ನಮ್ಮ ಸಂವಿಧಾನ ಎಲ್ಲ ಕಾನೂನುಗಳ ತಾಯಿ
ಹಾವೇರಿ: ಭಾರತದ ಸಂವಿಧಾನ ಎಲ್ಲ ಕಾನೂನುಗಳ ತಾಯಿ. ಈ ಅದ್ಭುತ ಸಂವಿಧಾನವನ್ನು ರಚಿಸಲು 207 ಕಾನೂನು ಪಂಡಿತರ ಒಂದು ನಿಯೋಗ ನೇಮಕಗೊಂಡಿತ್ತು. ಅವರು ಕೂಲಂಕಷವಾಗಿ ಅಧ್ಯಯನ ಮಾಡಿ ಸಂವಿಧಾನವನ್ನು ನ. 26, 1949ರಂದು ಒಪ್ಪಿ ಮಾನ್ಯತೆ ನೀಡಿದರು. ಕಾನೂನು ಪಂಡಿತರಿಗೆ ಗೌರವ ಸಲ್ಲಿಸುವ ದಿಸೆಯಲ್ಲಿ ಇದನ್ನು ಕಾನೂನು ದಿನವನ್ನಾಗಿ ಆಚರಿಸಲಾಗುತ್ತದೆ ಎಂದು ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಡಿ.ಆರ್. ರೇಣಕೆ ತಿಳಿಸಿದರು.
ಮಂಗಳವಾರ ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘದ ಆಶ್ರಯದಲ್ಲಿ ಕಾನೂನು ದಿನಾಚರಣೆ ಅಂಗವಾಗಿ ಸಾರಿಗೆ ಇಲಾಖೆ ಸಹಯೋಗದಲ್ಲಿ ನ್ಯಾಯವಾದಿಗಳಿಗೆ ಮತ್ತು ನ್ಯಾಯಾಲಯ ಸಿಬ್ಬಂದಿಗೆ ವಾಹನ ಕಲಿಕಾ ಪರವಾನಗಿ ಪತ್ರ ವಿತರಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಇಲಾಖೆಯ ಸಿಬ್ಬಂದಿ ಹಾಗೂ ನ್ಯಾಯವಾದಿಗಳು ಸೇರಿ ಒಟ್ಟು 62 ಜನರಿಗೆ ಕಲಿಕಾ ಪರವಾನಿಗೆ ಪತ್ರ ನೀಡಲಾಗಿದೆ. ಚಾಲಕರು ರಸ್ತೆ ನಿಯಮ ಪಾಲಿಸಬೇಕು. ಚಾಲನಾ ಪರವಾನಿಗೆ ಪತ್ರವನ್ನು ಸದಾ ಜತೆಯಲ್ಲಿ ಇಟ್ಟುಕೊಂಡಿರಬೇಕು ಎಂದು ಸೂಚಿಸಿದರು.
ಮುಖ್ಯ ಅತಿಥಿಗಳಾಗಿದ್ದ ಅಪರ ಜಿಲ್ಲಾಧಿಕಾರಿ ಶಶಿಧರ ಕುರೇರ ಮಾತನಾಡಿ, ಸಂವಿಧಾನದ ಕೆಲವು ಪರಿಚ್ಛೇದಗಳನ್ನು ತಿದ್ದುಪಡಿ ಮಾಡಿದ್ದರೂ ಭಾರತದ ಪ್ರತಿಯೊಬ್ಬ ಪ್ರಜೆಯ ಸಂವಿಧಾನಿಕ ಹಕ್ಕಿಗೆ ಚ್ಯುತಿ ಬರದಂತೆ ನೋಡಿಕೊಳ್ಳಲಾಗಿದೆ. 18 ವರ್ಷ ಮೇಲ್ಪಟ್ಟವರು ಪರವಾನಗಿ ಪತ್ರ ಹೊಂದಿ, ವಾಹನ ಚಾಲನೆ ಮಾಡಬಹುದು ಎಂದರು.
ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಯ ವಾಹನ ನಿರೀಕ್ಷಕ ಕೆ.ಎನ್. ನಾಗರಾಜ ಹಾಗೂ ಜಿಲ್ಲಾ ವಾರ್ತಾಧಿಕಾರಿ ಎಂ. ಜುಂಜಣ್ಣ ಮಾತನಾಡಿದರು.
ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಸ್.ಎ. ಹುದ್ದಾರ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ದಿವಾಣಿ ನ್ಯಾಯಾಧೀಶ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎನ್.ಎಸ್. ಪಾಟೀಲ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿ, ಜಿಲ್ಲೆಯಲ್ಲಿ ಲೋಕ ಅದಲಾತ್‌ಗಳಲ್ಲಿ 1243 ಪ್ರಕರಣಗಳನ್ನು ರಾಜಿ ಸಂಧಾನ ಮೂಲಕ ಇತ್ಯರ್ಥಗೊಳಿಸಲಾಗಿದೆ. ವಿವಿಧ ಎಂವಿಸಿ ಪ್ರಕರಣಗಳಲ್ಲಿ ರು. 2.42 ಕೋಟಿ ಪರಿಹಾರ ಕೊಡಿಸಲಾಗಿದೆ ಎಂದು ತಿಳಿಸಿದರು.
ಹೆಚ್ಚುವರಿ ಹಿರಿಯ ದಿವಾಣಿ ನ್ಯಾಯಾಧೀಶ ಎಂ.ವಿ. ಚನ್ನಕೇಶವ ರೆಡ್ಡಿ, ಕಿರಿಯ ದಿವಾಣಿ ನ್ಯಾಯಾಧೀಶ ಎನ್.ಶ್ರೀಪಾದ, ಹೆಚ್ಚುವರಿ ಕಿರಿಯ ದಿವಾಣಿ ನ್ಯಾಯಾಧೀಶ ಎಸ್.ಬಿ. ಕೆಂಬಾವಿ, ಸರ್ಕಾರಿ ಅಭಿಯೋಜಕಿ ಸರೋಜಾ ಹೊಸಮನಿ ಇದ್ದರು. ಎಸ್.ವಿ. ಚೌಡಣ್ಣನವರ ನಿರೂಪಿಸಿದರು. ವಕೀಲರ ಸಂಘದ ಕಾರ್ಯದರ್ಶಿ ಎಸ್.ಎಸ್. ಹಿರೇತನದ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

