ರೈತರ ಸಮಸ್ಯೆ ಬಗೆಹರಿಸದಿದ್ದರೆ ಪ್ರತಿಭಟನೆ
ಕನ್ನಡಪ್ರಭ ವಾರ್ತೆ, ಹಾವೇರಿ, ಅ. 26
ಸಂಕಷ್ಟದಲ್ಲಿ ಕೈ ತೋಳೆಯುತ್ತಿರುವ ರೈತನ ಸಮಸ್ಯೆ ಪರಿಹಾರಕ್ಕೆ ರಾಜ್ಯ ಸರ್ಕಾರ ತಕ್ಷಣ ಮುಂದಾಗದಿದ್ದಲ್ಲಿ ಬರುವ ದಿನಗಳಲ್ಲಿ ರಾಜ್ಯದ ಪ್ರತಿಯೊಂದು ಹಳ್ಳಿ, ತಾಲೂಕು ಹಾಗೂ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ನಾಯಕರು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ರೈತರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಶನಿವಾರ ಬಿಜೆಪಿ ಹಾವೇರಿ ಘಟಕ ಶ್ರೀ ಶಿವಲಿಂಗೇಶ್ವರ ಮಹಿಳಾ ಮಹಾವಿದ್ಯಾಲಯದ ಆವರಣದಲ್ಲಿ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನಾ ಸಭೆಯಲ್ಲಿ ಪಾಲ್ಗೊಂಡಿದ್ದ ಪಕ್ಷದ ರಾಜ್ಯ ನಾಯಕರೆಲ್ಲರೂ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಗಡುವು ನೀಡಿದರು.
ಸಭೆಯುದ್ದಕ್ಕೂ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಜನವಿರೋಧಿ, ರೈತ ವಿರೋಧಿ ನೀತಿಗಳನ್ನು ಕಟುವಾಗಿ ಟೀಕಿಸಿದ್ದಲ್ಲದೇ, ಸರ್ಕಾರಗಳು ಇದೇ ರೀತಿಯ ಧೋರಣೆ ಮುಂದುವರೆಸಿಕೊಂಡು ಹೋದಲ್ಲಿ ಬರುವ ಲೋಕಸಭೆ ಚುನಾವಣೆಯಲ್ಲಿ ಮತದಾರರೇ ತಕ್ಕಪಾಠ ಕಲಿಸುತ್ತಾರೆ ಎಂಬ ಸಂದೇಶವನ್ನು ರವಾನಿಸಲಾಯಿತು.
ಬೆಳೆವಿಮೆ ಹಣ ನೀಡಿ: ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ಪ್ರಹ್ಲಾದ ಜೋಶಿ ಮಾತನಾಡಿ, ಅತಿವೃಷ್ಟಿ ಹಾಗೂ ಅನಾವೃಷ್ಟಿಯಿಂದ ರಾಜ್ಯದ ರೈತರು ಕಣ್ಣೀರಿನಲ್ಲಿ ಕೈ ತೊಳೆಯುತ್ತಿದ್ದಾರೆ. ಆದಾಗ್ಯೂ, ರೈತರ ನೆರವಿಗೆ ರಾಜ್ಯ ಸರ್ಕಾರ ಬಾರದಿರುವುದರಿಂದ ಬಿಜೆಪಿ ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ ರೈತ ಪರ ಹೋರಾಟ ಹಮ್ಮಿಕೊಂಡಿದೆ ಎಂದರು. ಬೆಳೆವಿಮೆಗೆ ರಾಜ್ಯ ಸರ್ಕಾರ ತನ್ನ ಪಾಲಿನ ಹಣ ನೀಡುತ್ತಿಲ್ಲ ಎಂದು ಆರೋಪಿಸಿ ಅವರು, ಬಿಜೆಪಿ ನೇತೃತ್ವದ ಸರ್ಕಾರದಲ್ಲಿ ಹಾವೇರಿ ಜಿಲ್ಲೆಗೆ ವೈದ್ಯಕೀಯ ಕಾಲೇಜು ಆರಂಭಿಸುವುದಕ್ಕೆ ಕ್ರಮಕೈಗೊಳ್ಳಲಾಗಿತ್ತು. ಆದರೆ, ಕಾಂಗ್ರೆಸ್ ಸರ್ಕಾರ ರಚನೆಯಾಗುತ್ತಿದ್ದಂತೆ ಕೈಬಿಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನಾಚಿಕೆಗೇಡಿನ ವಿಷಯ: ಮಾಜಿ ಸಿಎಂ ಡಿ.ವಿ. ಸದಾನಂದಗೌಡ, ಬಿಜೆಪಿ ಸರ್ಕಾರವಿದ್ದಾಗ ಅಕ್ರಮ ಗಣಿಗಾರಿಕೆ ವಿಷಯ ಮುಂದಿಟ್ಟುಕೊಂಡು ಬೆಂಗಳೂರಿನಿಂದ ಬಳ್ಳಾರಿಯವರಿಗೆ ಡ್ಯಾನ್ಸ್ ಮಾಡಿದ್ದ ಕಾಂಗ್ರೆಸ್ಸಿಗರು ಇದೀಗ ಅಕ್ರಮ ಗಣಿಗಾರಿಕೆಯಲ್ಲಿ ಸಚಿವ ಸಂತೋಷ ಲಾಡ್ ಪಾಲ್ಗೊಂಡಿರುವ ಬಗ್ಗೆ ಸಾಕಷ್ಟು ಸಾಕ್ಷ್ಯಾಧಾರಗಳಿದ್ದರೂ ಅವರನ್ನು ಸಂಪುಟದಿಂದ ಕೈಬಿಡದಿರುವುದು ನಿಜಕ್ಕೂ ನಾಚಿಗೇಡಿನ ವಿಷಯ ಎಂದರು. ರಾಜ್ಯದ ರೈತರು ಹತ್ತಾರು ಸಮಸ್ಯೆಗಳಿಂದ ನರಳುತ್ತಿದ್ದರೂ ಅವುಗಳ ಪರಿಹಾರಕ್ಕೆ ಕಾಂಗ್ರೆಸ್ ಸರ್ಕಾರ ಮುಂದಾಗುವವರೆಗೂ ಬಿಜೆಪಿ ಜನಪರ ಹೋರಾಟ ಹಮ್ಮಿಕೊಳ್ಳುತ್ತಲೇ ಸಾಗಲಿದೆ ಎಂದೂ ಎಚ್ಚರಿಸಿದರು.
ಪೊಳ್ಳು ಭರವಸೆ: ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ, ಮಠ-ಮಾನ್ಯಗಳಿಗೆ ಹಾಗೂ ದಲಿತ, ಹಿಂದುಳಿದ ಮತ್ತು ಅಲ್ಪಸಂಖ್ಯಾತರ ಅಭಿವೃದ್ಧಿಗೆ ಬಿಜೆಪಿ ಸರ್ಕಾರದಲ್ಲಿ ನೀಡಿದ ಅನುದಾನವನ್ನು ಕಾಂಗ್ರೆಸ್ ಸರ್ಕಾರ ಬಿಡುಗಡೆ ಮಾಡುತ್ತಿಲ್ಲ ಎಂದು ದೂರಿದರು. ಹಿಂದುಳಿದ ಹಾಗೂ ದಲಿತರಿಗೆ ಸೂಕ್ತ ಸೌಲಭ್ಯ ಕಲ್ಪಿಸಿಕೊಡುವುದಾಗಿ ಸಿದ್ದರಾಮಯ್ಯ ಪೊಳ್ಳು ಭರವಸೆ ನೀಡಿ ಮತದಾರರನ್ನು ವಂಚಿಸಿದ್ದಾರೆ ಎಂದೂ ಆರೋಪಿಸಿದರು.
