ಹಾವೇರಿ

ಕಳಪೆ ಹತ್ತಿ ಬೀಜ: ಸಮೀಕ್ಷೆ ನಡೆಸಿ ಸರ್ಕಾರಕ್ಕೆ ವರದಿ

Published On :

ಹಾವೇರಿ: ಕೃಷಿ ಇಲಾಖೆ ಮೂಲಕ ರೈತರಿಗೆ ಯಾವುದೇ ಬಿಟಿ ಹತ್ತಿ ಬೀಜವನ್ನು ವಿತರಣೆ ಮಾಡಿಲ್ಲ. ರೈತರು ಖಾಸಗಿ ಮಾರಾಟಗಾರರಿಂದ ಬೀಜ ಪಡೆದು ಬಿತ್ತನೆ ಮಾಡಿದ್ದು, ಅದು ಕಳಪೆಯಾಗಿದೆ ಎಂದು ದೂರು ನೀಡಿದ ಹಿನ್ನೆಲೆಯಲ್ಲಿ ತಜ್ಞರನ್ನು ಕರೆಸಿ ಕ್ಷೇತ್ರಗಳ ಸಮೀಕ್ಷೆ ಮಾಡಿಸಲಾಗುತ್ತಿದೆ. ವರದಿಯನ್ನು ಸರ್ಕಾರಕ್ಕೆ ಕಳುಹಿಸಲಾಗಿದೆ ಎಂದು ಜಿಪಂ ಅಧ್ಯಕ್ಷ ರಾಜೇಂದ್ರ ಹಾವೇರಣ್ಣನವರ ಹೇಳಿದರು.
ಜಿಪಂ ಸಭಾಭವನದಲ್ಲಿ ಸೋಮವಾರ ಜರುಗಿದ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕಳಪೆ ಹತ್ತಿ ಬೀಜದ ಬಗ್ಗೆ ಸಭೆಯಲ್ಲಿ ವಿಷಯ ಪ್ರಸ್ತಾಪವಾದಾಗ ಅಧ್ಯಕ್ಷರು ಮಾತನಾಡಿ, ಇಲಾಖೆಯಿಂದ ಬಿಟಿ ಹತ್ತಿ ಬೀಜ ವಿತರಣೆ ಮಾಡಿಲ್ಲ. ಆದರೆ ಖಾಸಗಿಯಾಗಿ ಖರೀದಿಸಿ ಬಿತ್ತಿದ ಬೀಜ ಕಳಪೆಯಾಗಿದೆ ಎಂದು ರೈತರು ದೂರು ನೀಡಿದ್ದಾರೆ. ಸರಿಯಾಗಿ ಹತ್ತಿ ಬೆಳೆ ಬಾರದೆ ರೈತರು ಸಂಕಷ್ಟದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಎಲ್ಲ ರೈತರ ಹೊಲಗಳಿಗೆ ಭೇಟಿ ನೀಡಿ ಸಮೀಕ್ಷೆ ನಡೆಸಲಾಗಿದೆ. ತಜ್ಞರು ನೀಡಿದ ವರದಿಯನ್ನು ಸರ್ಕಾರಕ್ಕೆ ಕಳುಹಿಸಲಾಗಿದೆ ಎಂದು ತಿಳಿಸಿದರು.
ಜಿಲ್ಲೆಯ ಗ್ರಾಪಂ ಮತ್ತು ಪಟ್ಟಣದಲ್ಲಿರುವ ನೀರಿನ ಟ್ಯಾಂಕ್‌ಗಳ ಸ್ವಚ್ಛತೆಗಾಗಿ ಜಿಪಂ ಸದಸ್ಯರ ಅನುಮತಿ ಪಡೆದು, ಅನುದಾನಕ್ಕಾಗಿ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗುವುದು ಎಂದರು. ನಂತರ ನೀರಿನ ಸ್ವಚ್ಛತೆ ಬಗ್ಗೆ ಪ್ರಾತ್ಯಕ್ಷಿಕೆಯಿತ್ತು.
ಇಂಗ್ಲಿಷ್ ಆಹ್ವಾನ ಪತ್ರಿಕೆಗೆ ಆಕ್ಷೇಪ: ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ನ. 27ರಿಂದ ಜರುಗುವ ರಾಷ್ಟ್ರ ಮಟ್ಟದ ಪೈಕಾ ಕ್ರೀಡಾಕೂಟದ ಆಹ್ವಾನ ಪತ್ರಿಕೆಯನ್ನು ಇಂಗ್ಲಿಷ್‌ನಲ್ಲಿ ಮುದ್ರಿಸಿದ ಬಗ್ಗೆ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರು. ಇದನ್ನು ಕನ್ನಡದಲ್ಲೂ ಮುದ್ರಿಸಬೇಕೆಂದು ಒತ್ತಾಯಿಸಿದರು. ಜಿಪಂ ಸಿಇಒ ಆಂಜನೆಪ್ಪ ಮಾತನಾಡಿ, ಜಿಲ್ಲಾಧಿಕಾರಿ ಜತೆ ಚರ್ಚಿಸಿ ಕನ್ನಡದಲ್ಲಿ ಮುದ್ರಿಸಲಾಗುವುದೆಂದು ಸಭೆಗೆ ತಿಳಿಸಿದರು.
ಮೈಸೂರು ದಸರಾ ಮಹೋತ್ಸವದ ಮೆರವಣಿಗೆಯಲ್ಲಿ ಜಿಲ್ಲೆಯಿಂದ ಸಂತ ಶ್ರೇಷ್ಠ ಕನಕದಾಸರ ಸ್ತಬ್ಧಚಿತ್ರವನ್ನು ಪ್ರದರ್ಶಿಸಲಾಗಿತ್ತು. ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಸಭೆಯಲ್ಲಿ ಈ ಕುರಿತು ಅನುಮೋದನೆ ಪಡೆಯಲಾಗಿದೆ ಎಂದು ತಿಳಿಸಿದರು.
44 ಅಂಗನವಾಡಿ ಕಟ್ಟಡ: ಹಾನಗಲ್ಲ ತಾಲೂಕಿನಲ್ಲಿ 38 ಅಂಗನವಾಡಿ ಕಟ್ಟಡಗಳು ಶಿಥಿಲಗೊಂಡಿದ್ದು, 44 ಕಟ್ಟಡಗಳ ಅಗತ್ಯವಿದೆ. ಈ ಕಟ್ಟಡಗಳ ನಿರ್ಮಾಣವನ್ನು ಆರ್‌ಐಡಿಎಫ್, ಎಸ್‌ಡಿಪಿ ಹಾಗೂ ಸುವರ್ಣ ಗ್ರಾಮೋದಯ ಯೋಜನೆಗಳಡಿ ಹಂತಹಂತವಾಗಿ ನಿರ್ಮಿಸಲು ಕ್ರಮ ಕೈಗೊಳ್ಳಲಾಗುವುದೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿ ತಿಳಿಸಿದರು. ಸಭೆಯಲ್ಲಿ ಜಿಪಂ ಉಪಾಧ್ಯಕ್ಷೆ ಶೋಭಾ ನಿಸ್ಸೀಮಗೌಡ್ರ, ಜಿಪಂ ಉಪಕಾರ್ಯದರ್ಶಿ ಜಿ. ಗೋವಿಂದಸ್ವಾಮಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.