ಕುಡಿವ ನೀರಿಗೆ ರು. 13.15 ಕೋಟಿ ಪ್ರಸ್ತಾವನೆ
ಕನ್ನಡಪ್ರಭ ವಾರ್ತೆ, ಹಾವೇರಿ, ಫೆ. 5
ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ತೊಂದರೆ ಇರುವ ಗ್ರಾಮಗಳಲ್ಲಿ ಪುನಶ್ಚೇತನ ಕಾಮಗಾರಿ ಕೈಗೊಳ್ಳಲು ರು. 13.15 ಕೋಟಿಗಳ ಕ್ರಿಯಾಯೋಜನೆ ತಯಾರಿಸಿ ಮಂಜೂರಾತಿಗಾಗಿ ಮೇಲಾಧಿಕಾರಿಗಳಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಸಕ್ಕರೆ, ಮುಜರಾಯಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಕಾಶ ಹುಕ್ಕೇರಿ ತಿಳಿಸಿದರು.
ಜಿಪಂ ಸಭಾಂಗಣದಲ್ಲಿ ಬುಧವಾರ ಜರುಗಿದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯ ಪ್ರತಿ ತಾಲೂಕಿನಲ್ಲಿ ಕನಿಷ್ಠ 10 ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಲು, ಕಟ್ಟಡ ನಿರ್ಮಿಸಲು ಅಧಿಕಾರಿಗಳಿಗೆ ಈಗಾಗಲೇ ಸೂಚಿಸಲಾಗಿದೆ. ಅಲ್ಲದೆ, ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯಾತ್ಮಕ ಗ್ರಾಮಗಳಲ್ಲಿ ಪುನಶ್ಚೇತನ ಕಾಮಗಾರಿ ಕೈಗೊಳ್ಳಲು ಅಗತ್ಯ ಅನುದಾನಕ್ಕೆ ಕೋರಲಾಗಿದೆ. ಬೇಸಿಗೆಯಲ್ಲಿ ನೀರಿನ ಸಮಸ್ಯೆ ಉದ್ಭವವಾಗದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸಬೇಕು. ಅದಕ್ಕಾಗಿ ಈಗಲೇ ಕಾಮಗಾರಿ ಕೈಗೊಳ್ಳಬೇಕು ಎಂದು ಸೂಚಿಸಿದರು.
ಬ್ಯಾಡಗಿ ತಾಲೂಕಿನಲ್ಲಿ ಕುಡಿಯುವ ನೀರಿಗೆ ತೊಂದರೆಯಾಗಿರುವುದರಿಂದ, ತೊಂದರೆ ಇರುವ ಗ್ರಾಮಗಳಿಗೆ ಎಂಜಿನಿಯರ್ಗಳು ಭೇಟಿ ನೀಡಿ ಪರಿಶೀಲನೆ ನಡೆಸಿ, ಅನುದಾನ ಕೊರತೆ ಇದ್ದಲ್ಲಿ ತಕ್ಷಣವೇ ಅನುದಾನ ಬಿಡುಗಡೆಗೊಳಿಸಲಾಗುವುದೆಂದು ಸಚಿವರು ತಿಳಿಸಿದರು.
ರು. 88 ಕೋಟಿ ಬೆಳೆ ವಿಮೆ: 2013ರ ಮುಂಗಾರು ಹಂಗಾಮಿನಲ್ಲಿ ಹತ್ತಿ ಬೆಳೆಯಲು ವಿಫಲತೆಯಾಗಿರುವ ಕ್ಷೇತ್ರಗಳನ್ನು ಸಮೀಕ್ಷೆ ಮಾಡಲಾಗಿದ್ದು, ರಾಷ್ಟ್ರೀಯ ಕೃಷಿ ವಿಮಾ ಯೋಜನೆಯಡಿ ರು. 88.85 ಕೋಟಿ ಬೆಳೆ ವಿಮಾ ಪರಿಹಾರ ಮೊತ್ತವನ್ನು ರೈತರ ಬ್ಯಾಂಕ್ ಖಾತೆಗೆ ಜಮಾ ಮಾಡುವ ಕಾರ್ಯ ಪ್ರಗತಿಯಲ್ಲಿದೆ. ತೋಟಗಾರಿಕಾ ಇಲಾಖೆ ವತಿಯಿಂದ 60 ಟ್ರ್ಯಾಕ್ಟರ್ಗಳನ್ನು ರೈತರಿಗೆ ಈಗಾಗಲೇ ವಿತರಿಸಲಾಗಿದೆ. ಜಿಲ್ಲೆಯಲ್ಲಿ 156 ಜಾನುವಾರುಗಳು ಮರಣ ಹೊಂದಿದ್ದು, ಪಶು ಸಂಗೋಪನಾ ಇಲಾಖೆ ವತಿಯಿಂದ ರು. 98 ಲಕ್ಷ ಪರಿಹಾರ ನೀಡಲಾಗಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ನಿರ್ಮಿಸಲಾಗುತ್ತಿರುವ ಅಂಗನವಾಡಿ ಕಟ್ಟಡಗಳನ್ನು ಈ ತಿಂಗಳ ಅಂತ್ಯದೊಳಗೆ ಪೂರ್ಣಗೊಳಿಸಬೇಕೆಂದು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.