ಕಾಳಸಂತೆಗೆ ಅಕ್ಕಿ: ಅನ್ನಭಾಗ್ಯ ಯೋಜನೆ ಹೋಟೆಲ್ ಭಾಗ್ಯ ಎಂಬಂತಾಗಿದೆ ಎಂದು ಕಿಡಿಕಾರಿದ ಈಶ್ವರಪ್ಪ, ಒಂದು ಗೆ ಕೆಜಿ ಅಕ್ಕಿ ನೀಡುವ ಘೋಷಣೆ ಮಾಡುವ ಪೂರ್ವ ಸಂಪುಟದ ಸಚಿವರು, ಪಕ್ಷದ ಹಿರಿಯ ನಾಯಕರೊಂದಿಗೆ ಸಿಎಂ ಸಮಾಲೋಚನೆ ಮಾಡದೇ ತರಾತುರಿಯಲ್ಲಿ ಯೋಜನೆ ಘೋಷಿಸಿದ್ದರಿಂದ ಇದರ ಪ್ರಯೋಜನ ಬಡವರಿಗೆ ದೊರಕುತ್ತಿಲ್ಲ. ಯೋಜನೆಯಿಂದ ಅಕ್ಕಿ ಕಾಳಸಂತೆಕೋರರ ಪಾಲಾಗುತ್ತಿದೆ ಎಂದು ಆಂತಕ ವ್ಯಕ್ತಪಡಿಸಿದರು. ಮಾಜಿ ಸಚಿವ, ಶಾಸಕ ಬಸವರಾಜ ಬೊಮ್ಮಾಯಿ ಪ್ರಾಸ್ತಾವಿಕ ಮಾತನಾಡಿ, ಕಳಪೆ ಮಟ್ಟದ ಬೀಜ ಹಾಗೂ ರಸಗೊಬ್ಬರವನ್ನು ಕೆಲ ಕಂಪನಿಗಳು ವಿತರಿಸಿದ್ದರೂ ಅವುಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮಕೈಗೊಳ್ಳುವಲ್ಲಿ ಸರ್ಕಾರ ಹಾಗೂ ಕೃಷಿ ಇಲಾಖೆ ವಿಫಲವಾಗಿದೆ. ಸರ್ಕಾರದ ಈ ಕ್ರಮ ನಕಲಿ ಕಂಪನಿಗಳೊಟ್ಟಿಗೆ ಸರ್ಕಾರ ಹಾಗೂ ಅಧಿಕಾರಿಗಳು ಶಾಮೀಲಾಗಿದ್ದಾರೆ ಎಂಬ ಸಂಶಯ ಮೂಡಿಸುವಂತಿದೆ ಎಂದು ದೂರಿದರು. ರಾಜ್ಯದ ರೈತರ ಸಮಸ್ಯೆಗೆ ಸರ್ಕಾರ ತಕ್ಷಣ ಸ್ಪಂದಿಸದಿದ್ದಲ್ಲಿ ಬಿಜೆಪಿಯಿಂದ ರಾಜ್ಯಾದ್ಯಂತ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದೂ ಬೊಮ್ಮಾಯಿ ಎಚ್ಚರಿಸಿದರು.
ಬಿಜೆಪಿ ರಾಜ್ಯ ಉಪಾಧ್ಯಕ್ಷ ಎಂ. ನಾಗರಾಜ, ವಿಧಾನ ಪರಿಷತ್ ಸದಸ್ಯ ಸೋಮಣ್ಣ ಬೇವಿನಮರದ, ಮಾಜಿ ಶಾಸಕ ಸುರೇಶಗೌಡ ಪಾಟೀಲ, ಮಂಜುನಾಥ ಓಲೇಕಾರ, ಭಾರತಿ ಜಂಬಗಿ, ಜಿಲ್ಲಾಧ್ಯಕ್ಷ ಭೋಜರಾಜ ಕರೂದಿ, ಮಲ್ಲೇಶಪ್ಪ ಹರಿಜನ, ಪ್ರಭು ಹಿಟ್ನಳ್ಳಿ, ಸಿದ್ಧರಾಜ ಕಲ್ಲಕೋಟಿ, ವಿರೂಪಾಕ್ಷ ಬಳ್ಳಾರಿ ಮತ್ತಿತರರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

