ರೈತರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮನವಿ
ಹಾವೇರಿ: ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬಿಜೆಪಿ ಹಾವೇರಿ ಘಟಕದ ಕಾರ್ಯಕರ್ತರು ಶನಿವಾರ ನಗರದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಡಳಿತದ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಪುರಸಿದ್ದೇಶ್ವರ ದೇವಸ್ಥಾನದಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಸಿದ್ದಪ್ಪ ಸರ್ಕಲ್ನಲ್ಲಿ ಕೆಲಹೊತ್ತು ರಸ್ತೆ ತಡೆ ನಡೆಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಲಾಯಿತು.
ಸಹಸ್ರಾರು ಸಂಖ್ಯೆಯಲ್ಲಿ ಸೇರಿದ್ದ ಕಾರ್ಯಕರ್ತರು ಮೆರವಣಿಯುದ್ದಕ್ಕೂ ಹೆಜ್ಜೆ ಹಾಕುವಾಗ ಮಳೆಯಾಗಲಾರಂಭಿಸಿತು. ಆದರೆ, ಜಗ್ಗದೇ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಮೆರವಣಿಗೆಯಲ್ಲಿ ಸಾಗಿದ್ದು ಗಮನ ಸೆಳೆಯಿತು.
ಸಿದ್ದಪ್ಪ ಸರ್ಕಲ್ದಲ್ಲಿ ಗಂಟೆಗೂ ಹೆಚ್ಚು ಕಾಲ ರಸ್ತೆ ತಡೆ ನಡೆಸಿದ ಕಾರ್ಯಕರ್ತರನ್ನುದ್ದೇಶಿ ಅನೇಕ ಮುಖಂಡರು ಮಾತನಾಡಿ, ಬಿಜೆಪಿ ಸರ್ಕಾರ ರು. 1,800 ಕೋಟಿ ಸಾಲಮನ್ನಾ ಮಾಡಿ ಆದೇಶ ಹೊರಡಿಸಿತ್ತು. ಆದರೆ, ಕಾಂಗ್ರೆಸ್ ಸರ್ಕಾರ ಈ ಹಣ ಬಿಡುಗಡೆ ಮಾಡದೇ ವಿಳಂಬ ಧೋರಣೆ ಅನುಸರಿಸುತ್ತಿದೆ ಎಂದು ದೂರಿದರು.
ಬೆಳೆವಿಮೆ, ಹಾವೇರಿಗೆ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಶೈಕ್ಷಣಿಕ ವರ್ಷಕ್ಕೆ ಮಂಜೂರಾತಿ ನೀಡಬೇಕು ಎಂಬುದು ಸೇರಿದಂತೆ 11 ಬೇಡಿಕೆಗಳುಳ್ಳ ಮನವಿಯನ್ನು ಸಲ್ಲಿಸಲಾಯಿತು.
ರಾಜ್ಯಾಧ್ಯಕ್ಷ ಪ್ರಹ್ಲಾದ ಜೋಶಿ, ಶಾಸಕ ಬಸವರಾಜ ಬೊಮ್ಮಾಯಿ, ವಿಧಾನ ಪರಿಷತ್ ಸದಸ್ಯ ಸೋಮಣ್ಣ ಬೇವಿನಮರದ, ಇತರ ಗಣ್ಯರು ಹಾಗೂ ಸಹಸ್ರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಮಾರ್ದನಿಸಿ ಬಿಎಸ್ವೈ ಹೆಸರು
ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆಯಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪನವರ ಹೆಸರು ಮಾರ್ದನಿಸಿತು.
ಪ್ರತಿಭಟನಾ ಸಭೆ ಆರಂಭಗೊಳ್ಳುತ್ತಿದಂತೆ, ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಕಾರ್ಯಕರ್ತರು ಬಿಎಸ್ವೈ ಅವರ ಹೆಸರು ಪ್ರಸ್ತಾಪಿಸಲಾರಂಭಿಸಿದರು. ಇದರಿಂದಾಗಿ ಕೆಲಕಾಲ ವೇದಿಕೆ ಅಲಂಕರಿಸಿಕೊಂಡಿದ್ದ ನಾಯಕರನ್ನು ಈ ಸನ್ನಿವೇಶ ಕಸಿವಿಸಿಯನ್ನಾಗಿಸಿತು.
ಕೆ.ಎಸ್. ಈಶ್ವರಪ್ಪ ಮಾತನಾಡಲು ವೇದಿಕೆಗೆ ಆರಂಭಿಸುತ್ತಿದಂತೆಯೇ ಬಿಎಸ್ವೈ ಮಂತ್ರ ಮತ್ತಷ್ಟು ಪಠಿಸಿದ ಕಾರ್ಯಕರ್ತರು, ಯಡಿಯೂರಪ್ಪನವರನ್ನು ಮತ್ತೆ ಬಿಜೆಪಿಗೆ ಕರೆದುಕೊಂಡು ಬನ್ನಿ ಎಂಬ ಘೋಷಣೆಗಳನ್ನು ಹಾಕಲಾರಂಭಿಸಿದರು.
ಇದಕ್ಕೆ ಉತ್ತರಿಸಿದ ಈಶ್ವರಪ್ಪ, ಸ್ವಲ್ಪ ಸುಮ್ಮನಿರ್ರಪ್ಪ ಯಡಿಯೂರಪ್ಪನವರು ಶೀಘ್ರ ಇದೇ ವೇದಿಕೆಗೆ ಬಂದು ಭಾಷಣ ಮಾಡ್ತಾರ ಎಂದು ಹೇಳುತ್ತಿದಂತೆಯೇ ಸಭಿಕರೆಲ್ಲರೂ ಚಪ್ಪಾಳೆ ತಟ್ಟಿ ಸಂತಸ ವ್ಯಕ್ತಪಡಿಸಿದ ಪ್ರಸಂಗವೂ ನಡೆಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

