ಹಾವೇರಿ

ಶುದ್ಧ ಕುಡಿಯುವ ನೀರು, ಸ್ವಚ್ಛತೆಗೆ ಶ್ರಮಿಸಿ

Published On :

ಕನ್ನಡಪ್ರಭ ವಾರ್ತೆ, ಹಿರೇಕೆರೂರು, ಮೇ 17
ತಾಲೂಕಿನ ಎಲ್ಲ ಗ್ರಾಮಗಳ ಜನತೆಗೆ ಉತ್ತಮ ಕುಡಿಯುವ ನೀರು ಪೂರೈಕೆ ಹಾಗೂ ಚರಂಡಿಗಳನ್ನು ಸ್ವಚ್ಛಗೊಳಿಸಿ ಎಲ್ಲರ ಆರೋಗ್ಯ ಕಾಪಾಡುವಲ್ಲಿ ಗ್ರಾಪಂ ಅಧಿಕಾರಿಗಳು ಹಾಗೂ ಅಭಿಯಂತರರು ಶ್ರಮಿಸಬೇಕು ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ತಾಲೂಕಿನ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ಮತ್ತು ತಾಪಂ ಅಧಿಕಾರಿಗಳ ಹಾಗೂ ಅಭಿಯಂತರರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸ್ವಚ್ಛತೆಗೆ ಆದ್ಯತೆ ನೀಡಿ: ತಾಲೂಕಿನ ಕೆಲ ಗ್ರಾಮಗಳಲ್ಲಿ ಡೆಂಘೀ ಜ್ವರದ ಪ್ರಕರಣಗಳು ಪತ್ತೆಯಾಗುತ್ತಿವೆ. ಕಾರಣ ಅಧಿಕಾರಿಗಳು ಕೂಡಲೇ ಅಂತಹ ಗ್ರಾಮಗಳಲ್ಲಿ ಠಿಕಾಣಿ ಹೂಡಿ ಸ್ವಚ್ಛತೆ ಹಾಗೂ ಶುದ್ಧ ಕುಡಿಯುವ ನೀರು ಪೂರೈಸಲು ಕಾರ್ಯಪ್ರವೃತ್ತರಾಗಬೇಕು. ತಕ್ಷಣದಿಂದಲೇ ಎಲ್ಲಾ ಗ್ರಾಮಗಳಲ್ಲಿರುವ ಚರಂಡಿ ಹಾಗೂ ಒಳಚರಂಡಿಗಳನ್ನು ಸ್ವಚ್ಛಗೊಳಿಸಬೇಕು. ಬಳಿಕ ಫಾಂಗಿಂಗ್ ಮಾಡಿ ಸೊಳ್ಳೆಗಳನ್ನು ನಿಯಂತ್ರಿಸಬೇಕು ಎಂದು ತಾಕೀತು ಮಾಡಿದರು.
ತಕ್ಷಣ ಕಾರ್ಯಪ್ರವೃತ್ತರಾಗಿ: ನೀರಿನ ಸಮಸ್ಯೆ ಉಲ್ಬಣಿಸಿರುವ ಗ್ರಾಮಗಳ ಬಗ್ಗೆ ತಕ್ಷಣ ತಮಗೆ ಮಾಹಿತಿ ನೀಡಿದರೇ ಕೂಡಲೇ ಕೊಳವೆ ಬಾವಿ ಕೊರೆಸಿ ನೀರು ಸರಬರಾಜಿಗೆ ಸೂಕ್ತ ವ್ಯವಸ್ಥೆ ಕೈಗೊಳ್ಳಲಾಗುವುದು. ಅಭಿಯಂತರರು ನಾಳೆಯಿಂದಲೇ ಗ್ರಾಮೀಣ ಪ್ರದೇಶಗಳಿಗೆ ತೆರಳಿ ಜನತೆಯ ಸಮಸ್ಯೆಗಳನ್ನು ತಿಳಿದು ಬಗೆಹರಿಸಲು ಯತ್ನಿಸಬೇಕು ಎಂದರು.
ಪಾರದರ್ಶಕ ಆಡಳಿತ ಮಾಡಿ: ತಾಲೂಕಿನ ಅಧಿಕಾರಿಗಳು ಪಾರದರ್ಶಕ, ಭ್ರಷ್ಟಾಚಾರ ಮುಕ್ತ, ಅಭಿವೃದ್ಧಿಯ ದೂರದೃಷ್ಟಿ ಇಟ್ಟುಕೊಂಡು ಕಾರ್ಯನಿರ್ವಹಿಸಲು ಮುಂದಾಗಬೇಕು ಎಂದು ಸಲಹೆ ಮಾಡಿದರು.