ಪಡಿತರ ಚೀಟಿ: ಜಿಲ್ಲೆಯಲ್ಲಿ ಹೊಸದಾಗಿ ಪಡಿತರ ಚೀಟಿಗಾಗಿ 82 ಸಾವಿರ ಅರ್ಜಿಗಳು ಬಂದಿದ್ದು, ಈ ಪೈಕಿ 48,956 ಬಿಪಿಎಲ್ ಹಾಗೂ 15,271 ಎಪಿಎಲ್ ಪಡಿತರ ಚೀಟಿಗೆ ಶಿಫಾರಸು ಮಾಡಲಾಗಿದೆ. ಇನ್ನುಳಿದ 43 ಸಾವಿರ ಪಡಿತರ ಚೀಟಿಗಳನ್ನು ಈ ತಿಂಗಳ ಅಂತ್ಯದೊಳಗಾಗಿ ವಿತರಿಸಬೇಕೆಂದು ಆಹಾರ ಇಲಾಖೆ ಉಪನಿರ್ದೇಶಕರಿಗೆ ಸೂಚನೆ ನೀಡಿದರು.
ರಸ್ತೆ ದುರಸ್ತಿಗೊಳಿಸಿ: ರಾಜ್ಯ ಹೆದ್ದಾರಿ ರಸ್ತೆಗಳು ಶೇ.95 ಭಾಗ ಪೂರ್ಣಗೊಂಡಿದ್ದು, ಉಳಿದ 63 ಕಾಮಗಾರಿಗಳಿಗೆ ರು. 5 ಕೋಟಿ ಅನುದಾನ ಬಿಡುಗಡೆಯಾಗಿದೆ. ಈ ಕಾಮಗಾರಿಗಳನ್ನು ಈ ತಿಂಗಳೊಳಗಾಗಿ ಪೂರ್ಣಗೊಳಿಸಲಾಗುವುದೆಂದು ಅಧಿಕಾರಿಗಳು ಸಭೆಯಲ್ಲಿ ತಿಳಿಸಿದರು. ಆಗ ಸಚಿವ ಹುಕ್ಕೇರಿ ಮಾತನಾಡಿ, ರಸ್ತೆ ಕಾಮಗಾರಿ ತೀವ್ರಗತಿಯಲ್ಲಿ ನಡೆಯಬೇಕು. ಸರ್ಕಾರದಲ್ಲಿ ಹಣಕ್ಕೆ ಕೊರತೆಯಿಲ್ಲ. ಆದರೆ, ಸಾರ್ವಜನಿಕರಿಗೆ ರಸ್ತೆ ಹದಗೆಟ್ಟು ತೊಂದರೆಯಾಗುವುದನ್ನು ತಪ್ಪಿಸಲು ಅಧಿಕಾರಿಗಳು ಶ್ರಮಿಸಬೇಕು. ಈ ತಿಂಗಳೊಳಗಾಗಿ ಎಲ್ಲಾ ಕಾಮಗಾರಿ ಪೂರ್ಣಗೊಳಿಸಬೇಕೆಂದು ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಬಸವ ವಸತಿ ಮತ್ತು ಇಂದಿರಾ ಆವಾಸ್ ಯೋಜನೆಯಡಿ ಆಯ್ಕೆಯಾದ ಫಲಾನುಭವಿಗಳು ವಿವಿಧ ವಸತಿ ಯೋಜನೆಗಳಡಿ ಬ್ಲಾಕ್ಗೊಂಡ ಮನೆಗಳನ್ನು ತೆರವುಗೊಳಿಸಲಾಗಿದ್ದು, ಜಿಪಿಆರ್ಎಸ್ ಮಾಡಲು ವಸತಿ ನಿಗಮದವರು ಅನುಮತಿ ನೀಡಿದ್ದಾರೆ. ಈ ಮನೆಗಳನ್ನು ಜಿಪಿಆರ್ಎಸ್ ಮಾಡಲು ಅಗತ್ಯ ಕ್ರಮ ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಅಲ್ಲದೆ, ವಸತಿ ಯೋಜನೆ ಬಗ್ಗೆ ಜಿಪಂ ಸಿಇಒ ಅಧ್ಯಕ್ಷತೆಯಲ್ಲಿ ಸಭೆ ಕರೆದು ವಸತಿ ಯೋಜನೆಯ ಪ್ರಗತಿ ಕುರಿತು ವರದಿ ನೀಡಬೇಕೆಂದರು.
