ.ಎಸ್. ಪಾಟೀಲ, ಶಿರಹಟ್ಟಿ ಕಾಂಗ್ರೆಸ್ ಅಭ್ಯರ್ಥಿ ರಾಮಕೃಷ್ಣ ದೊಡ್ಡಮನಿ, ಶಿರಹಟ್ಟಿ ಶಾಸಕ ರಾಮಣ್ಣ ಲಮಾಣಿ ಕುಂದ್ರಳ್ಳಿಯಲ್ಲಿ ಮತದಾನ ಮಾಡಿದರು. ಜಿಲ್ಲೆಯ ಪ್ರಮುಖ ಸ್ವಾಮೀಜಿಗಳೂ ಮತದಾನ ಮಾಡಿದರು.
ಗದಗ ಜಿಲ್ಲೆಯಲ್ಲಿ ಶೇ. 67.5 ಮತದಾನ
ಗದಗ: ಗದಗ ಜಿಲ್ಲೆಯಲ್ಲಿ ವಿಧಾನಸಭೆ ಚುನಾವಣೆ ಭಾನುವಾರ ಬಹುತೇಕ ಶಾಂತಿಯುತವಾಗಿ ಮುಗಿದಿದ್ದು, ಒಟ್ಟು ಶೇ. 67.5ರಷ್ಟು ಮತದಾನವಾದ ಬಗ್ಗೆ ವರದಿಯಾಗಿದೆ. ಗದಗ ಶೇ. 68, ರೋಣ ಶೇ. 61, ಶಿರಹಟ್ಟಿ ಶೇ. 61.5, ನರಗುಂದ ಶೇ. 74 ಮತದಾನವಾಗಿದೆ. 2008ರ ಚುನಾವಣೆಯಂತೆ ಈ ಬಾರಿಯೂ ನರಗುಂದ ಕ್ಷೇತ್ರದಲ್ಲಿ ಗರಿಷ್ಠ ಪ್ರಮಾಣದ ಮತದಾನ ಆಗಿದೆ. ಜಿಲ್ಲೆಯಲ್ಲಿ ಕಳೆದ ಬಾರಿಗಿಂತ ಶೇ. 3ರಷ್ಟು ಹೆಚ್ಚು ಮತದಾನ ಆಗಿದೆ. ಮತದಾರರ ಜಾಗೃತಿಗಾಗಿ ಚುನಾವಣಾ ಆಯೋಗ ಹಾಗೂ ಜಿಲ್ಲಾಡಳಿತ ಕೈಗೊಂಡ ಸ್ವೀಪ್ ಕಾರ್ಯಕ್ರಮ ಅಂಥ ದೊಡ್ಡ ಪರಿಣಾಮ ಬೀರಿದಂತೆ ಕಾಣುವುದಿಲ್ಲ. ತೀವ್ರ ಬಿಸಿಲು ಇದ್ದುದೂ ಮತದಾನ ಪ್ರಮಾಣ ಅಷ್ಟಾಗಿ ಹೆಚ್ಚದಿರಲು ಕಾರಣ ಇರಬೇಕೆಂದು ತರ್ಕಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

