ರಾಷ್ಟ್ರೀಯತೆ ಮೂಡಿಸುವುದು ಎನ್ನೆಸ್ಸೆಸ್ ಗುರಿ
ಹಿರೇಕೆರೂರು: ಯುವಶಕ್ತಿಯ ಉತ್ಸಾಹವನ್ನು ಬಳಸಿಕೊಂಡು ಕ್ರಿಯಾತ್ಮಕ ಕಾರ್ಯಗಳಲ್ಲಿ ತೊಡಗಿಸುವ ಮೂಲಕ ಸಮಾಜದಲ್ಲಿ ನೇರ ಸಂಪರ್ಕ ಹೊಂದಿ ರಾಷ್ಟ್ರ ಪ್ರಜ್ಞೆ ಮೂಡಿಸುವುದು ರಾಷ್ಟ್ರೀಯ ಸೇವಾ ಯೋಜನೆಯ ಗುರಿಯಾಗಿದೆ ಎಂದು ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಹಾಗೂ ಶಾಸಕ ಯು.ಬಿ. ಬಣಕಾರ ಅಭಿಪ್ರಾಯ ವ್ಯಕ್ತಪಡಿಸಿದರು.
ಅವರು ತಾಲೂಕಿನ ಹೊಸಹಳ್ಳಿ ಗ್ರಾಮದಲ್ಲಿ ಕಾಲೇಜು ಶಿಕ್ಷಣ ಇಲಾಖೆ, ಕರ್ನಾಟಕ ವಿಶ್ವವಿದ್ಯಾಲಯ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವತಿಯಿಂದ ಆಯೋಜಿಸಿದ್ದ 2013-14ನೇ ಸಾಲಿನ ಎನ್‌ಎಸ್‌ಎಸ್ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಮಹಾತ್ಮ ಗಾಂಧೀಜಿಯವರು ಕಂಡ ರಾಮರಾಜ್ಯದ ಕನಸು ಗ್ರಾಮೀಣಾಭಿವೃದ್ಧಿಗೆ ಪೂರಕವಾಗಿ 1969ರಲ್ಲಿ ಕಾರ್ಯರೂಪಕ್ಕೆ ಬಂದ ರಾಷ್ಟ್ರೀಯ ಸೇವಾ ಯೋಜನೆ ಸತತವಾಗಿ ಮುನ್ನಡೆಯುತ್ತಿರುವುದು ವಿಶೇಷವಾಗಿದೆ. ಇದು ಕಾಲೇಜು ವಿದ್ಯಾರ್ಥಿಗಳನ್ನು ಕ್ರಿಯಾಶೀಲರಾಗುವಂತೆ ಮತ್ತು ಗ್ರಾಮೀಣ ಪ್ರದೇಶಗಳ ಜನತೆಯ ಸ್ವಚ್ಛತೆ, ಆರೋಗ್ಯ, ಕಾನೂನಿನ ಅರಿವು ಮೂಡಿಸುವ ಮೂಲಕ ಜನ ಜಾಗೃತಿಗೆ ಪೂರಕವಾಗಿ ಕೆಲಸ ಮಾಡುತ್ತಿರುವುದು ಆರೋಗ್ಯಕರ ಸಂಗತಿಯಾಗಿದೆ. ವಿದ್ಯಾರ್ಥಿಗಳು ಪಠ್ಯದ ಜೊತೆಯಲ್ಲಿ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳು ಮತ್ತು ಇಂತಹ ಸಮಾಜದ ಸೇವಾ ಶಿಬಿರಗಳಲ್ಲಿ ಪಾಲ್ಗೊಂಡು ಸಮಾಜ ಸೇವೆಯನ್ನು ಅರ್ಪಣಾ ಮನೋಭಾವನೆಯಿಂದ ಮಾಡಬೇಕು. ಎಲ್ಲರೂ ಸಕ್ರಿಯವಾಗಿ ಪಾಲ್ಗೊಂಡು ದೇಶದ ಭವಿಷ್ಯವನ್ನು ಕಾಪಾಡಲು ಯುವ ಜನತೆ ಮುಂದಾಗಬೇಕು ಎಂದರು. ಉಪನ್ಯಾಸಕ ಜಿ.ಎಸ್. ಹಲಗೇರಿ ಮಾತನಾಡಿ, ವಿದ್ಯಾರ್ಥಿಗಳು ಬದುಕಿನಲ್ಲಿ ಸಮಾಜದ ಸೇವೆಗೆ ಎನ್‌ಎಸ್‌ಎಸ್ ಕಾರ್ಯಕ್ರಮ ಉತ್ತಮ ಯೋಜನೆಯಾಗಿದೆ. ಸಮಾಜ ನನಗೇನು ನೀಡಿದೆ ಎನ್ನುವುದಕ್ಕಿಂತ ಸಮಾಜಕ್ಕಾಗಿ ನಾನು ಏನು ಮಾಡಿದ್ದೇನೆ ಎಂದು ತಿಳಿದುಕೊಂಡು ನಿಸ್ವಾರ್ಥ ಸಮಾಜ ಸೇವೆಗೆ ಮುಂದಾಗಬೇಕು. ಈ ನಿಟ್ಟಿನಲ್ಲಿ ನಾಯಕತ್ವ ಹಾಗೂ ಸಮಾಜ ಸೇವೆ ಮೊದಲಾದ ಗುಣಗಳನ್ನು ಬೆಳೆಸಿಕೊಳ್ಳವಲ್ಲಿ ಶಿಬಿರಗಳು ಮಹತ್ವ ಪಡೆದಿವೆ. ಕಾರಣ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಇಲ್ಲಿ ನಡೆಯುವ ಎಲ್ಲ ವಿಶೇಷ, ಉಪನ್ಯಾಸಗಳ ಸದುಪಯೋಗಪಡಿಸಿಕೊಳ್ಳುವಂತೆ ಹೇಳಿದರು. ಸಿಇಎಸ್ ಸಂಸ್ಥೆಯ ಅಧ್ಯಕ್ಷ ಎಸ್.ಬಿ. ತಿಪ್ಪಣ್ಣನವರ ಅಧ್ಯಕ್ಷತೆ ವಹಿಸಿದ್ದರು.
ಅತಿಥಿಗಳಾಗಿ ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಮಹೇಂದ್ರ ಬಡಳ್ಳಿ, ಮಲ್ಲಿಕಾರ್ಜುನ ಪ್ರೌಢಶಾಲೆಯ ಅಧ್ಯಕ್ಷ ಎಕೇಶ ಬಣಕಾರ, ನ್ಯಾಯವಾದಿ ಬಿ.ಜಿ. ಪಾಟೀಲ, ನಿವೃತ್ತ ಮುಖ್ಯೋಪಾಧ್ಯಾಯ ಜಿ.ಬಿ. ವಡ್ಡಿನಕಟ್ಟಿ, ಎಂ.ಬಿ. ಮುತ್ತಗಿ, ಎನ್. ಹೊಳಿಯಪ್ಪನವರ, ಎಸ್.ಎಚ್. ದೊಡ್ಡಗೌಡರ, ಎಲ್.ಎಂ. ಭಜಂತ್ರಿ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

