ಹಾವೇರಿ

ಶುಲ್ಕ ಮರುಪಾವತಿಗೆ ಷರತ್ತು ಖಂಡಿಸಿ ಪ್ರತಿಭಟನೆ

Published On :

ಕನ್ನಡಪ್ರಭ ವಾರ್ತೆ, ಹಾವೇರಿ, ಫೆ. 18
ಬಿಸಿಎಂ ವಿದ್ಯಾರ್ಥಿಗಳು ಕಾಲೇಜು ಪ್ರವೇಶದ ಸಂದರ್ಭದಲ್ಲಿ ಭರಿಸಿದ್ದ ಶುಲ್ಕ ಮರುಪಾವತಿಸಲು ಸರ್ಕಾರ ಹಲವು ನಿಯಮಗಳನ್ನು ಅಳವಡಿಸಿರುವ ಕ್ರಮ ಖಂಡಿಸಿ ಹಾಗೂ ಮುಷ್ಕರದಲ್ಲಿ ಪಾಲ್ಗೊಳ್ಳುವುದನ್ನು ನಿರ್ಬಂಧಿಸುವ ಮೂಲಕ ಸರ್ಕಾರ ವಿದ್ಯಾರ್ಥಿಗಳ ಹಕ್ಕನ್ನು ಕಸಿದುಕೊಳ್ಳುತ್ತಿದೆ ಎಂದು ಆರೋಪಿಸಿ ಎಸ್ಎಫ್ಐ ನೇತೃತ್ವದಲ್ಲಿ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಮಂಗಳವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.
ನಗರದಲ್ಲಿ ಮೆರವಣಿಗೆ ನಡೆಸಿದ ವಿದ್ಯಾರ್ಥಿಗಳು ಗಾಂಧಿ ವೃತ್ತದಲ್ಲಿ ಪ್ರತಿಭನೆ ನಡೆಸಿ, ಸರ್ಕಾರದ ಆದೇಶದ ವಿರುದ್ಧ ಘೋಷಣೆ ಕೂಗಿದರು. ವಿದ್ಯಾರ್ಥಿಗಳ ಹಕ್ಕನ್ನು ಮೊಟಕುಗೊಳಿಸುವ ಹಾಗೂ ಶುಲ್ಕ ಮರುಪಾವತಿಸುವುದರಿಂದ ವಂಚಿಸುವ ಸರ್ಕಾರಕ್ಕೆ ಧಿಕ್ಕಾರ ಹಾಕಿದರು. ಹಿಂದುಳಿದ ಹಾಗೂ ಬಡ ವಿದ್ಯಾರ್ಥಿಗಳ ಶೈಕ್ಷಣಿಕ ಹಕ್ಕನ್ನು ಸರ್ಕಾರ ಕಸಿದುಕೊಳ್ಳುತ್ತಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು.
ಎಸ್ಎಫ್ಐ ಜಿಲ್ಲಾ ಉಪಾಧ್ಯಕ್ಷ ಮಲ್ಲಿಕಾರ್ಜುನ ಹಿರೇಮಠ ಮಾತನಾಡಿ, ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ ಸೌಲಭ್ಯ ಪಡೆಯಲು ಸರ್ಕಾರ ಷರತ್ತುಗಳನ್ನು ಹಾಕಿರುವುದು ಖಂಡನೀಯ. ಶುಲ್ಕ ಮರುಪಾವತಿಸಲು ಅಂಕ ನಿಗದಿಪಡಿಸಿರುವುದು, ಮುಷ್ಕರದಲ್ಲಿ ಪಾಲ್ಗೊಂಡರೆ ಶುಲ್ಕ ನಿರಾಕರಿಸುವುದು, ಬ್ಯಾಂಕ್ ಖಾತೆಗೆ ಹಣ ಸಂದಾಯವಾಗಲು ಆಧಾರ್ ಕಾರ್ಡ್ ಕಡ್ಡಾಯಗೊಳಿಸುವ ಮೂಲಕ ಸರ್ಕಾರ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಮೋಸ ಮಾಡುತ್ತಿದೆ. ಅವೈಜ್ಞಾನಿಕ ಶಿಕ್ಷಣ ನೀತಿ ಜಾರಿಗೊಳಿಸಿದರೂ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಬಾರದು ಎಂಬ ಕಾರಣಕ್ಕೆ ಸರ್ಕಾರ ಈ ಆದೇಶ ಹೊರಡಿಸಿದಂತಿದೆ. ಇದು ವಿದ್ಯಾರ್ಥಿಗಳ ಹೋರಾಟದ ಹಕ್ಕನ್ನು ಹತ್ತಿಕ್ಕುವ ಯತ್ನ ಎಂದು ಆರೋಪಿಸಿದ ಅವರು, ಈ ಆದೇಶವನ್ನು ತಕ್ಷಣ ವಾಪಸ್ ಪಡೆಯಬೇಕು. ಇಲ್ಲದಿದ್ದರೆ ಉಗ್ರ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು. ಈ ಕುರಿತು ಮಂಗಳವಾರ 'ಕನ್ನಡಪ್ರಭ'ದಲ್ಲಿ ವಿಶೇಷ ವರದಿ ಪ್ರಕಟವಾಗಿದ್ದನ್ನು ಅವರು ಪ್ರಸ್ತಾಪಿಸಿದರು. ಎಸ್ಎಫ್ಐ ಪ್ರಮುಖರಾದ ಸಂತೋಷ ಹಿರೇಹಳ್ಳಿ, ಮಂಜುನಾಥ, ರೋಹಿದಾಸ್, ಮಂಜುನಾಥ ಬಾರ್ಕಿ, ವಿನುತಾ, ಮಂಜುಳಾ, ಲಕ್ಷ್ಮೀ ಸೇರಿದಂತೆ ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.