ಕಳಪೆ ಬೀಜದಿಂದ ಹಾನಿಗೆ ಪರಿಹಾರ: ಕಳಪೆ ಬಿಟಿ ಹತ್ತಿ ಬೀಜದ ಬಿತ್ತನೆ ಮಾಡಿ ಹಾನಿಗೊಳಗಾದ ಜಿಲ್ಲೆಯ 22,600 ಹೆಕ್ಟೇರ್ ಪ್ರದೇಶದ ಸಮೀಕ್ಷೆ ಕಾರ್ಯ ಮುಗಿದಿದ್ದು, ವರದಿಯನ್ನು ಕೇಂದ್ರ ಕಚೇರಿಗೆ ಸಲ್ಲಿಸಲಾಗಿದೆ. ಈ ಬಗ್ಗೆ ಪ್ರಧಾನ ಕಾರ್ಯದರ್ಶಿಗಳ ಜೊತೆ ನಡೆಸಿದ ಸಭೆಯಲ್ಲಿ ಜಿಲ್ಲೆಗೆ ರು. 10 ಕೋಟಿ ಪರಿಹಾರ ನೀಡಲಾಗುವುದೆಂದು ಮೇಲಾಧಿಕಾರಿಗಳು ಭರವಸೆ ನೀಡಿದ್ದಾರೆಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದರು.
ಈ ವಿಷಯವಾಗಿ ಬೆಂಗಳೂರಿನಲ್ಲಿ ಈ ವಾರ ಸಭೆ ಜರುಗಲಿದೆ ಎಂದು ಸಚಿವರು ತಿಳಿಸಿದರು.
ಅರಣ್ಯಾಧಿಕಾರಿಗಳ ವಿರುದ್ದ ಆಕ್ರೋಶ: ಶಾಸಕ ರುದ್ರಪ್ಪ ಲಮಾಣಿ ಹಾಗೂ ಮನೋಹರ ತಹಸೀಲ್ದಾರ್ ಅವರು ಅರಣ್ಯ ಇಲಾಖೆ ಅಧಿಕಾರಿಗಳ ಕಾರ್ಯವೈಖರಿ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು. ಹಾನಗಲ್ಲ ತಾಲೂಕಿನಲ್ಲಿ ಬಡ ಹಾಗೂ ಸಣ್ಣ ರೈತರು ಅರಣ್ಯ ಭೂಮಿ ಒತ್ತುವರಿ ಮಾಡಿಕೊಂಡ ಜಮೀನನ್ನು ತೆರವುಗೊಳಿಸುವಾಗ ಮಾನವೀಯತೆ ಮರೆಯುತ್ತಿದ್ದಾರೆ. ಕಾನೂನು ಇರುವುದು ಜನರಿಗಾಗಿಯೇ ಹೊರತು ಅಧಿಕಾರಿಗಳಿಗಲ್ಲ. ಜನರು ನೀಡುವ ತೆರಿಗೆ ಹಣದಿಂದ ಅಧಿಕಾರಿಗಳು ವೇತನ ಪಡೆಯುತ್ತಿದ್ದಾರೆ ಎಂಬುದನ್ನು ಮರೆಯಬೇಡಿ. ಬಡವರು ಅಷ್ಟಿಷ್ಟು ಬೆಳೆ ಬೆಳೆದುಕೊಂಡ ಜಮೀನನ್ನು ಬುಲ್ಡೋಜರ್ ಹಾಕಿ ನೆಲಸಮ ಮಾಡಲಾಗುತ್ತಿದೆ. ಶಾಸಕರ ಮಾತಿಗೂ ಕಿಮ್ಮತ್ತು ನೀಡುತ್ತಿಲ್ಲ. ಇದನ್ನು ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದರು.
