ಕಾರ್ಮಿಕರ ಧರಣಿ
ಕನ್ನಡಪ್ರಭ ವಾರ್ತೆ, ಹಾವೇರಿ, ನ. 25
ಜಿ.ಎಂ. ಶುಗರ್ಸ್ ಕಾರ್ಖಾನೆಯ ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಹಾಗೂ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಎಐಟಿಯುಸಿ ನೇತೃತ್ವದಲ್ಲಿ ಮೂವರು ಕಾರ್ಮಿಕರು ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಅನಿರ್ದಿಷ್ಟಾವಧಿ, ಅಹೋರಾತ್ರಿ ಧರಣಿ ಸತ್ಯಾಗ್ರಹ ಆರಂಭಿಸಿದರು.
ಎಐಟಿಯುಸಿ ನೇತೃತ್ವದಲ್ಲಿ ಕಾರ್ಮಿಕರಾದ ಮಂಜುನಾಥ ಹೆಗ್ಗಣ್ಣವರ, ಲೋಹಿತ್ ಹೊಂಕಳದ, ಜಿ.ಟಿ. ಹಾವಣಗಿ ಧರಣಿ ಸತ್ಯಾಗ್ರಹ ಆರಂಭಿಸಿದ್ದಾರೆ. ಕಾರ್ಖಾನೆ ತಮ್ಮನ್ನು ಕೆಲಸಕ್ಕೆ ತೆಗೆದುಕೊಳ್ಳುವವರೆಗೂ ಹೋರಾಟ ಮುಂದುವರಿಸಲು ನಿರ್ಧರಿಸಿದ್ದಾರೆ.
1991ರಿಂದ ಕಾರ್ಮಿಕರಾಗಿ ಕಾರ್ಖಾನೆಯಲ್ಲಿ ದುಡಿಯುತ್ತಿದ್ದೇವೆ. ಕಾರ್ಮಿಕ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದೇವೆಂಬ ಕಾರಣಕ್ಕಾಗಿ ಮೂವರನ್ನೂ ಶೋಷಿಸಲಾಗುತ್ತಿದೆ. ಯಾವುದೇ ಆಮಿಷಕ್ಕೆ ಬಲಿಯಾಗದೆ ದುಡಿಯಲು ಕೆಲಸ ಕೊಡಿ ಎಂದು ಪಟ್ಟು ಹಿಡಿದಿದ್ದೇವೆ. ಆದರೆ, ಮಾಲೀಕರು ಆಸ್ಪದ ಕೊಡುತ್ತಿಲ್ಲ. ಕೆಲಸಕ್ಕೆ ಸೇರಿಸಿಕೊಳ್ಳದಿರಲು ಲಿಖಿತವಾಗಿ ಕಾರಣವನ್ನೂ ಕೊಡುತ್ತಿಲ್ಲ. ಕಾರ್ಖಾನೆ ಕಾರ್ಮಿಕ ವಿರೋಧಿ ನೀತಿ ಅನುಸರಿಸುತ್ತಿದ್ದು, ನಮ್ಮ ಬೇಡಿಕೆ ಈಡೇರುವವರೆಗೂ ಜಿಲ್ಲಾಧಿಕಾರಿ ಕಚೇರಿ ಆವರಣ ಬಿಟ್ಟು ಕದಲುವುದಿಲ್ಲ ಎಂದು ತಿಳಿಸಿದರು.
ನಿರಂತರ ಶೋಷಣೆ
ಎಐಟಿಯುಸಿ ಜಿಲ್ಲಾಧ್ಯಕ್ಷ ಹೊನ್ನಪ್ಪ ಮರೆಮ್ಮನವರ ಮಾತನಾಡಿ, ಸಂಗೂರ ಸಕ್ಕರೆ ಕಾರ್ಖಾನೆಯ ಮಾಲೀಕ ವರ್ಗ ರಾಜಕೀಯ ಬಲ ಬಳಸಿಕೊಂಡು ಕಾರ್ಮಿಕರನ್ನು ನಿರಂತರವಾಗಿ ಶೋಷಣೆ ಮಾಡುತ್ತಲೇ ಬಂದಿದೆ. ಈ ಮೂವರು ಕಾರ್ಮಿಕರನ್ನು ಕೆಲಸಕ್ಕೆ ತೆಗೆದುಕೊಳ್ಳುತ್ತಿಲ್ಲ. ಕೆಲವು ಕಾರ್ಮಿಕರಿಗೆ ಸ್ವಯಂನಿವೃತ್ತಿ ತೆಗೆದುಕೊಳ್ಳಲು ಪ್ರೋತ್ಸಾಹಿಸುತ್ತಿದೆ. ಕಾರ್ಮಿಕರ ಸಂಖ್ಯೆ ಹೆಚ್ಚಾಗಿದ್ದು ಕಡಿತಗೊಳಿಸುವುದಾಗಿ ಮಾಲೀಕರು ಹೇಳುತ್ತಿದ್ದಾರೆ. ಇದೇ ವೇಳೆ, ಸ್ಥಳೀಯ ಕಾರ್ಮಿಕರು ಮಾಡುವ ಕೆಲಸಕ್ಕೆ ಉತ್ತರಪ್ರದೇಶ, ಬಿಹಾರ ರಾಜ್ಯದ 70ಕ್ಕೂ ಹೆಚ್ಚು ಕಾರ್ಮಿಕರನ್ನು ಕೆಲಸಕ್ಕೆ ತೆಗೆದುಕೊಂಡಿದ್ದಾರೆ. ಈ ಹಿಂದೆ ಕಾರ್ಖಾನೆಯನ್ನು ಜಿ.ಎಂ. ಶುಗರ್ಸ್ನವರು ಗುತ್ತಿಗೆ ಪಡೆದ ಸಂದರ್ಭದಲ್ಲಿ ಕಾರ್ಮಿಕರಿಗೆ ನೀಡಿದ ಭರವಸೆಗಳನ್ನು ಈಡೇರಿಸಿಲ್ಲ. ಈಗ ಹೋರಾಟ ಅನಿವಾರ್ಯವಾಗಿದೆ ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

