ರ್ಯಾಗಿಂಗ್ ವಿದ್ಯಾರ್ಥಿ ಭವಿಷ್ಯಕ್ಕೆ ಮಾರಕ
ಕನ್ನಡಪ್ರಭ ವಾರ್ತೆ, ಹಾವೇರಿ, ನ. 9
ಶಿಕ್ಷಣ ಕ್ಷೇತ್ರದಲ್ಲಿ ಸೌಲಭ್ಯಗಳು ಹೆಚ್ಚಿದ್ದು, ವಿದ್ಯಾರ್ಥಿಗಳು ಅವುಗಳನ್ನು ಸದ್ಬಳಕೆ ಮಾಡಿಕೊಂಡು ಉತ್ತಮ ಪ್ರಜೆಗಳಾಗುವ ಬದಲು ರ್ಯಾಗಿಂಗ್ ಪಿಡುಗಿಗೆ ಅಂಟಿಕೊಂಡು ತಮ್ಮ ಭವಿಷ್ಯದ ಮೇಲೆ ತಾವೇ ಕಲ್ಲು ಹಾಕಿಕೊಳ್ಳುತ್ತಿದ್ದಾರೆ ಎಂದು ಇಲ್ಲಿಯ ಒಂದನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಡಿ.ಆರ್. ರೇಣಕೆ ಕಳವಳ ವ್ಯಕ್ತಪಡಿಸಿದರು.
ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆ ಅಂಗವಾಗಿ ನಗರದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಶನಿವಾರ ಆಯೋಜಿಸಿದ್ದ ಕಾನೂನು ಅರಿವು ನೆರವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಕಾಲೇಜುಗಳಲ್ಲಿ ರ್ಯಾಗಿಂಗ್ಗೆ ಒಳಗಾಗಿ ದೇಶದ ಘನತೆ, ಗೌರವಕ್ಕೆ ಧಕ್ಕೆ ತರುತ್ತಿದ್ದಾರೆ. ಅದರ ಬದಲು ಉತ್ತಮ ಪ್ರಜೆಗಳಾಗಿ ದೇಶದ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದರು.
ರ್ಯಾಗಿಂಗ್ ನಿಷೇಧ ಕಾಯಿದೆ ಕುರಿತು ಉಪನ್ಯಾಸ ನೀಡಿದ ಹಿರಿಯ ದಿವಾಣಿ ನ್ಯಾಯಾಧೀಶ ಎಂ.ವಿ. ಚನ್ನಕೇಶವ ರೆಡ್ಡಿ, ವಿದ್ಯಾರ್ಥಿಗಳು ಪಾಶ್ಚಾತ್ಯ ಸಂಸ್ಕೃತಿಗೆ ಜೋತು ಬಿದ್ದಿದ್ದರಿಂದ ರ್ಯಾಗಿಂಗ್ ಪ್ರವೃತ್ತಿ ಹೆಚ್ಚಾಗಿದೆ. ಇದನ್ನು ತಡೆಗಟ್ಟಲು ದೇಶದಲ್ಲಿ ರ್ಯಾಗಿಂಗ್ ನಿಷೇಧ ಕಾಯ್ದೆ ಜಾರಿಯಲ್ಲಿದೆ. ರ್ಯಾಗಿಂಗ್ಗೆ ಒಳಗಾದ ವಿದ್ಯಾರ್ಥಿಗಳಿಗೆ 24 ಗಂಟೆ ಒಳಗೆ ರಕ್ಷಣೆ ನೀಡಲಾಗುವುದು. ರ್ಯಾಗಿಂಗ್ ಮಾಡಿದವರ ವಿರುದ್ಧ ಕಾನೂನು ಕ್ರಮ ಕೈಗೊಂಡು ಕಠಿಣ ಶಿಕ್ಷೆ ವಿಧಿಸುವುದರ ಜತೆಗೆ ವ್ಯಾಸಂಗ ಪ್ರಮಾಣಪತ್ರ ಮತ್ತು ಪತ್ರಿಕೆಗಳಲ್ಲಿ ಅವರ ನಡಾವಳಿ, ಭಾವಚಿತ್ರ ಪ್ರಕಟಿಸಲಾಗುವುದು ಎಂದರು.
ವಿದ್ಯಾರ್ಥಿಗಳಲ್ಲಿ ಮತ್ತು ಪಾಲಕರಲ್ಲಿ ರ್ಯಾಗಿಂಗ್ ಬಗ್ಗೆ ತಿಳಿವಳಿಕೆ ಮೂಡಿಸಲು ದೇಶದ ಎಲ್ಲ ರಾಜ್ಯಗಳಲ್ಲಿ ಸುಪ್ರೀಂ ಕೋರ್ಟ್ ರ್ಯಾಗಿಂಗ್ ಕುರಿತು ಕಾಯ್ದೆ ರೂಪಿಸಲು ಆದೇಶಿಸಿದ್ದು, ಕೆಲ ರಾಜ್ಯಗಳಲ್ಲಿ ಈ ಕಾಯ್ದೆ ಈಗಾಗಲೇ ಜಾರಿಯಲ್ಲಿದೆ ಎಂದು ಹೇಳಿದರು.
ಜಿಲ್ಲಾ ಲೈಂಗಿಕ ಶಿಕ್ಷಣ ಮಾಹಿತಿ ಕೇಂದ್ರದ ಜಿಲ್ಲಾ ನಿರ್ದೇಶಕ ಎನ್.ಸಿ. ಪಾಲಾಕ್ಷ, ಲೈಂಗಿಕ ಕಾಯಿಲೆಗಳು ಮತ್ತು ತಡೆಗಟ್ಟುವಿಕೆ ಕುರಿತು ಉಪನ್ಯಾಸ ನೀಡಿ, ಪ್ರತಿಯೊಬ್ಬರೂ ಏಕ ಪತಿತ್ವ ಹಾಗೂ ಏಕ ಪತ್ನಿತ್ವ ಪದ್ಧತಿ ಅನುಸರಿಸಿದಾಗ ಮಾತ್ರ ಈ ಕಾಯಿಲೆ ತಡೆಗಟ್ಟಬಹುದು ಎಂದು ಅಭಿಪ್ರಾಯಪಟ್ಟರು.
ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಡಾ. ಕೆ.ಬಿ. ಪ್ರಕಾಶ ಮಾತನಾಡಿ, ವಿದ್ಯಾರ್ಥಿಗಳು ದುಷ್ಟ ವಿಚಾರಗಳಿಗೆ ಕಿವಿಗೊಡದೆ ವಿದ್ಯಾಲಯದ ಸೌಲಭ್ಯ ಪಡೆದು ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ನ್ಯಾಯಾಧೀಶ ಎನ್. ಶ್ರೀಪಾದ, ಎಸ್.ಬಿ. ಕೆಂಭಾವಿ, ರಾಷ್ಟ್ರೀಯ ಸೇವಾ ಯೋಜನೆ ಅಧಿಕಾರಿ ಪ್ರೊ. ಕಾಶಿನಾಥ ಬಿ., ವಕೀಲರ ಸಂಘದ ಪದಾಧಿಕಾರಿಗಳಾದ ಎಸ್.ಎಸ್. ಹಿರೇತನದ, ವಿ.ಎಸ್. ಅರಳಿಕಟ್ಟಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