ಆಗ ಮಧ್ಯ ಪ್ರವೇಶಿಸಿದ ಸಚಿವ ಪ್ರಕಾಶ ಹುಕ್ಕೇರಿ, ಅಧಿಕಾರಿಗಳ ಇಂಥ ವರ್ತನೆ ಸರಿಯಲ್ಲ. ಆಗಿರುವ ತಪ್ಪನ್ನು ಸರಿಪಡಿಸಿಕೊಂಡು ಮುಂದೆ ಹೀಗಾಗದಂತೆ ನೋಡಿಕೊಳ್ಳಬೇಕು ಎಂದು ಎಚ್ಚರಿಸಿದರು.
ಹಾಸ್ಟೆಲ್ ಸಮಸ್ಯೆ: ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಮಾತನಾಡಿ, ಜಿಲ್ಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್ನಲ್ಲಿರುವ ಮಕ್ಕಳಿಗೆ ಸರಿಯಾದ ವಸತಿ ಮತ್ತು ಊಟೋಪಚಾರ ದೊರೆಯುತ್ತಿಲ್ಲ. ಸೊಳ್ಳೆ ಕಾಟದಲ್ಲಿ ಮಕ್ಕಳಿಗೆ ವಿದ್ಯಾಭ್ಯಾಸ ಮಾಡಲು ಆಗುತ್ತಿಲ್ಲ ಎಂದು ಆಕ್ಷೇಪಿಸಿದರು. ಮಕ್ಕಳಿಗೆ ಸರಿಯಾದ ವ್ಯವಸ್ಥೆ ಕಲ್ಪಿಸಬೇಕೆಂದು ಸಮಾಜ ಕಲ್ಯಾಣಾಧಿಕಾರಿಗಳಿಗೆ ಸೂಚನೆ ನೀಡಿದರು.
ಸರ್ವಜ್ಞ ಪ್ರಾಧಿಕಾರದ ವರದಿ ನೀಡಬೇಕು. ಅದನ್ನು ಸರ್ಕಾರದ ಮಟ್ಟದಲ್ಲಿ ವಿಚಾರಣೆ ಮಾಡಲಾಗುವುದಲ್ಲದೇ, ಸಭೆಯಲ್ಲಿ ತಪ್ಪು ಮಾಹಿತಿ ನೀಡುವ ಅಧಿಕಾರಿಗಳ ಮೇಲೆ ಸೂಕ್ತ ಕ್ರಮಕೈಕೊಳ್ಳಬೇಕೆಂದು ಹೊರಟ್ಟಿ ತಿಳಿಸಿದರು.
ವಿಜ್ಞಾನ ಕೇಂದ್ರಕ್ಕೆ 2005ರಲ್ಲೇ ಅನುದಾನ ನೀಡಲಾಗಿದ್ದರೂ ಇದುವರೆಗೆ ಯಾಕೆ ಕಾಮಗಾರಿ ನಡೆಸಿಲ್ಲ ಎಂದು ಹೊರಟ್ಟಿ ಪ್ರಶ್ನಿಸಿದರು.
ಆಗ ಶಾಸಕ ರುದ್ರಪ್ಪ ಲಮಾಣಿ ಮಾತನಾಡಿ, ಈ ಕುರಿತು ವಿಜ್ಞಾನ ಮತ್ತು ತಂತ್ರಜ್ಞಾನ ಖಾತೆ ಸಚಿವ ಎಸ್.ಆರ್. ಪಾಟೀಲ ಅವರ ಗಮನಕ್ಕೆ ಈ ವಿಷಯ ತರಲಾಗಿದೆ. ಅಗತ್ಯ ಅನುದಾನ ನೀಡುವ ಭರವಸೆ ನೀಡಿದ್ದಾರೆ. ವಾರದೊಳಗೆ ವಿಜ್ಞಾನ ಕೇಂದ್ರ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸುವಂತೆ ತಿಳಿಸಿದ್ದಾರೆ ಎಂದು ಹೇಳಿದರು.
ಶಾಸಕ ಬಸವರಾಜ ಬೊಮ್ಮಾಯಿ, ಬಸವರಾಜ ಶಿವಣ್ಣನವರ, ಯು.ಬಿ. ಬಣಕಾರ, ಜಿಪಂ ಅಧ್ಯಕ್ಷ ರಾಜೇಂದ್ರ ಹಾವೇರಣ್ಣನವರ, ಉಪಾಧ್ಯಕ್ಷೆ ಶೋಭಾ ನಿಸ್ಸೀಮಗೌಡ್ರ, ಜಿಲ್ಲಾಧಿಕಾರಿ ಪಾಂಡುರಂಗ ನಾಯಕ, ಜಿಪಂ ಸಿಇಒ ಕೆ.ಬಿ. ಆಂಜನಪ್ಪ, ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ ಡಿ.ಎಸ್. ಜಗಮಯ್ಯನವರ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

