ಹಾವೇರಿ

23ರಿಂದ 2ನೇ ಸುತ್ತಿನ ಪಲ್ಸ್ ಪೋಲಿಯೋ

Published On :

ಹಾವೇರಿ:  ಜಿಲ್ಲಾಡಳಿತ ವತಿಯಿಂದ ಜಿಲ್ಲೆಯಲ್ಲಿ ಫೆ. 23ರಿಂದ 26 ರವರೆಗೆ ಜರುಗುವ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಜಿಲ್ಲಾಡಳಿತ ಎಲ್ಲ ರೀತಿಯಿಂದ ಸಜ್ಜಾಗಿದೆಯೆಂದು ಅಪರ ಜಿಲ್ಲಾಧಿಕಾರಿ ಶಶಿಧರ ಕುರೇರ ಅವರು ತಿಳಿಸಿದರು.
ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಎರಡನೇ ಸುತ್ತಿನ ಪಲ್ಸ್ ಪೋಲಿಯೋ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಒಟ್ಟು 1,92,305 ಮಕ್ಕಳಿಗೆ ಪಲ್ಸ್ ಪೋಲಿಯೋ ಹನಿ ಹಾಕಬೇಕಾಗಿದ್ದು, ಒಟ್ಟು 930 ಬೂತ್‌ಗಳನ್ನು ತೆರೆಯಲಾಗಿದ್ದು, 1860 ಲಸಿಕೆ ಹಾಕುವ ಸಿಬ್ಬಂದಿ ನೇಮಕಮಾಡಲಾಗಿದೆ. 186 ಮೇಲ್ವಿಚಾರಕರು ಕಾರ್ಯನಿರ್ವಹಿಸಲಿದ್ದಾರೆ. ಸಾರಿಗೆ ಇಲಾಖೆ ವತಿಯಿಂದ 93 ವಾಹನ ವ್ಯವಸ್ಥೆ ಕಲ್ಪಿಸಲಾಗಿದೆಯೆಂದು ಅಪರ ಜಿಲ್ಲಾಧಿಕಾರಿಗಳು ತಿಳಿಸಿದರು. ಜಿಲ್ಲೆಯ ಎಲ್ಲ ಸಾರ್ವಜನಿಕ ಆಸ್ಪತ್ರೆಗಳಿಗೆ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವಿದ್ಯುತ್ ಸಂಪರ್ಕ ಕಡಿತವಾಗದಂತೆ ಎಚ್ಚರ ವಹಿಸಬೇಕೆಂದು ಹೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು. ಅಂದಿನ ದಿನದಂದು ಜಿಲ್ಲೆಯ ರೋಟರಿ ಕ್ಲಬ್ ಹಾಗೂ ವಿವಿಧ ಸಂಘ-ಸಂಸ್ಥೆಗಳು, ಆಶಾ, ಅಂಗನವಾಡಿ ಕಾರ್ಯಕರ್ತೆಯರು, ವಿವಿಧ ಇಲಾಖಾ ಅಧಿಕಾರಿಗಳು ಸಹಕಾರ ನೀಡಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ತಿಳಿಸಿದರು.
ಫೆ. 23ರಂದು ಬೂತ್‌ಮಟ್ಟದಲ್ಲಿ ಹಾಗೂ ನಂತರ ಮೂರು ದಿನಗಳವರೆಗೆ ಮನೆ ಮನೆಗೆ ಭೇಟಿ ನೀಡಿ ಪಲ್ಸ್ ಪೋಲಿಯೋ ಹನಿಹಾಕಲಾಗುವುದೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಚ್.ಎಸ್. ರಾಘವೇಂದ್ರಸ್ವಾಮಿ ತಿಳಿಸಿದರು. ರೈಲು ನಿಲ್ದಾಣ, ಬಸ್ ನಿಲ್ದಾಣದಲ್ಲಿ ಮತ್ತು ವಲಸೆ ಕಾರ್ಮಿಕರ ಮಕ್ಕಳಿಗೆ ಪಲ್ಸ್ ಪೋಲಿಯೋ ಕೇಂದ್ರಗಳನ್ನು ತೆರೆಯಲಾಗುವುದು. ಐದು ವರ್ಷದೊಳಗಿನ ಮಕ್ಕಳಿಗೆ ಈ ಹಿಂದೆ ಪೋಲಿಯೋ ಹನಿ ಹಾಕಿಸಿದ್ದರೂ ಸಹ ಮತ್ತೆ ಪೋಲಿಯೋ ಹನಿಯನ್ನು ಹಾಕಿಸಬೇಕೆಂದು ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ. ಮೂಲಿಮನಿ ಅವರು ತಿಳಿಸಿದರು. ಸಭೆಯಲ್ಲಿ ಬೆಳಗಾವಿಯ ಎಸ್‌ಎಂಓ ಡಾ. ಅನಿಲ ಬಿಳುಮಲೆ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಂಘ ಸಂಸ್ಥೆಯ ಪದಾಧಿಕಾರಿಗಳು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.