ಖಾತ್ರಿ ಅನುದಾನ ಸದ್ಬಳಕೆಯಾಗಲಿ: ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಅಡಿ ಕಳೆದ ಬಾರಿ ಕಡಿಮೆ ಪ್ರಮಾಣದ ಹಣ ಬಳಕೆಯಾಗಿರುವ ಮಾಹಿತಿ ಇದೆ. ಈ ಬಾರಿ ಯೋಜನೆಯ ನಿಯಮಾನುಸಾರ ಗ್ರಾಮೀಣ ಪ್ರದೇಶಗಳಲ್ಲಿ ಅಗತ್ಯವಿರುವ ಕಾಮಗಾರಿಗಳ ಬಗ್ಗೆ ಕ್ರಿಯಾ ಯೋಜನೆ ತಯಾರಿಸಿ ಅಭಿವೃದ್ಧಿಪಡಿಸುವ ಮೂಲಕ ಹೆಚ್ಚಿನ ಹಣವನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.
ಸ್ವಚ್ಛತಾ ಆಂದೋಲನ ನಡೆಸಿ: ಗ್ರಾಮ ಪಂಚಾಯಿತಿ ಅಧಿಕಾರಿಗಳು ನೀರಿನ ಗುಣಮಟ್ಟ ಕಾಪಾಡುವ ಉದ್ದೇಶದಿಂದ ಜಲಗಾರವನ್ನು ಪ್ರತಿ ವಾರಕ್ಕೊಮ್ಮೆ ಸ್ವಚ್ಛಗೊಳಿಸಬೇಕು. ಗ್ರಾಮಗಳ ಸ್ವಚ್ಛತೆ ಬಗ್ಗೆ ಜನತೆಯ ಸಹಯೋಗದೊಂದಿಗೆ ಸ್ಥಳೀಯ ಅಧಿಕಾರಿಗಳು ಸ್ವಚ್ಛತಾ ಆಂದೋಲನ ನಡೆಸುವ ಮೂಲಕ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.
ನೀರಿನ ಸಮಸ್ಯೆ ನಿವಾರಿಸಿ: ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷ ಚಂದ್ರು ಅಣ್ಣಪ್ಪನವರ ಮಾತನಾಡಿ, ಭವಿಷ್ಯದ ದೃಷ್ಟಿಯಿಂದ ಗ್ರಾಮೀಣ ಪ್ರದೇಶಗಳ ನೀರಿನ ಸಮಸ್ಯೆ ನಿವಾರಣೆಗೆ ಅಧಿಕಾರಿಗಳು ಶಾಶ್ವತ ಯೋಜನೆಗಳನ್ನು ರೂಪಿಸಬೇಕು. ಅಭಿಯಂತರರು ವಾರಕ್ಕೊಮ್ಮೆ ಎಲ್ಲ ಗ್ರಾಮಗಳಿಗೆ ಭೇಟಿ ನೀಡಿ ಉದ್ಯೋಗ ಖಾತ್ರಿ ಯೋಜನೆಯ ಕಾಮಗಾರಿಗಳ ಉಸ್ತುವಾರಿಯನ್ನು ಪ್ರಾಮಾಣಿಕವಾಗಿ ನೋಡಿಕೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ತಾಪಂ ಅಧ್ಯಕ್ಷೆ ಗದಿಗೆವ್ವ ಬಿದರಿ, ಜಿಪಂ ಕಾರ್ಯನಿರ್ವಾಹಕ ಅಭಿಯಂತರ ರುದ್ರ ಪಶುಪತಿ, ಹೆಸ್ಕಾಂ ಅಭಿಯಂತರ ರಮೇಶ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎನ್. ಮಾಳಗೇರ ಸ್ವಾಗತಿಸಿ, ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.