ಅಕ್ಷರ ದಾಸೋಹದಿಂದ ಸಾಕ್ಷರತೆ ಪ್ರಮಾಣ ಹೆಚ್ಚು
ರಾಣಿಬೆನ್ನೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣಾ ತಮ್ಮ ಅಧಿಕಾರವಧಿಯಲ್ಲಿ ತಂದಿದ್ದ ಅಕ್ಷರ ದಾಸೋಹ ಯೋಜನೆಯಿಂದಾಗಿ ರಾಜ್ಯದಲ್ಲಿ ಸಾಕ್ಷರತೆ ಪ್ರಮಾಣ ಹೆಚ್ಚಾಗಲು ಕಾರಣವಾಗಿದೆ ಎಂದು ಶಾಸಕ ಕೆ.ಬಿ. ಕೋಳಿವಾಡ ಹೇಳಿದರು.
ತಾಲೂಕು ಪಂಚಾಯಿತಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಾಗೂ ತಾಲೂಕು ಅಕ್ಷರ ದಾಸೋಹ ಕಾರ್ಯಕ್ರಮ ಸಹಾಯಕ ನಿರ್ದೇಶಕರ ಕಚೇರಿ ಆಶ್ರಯದಲ್ಲಿ ನಗರದ ಮೌನೇಶ್ವರ ಪ್ರೌಢಶಾಲೆಯಲ್ಲಿ ಏರ್ಪಡಿಸಿದ್ದ, 2013-14ನೇ ಸಾಲಿನ ಶೈಕ್ಷಣಿಕ ವರ್ಷದ ಅಕ್ಷರ ದಾಸೋಹ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಎಸ್.ಎಂ. ಕೃಷ್ಣಾರವರು ರಾಜ್ಯದ ಮುಖ್ಯಮಂತ್ರಿಗಳಾಗಿದ್ದ ಸಮಯದಲ್ಲಿ ರಾಜ್ಯದ ಬಡವರ ಮಕ್ಕಳು ನಿತ್ಯ ಶಾಲೆಯನ್ನು ತಪ್ಪಿಸುವುದರೊಂದಿಗೆ, ಶಿಕ್ಷಣದಿಂದ ವಂಚಿತಗೊಳ್ಳುತ್ತಿರುವುದನ್ನು ಮನಗಂಡು ರಾಜ್ಯ ಹಾಗೂ ಕೇಂದ್ರ ಸರ್ಕಾರದ ಅನುದಾನದಡಿ ಅಕ್ಷರ ದಾಸೋಹದ ಮಧ್ಯಾಹ್ನದ ಬಿಸಿಯೋಟ ಯೋಜನೆಯನ್ನು ಜಾರಿಗೆ ತಂದರು. ಇದರ ಪರಿಣಾಮ ಶಿಕ್ಷಣದಿಂದ ವಂಚಿತರಾಗುತ್ತಿದ್ದ ಮಕ್ಕಳು ನಿತ್ಯ ತಪ್ಪದೆ ಶಾಲೆಗೆ ಬರಲಾರಂಭಿಸಿದರು. ಇದು ರಾಜ್ಯದ ಸಾಕ್ಷರತೆ ಪ್ರಮಾಣ ಹೆಚ್ಚಳಕ್ಕೆ ಕಾರಣವಾಗಿದೆ ಎಂದರೆ ತಪ್ಪಾಗಲಾರದೆಂದು ಶಾಸಕ ಕೆ.ಬಿ. ಕೋಳಿವಾಡ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.
ತಾಲೂಕು ಅಕ್ಷರ ದಾಸೋಹ ಕಾರ್ಯಕ್ರಮದ ಸಹಾಯಕ ನಿರ್ದೇಶಕ ಎಂ.ಎಚ್. ಪಾಟೀಲ ಪ್ರಾಸ್ತಾವಿಕ ಮಾತನಾಡಿ, 10 ವರ್ಷಗಳ ಅವಧಿಯಲ್ಲಿ ಸಾಧಿಸಿರುವ ಪ್ರಗತಿ ಕುರಿತು ಸಮಗ್ರ ಮಾಹಿತಿ ನೀಡಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಕೆ. ಲಕ್ಷ್ಮಣ, ಶಿಕ್ಷಣ ಇಲಾಖೆ ಜೆಡ್ ಎಂ. ಖಾಜಿ, ಕೆ.ಕೆ. ಶಿರೋಳಕರ ಮಾತನಾಡಿದರು. ಮೌನೇಶ್ವರ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಕಣಾಚಾರಿ ಅರ್ಕಾಚಾರಿ ಅಧ್ಯಕ್ಷತೆ ವಹಿಸಿದ್ದರು. ಎಸ್. ಎಚ್. ನಿಂಬರಗಿ, ಎಚ್.ಎನ್. ಅರ್ಕಾಚಾರಿ, ವಿಠಲಾಚಾರ ಬಡಿಗೇರ, ಶಿಕ್ಷಕರಾದ ಕೆ.ಎನ್. ಕಾಟೇನಹಳ್ಳಿ, ಜಿ.ಎಸ್. ಬಡಿಗೇರ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

