ಚೀರನಹಳ್ಳಿ ಶಾಲೆಗೆ ಜಿಲ್ಲಾ ಪರಿಸರ ಮಿತ್ರ ಪ್ರಶಸ್ತಿ
ಹಾವೇರಿ: ಪರಿಸರ ಸ್ನೇಹಿ ಶಾಲೆಗಳನ್ನು ಗುರುತಿಸಿ ಪುರಸ್ಕರಿಸುತ್ತಿರುವುದು ಉತ್ತಮ ಕಾರ್ಯಕ್ರಮವಾಗಿದ್ದು, ಪರಿಸರ ಮಿತ್ರ ಶಾಲೆಗಳ ಆಯ್ಕೆ ಪ್ರಕ್ರಿಯೆ ಶೈಕ್ಷಣಿಕ ವರ್ಷದ ಆರಂಭದಲ್ಲಿಯೇ ಮಾಡಿದರೆ ಹೆಚ್ಚು ಶಾಲೆಗಳು ಭಾಗವಹಿಸಲು ಸಾಧ್ಯವಾಗುತ್ತದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಶಿವಾನಂದ ಕೊಡ್ಲಿ ಹೇಳಿದರು.
ನಗರದ ಶಿವಶಕ್ತಿ ಪ್ಯಾಲೇಸ್ನಲ್ಲಿ ಪ್ರಾದೇಶಿಕ ಕಚೇರಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಜಿಲ್ಲಾಡಳಿತ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಆಶ್ರಯದಲ್ಲಿ ನಡೆದ ಜಿಲ್ಲಾ ಪರಿಸರ ಮಿತ್ರ ಶಾಲೆಗಳ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಶಿಕ್ಷಣ ಇಲಾಖೆ ಹತ್ತು ಹಲವು ಕಾರ್ಯಕ್ರಮಗಳ ಜೊತೆಗೆ ಇತರ ಇಲಾಖೆಗಳ ಸಹಭಾಗಿತ್ವದಲ್ಲಿ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಮಾಡುತ್ತ ಬಂದಿರುವುದಕ್ಕೆ ಜಿಲ್ಲೆಯ ಶಿಕ್ಷಕರು, ಸಮುದಾಯ ಹಾಗೂ ಜನಪ್ರತಿನಿಧಿಗಳ ಸಹಾಯವೂ ಕಾರಣವಾಗಿದೆ. ಶಾಲೆ ಸುಣ್ಣ ಬಣ್ಣಗಳಿಂದ ಹಾಗೂ ಶಾಲಾ ಆವರಣ ಗಿಡಮರ ಉದ್ಯಾನವನಗಳಿಂದ ಮಕ್ಕಳನ್ನು ಆಕರ್ಷಿಸುವಂತಿರಬೇಕು. ಬಿಸಿ ಊಟಕ್ಕೆ ಬೇಕಾದ ತರಕಾರಿ, ಸೊಪ್ಪುಗಳನ್ನು ಬೆಳೆಸುವುದರಿಂದ ಅವರಿಗೆ ಅದು ಖುಷಿ ಕೊಡುತ್ತದೆ. ಮಂಡಳಿಯ ಈ ಕಾರ್ಯ ಶ್ಲಾಘನೀಯವಾಗಿದೆ ಎಂದು ತಿಳಿಸಿದರು.
ಶಿಡೇನೂರು ಮೊರಾರ್ಜಿ ದೇಸಾಯಿ ವಸತಿ ಪ್ರೌಢಶಾಲೆಯ ಪ್ರಾಚಾರ್ಯ ಎಸ್.ಎನ್. ಯಮನಕ್ಕನವರ ನನಸಾದ ಕನಸು ಪುಸ್ತಕ ಬಿಡುಗಡೆ ಮಾಡಿ ಮಾತನಾಡಿ, ಶಿಕ್ಷಕರು ಮನಸ್ಸು ಮಾಡಿದರೆ ಶಾಲಾ ಆವರಣ ನಂದನವನವಾಗಬಹುದು ಎಂದರು.
ಅಧ್ಯಕ್ಷತೆ ವಹಿಸಿದ್ದ ಮಂಡಳಿ ಪ್ರಾದೇಶಿಕ ಕಚೇರಿಯ ಪರಿಸರ ಅಧಿಕಾರಿ ಈ. ಪ್ರಕಾಶ ಮಾತನಾಡಿ, ನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆ ಹಾಗೂ ಮಾಲಿನ್ಯದ ಕುರಿತು ಮಕ್ಕಳಲ್ಲಿ ಅರಿವು ಮೂಡಿಸಿ ಅವರನ್ನು ಪರಿಸರ ಸಂರಕ್ಷಣೆಯಲ್ಲಿ ತೊಡಗಿಸುವುದು ಒಂದು ವಿಶೇಷ ಕಾರ್ಯ. ನಗರೀಕರಣದ ಹಾವಳಿಯಲ್ಲಿ ಕಿರಿದಾಗುತ್ತಿರುವ ಆಟದ ಮೈದಾನ, ಮರೆಯಾಗುತ್ತಿರುವ ಗಿಡಮರಗಳು, ಕಡಿಮೆಯಾಗುತ್ತಿರುವ ಜೀವ ವೈವಿಧ್ಯ ಈ ಸವಾಲುಗಳ ನಡುವೆ ನಮ್ಮ ಶಾಲಾ ಮಕ್ಕಳಲ್ಲಿ ಪರಿಸರ ಜಾಗೃತಿ ಮೂಡಿಸುವುದು ಅತ್ಯಗತ್ಯವಾಗಿದೆ ಎಂದು ತಿಳಿಸಿದರು.
ಹಾನಗಲ್ ತಾಲೂಕಿನ ಚೀರನಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಜಿಲ್ಲಾ ಪರಿಸರ ಮಿತ್ರಶಾಲೆ ಪ್ರಶಸ್ತಿಗೆ ಭಾಜನವಾಯಿತು. ಶಾಲೆಗೆ ರು. 20,000 ಹಾಗೂ ನೆನಪಿನ ಕಾಣಿಕೆ ನೀಡಲಾಯಿತು.
ಜಿಲ್ಲೆಯ ಹತ್ತು ಹಸಿರು ಹಾಗೂ ಹತ್ತು ಕಿತ್ತಳೆ ಶಾಲೆಗಳಿಗೆ ಕ್ರಮವಾಗಿ ರು. 2000, ರು. 1000 ರು ಹಾಗೂ ನೆನಪಿನ ಕಾಣಿಕೆ ನೀಡಲಾಯಿತು. ನಂತರ ಪ್ರಶಸ್ತಿ ಪುರಸ್ಕೃತ ಶಾಲೆಗಳ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
ಶಿಡೇನೂರ ಎಂಡಿಆರ್ಎಸ್ ಶಾಲೆಯ ಬಾಲಕಿಯರು ಪರಿಸರ ಗೀತೆ ಹಾಡಿದರು. ಆಶಾಕಿರಣ ರೂರಲ್ ಡೆವಲೆಪ್ಮೆಂಟ್ ಸೊಸೈಟಿ ಅಧ್ಯಕ್ಷ ಮುತ್ತುರಾಜ ಮಾದರ ಸ್ವಾಗತಿಸಿದರು. ನಿವೃತ್ತ ಮುಖ್ಯೋಪಾಧ್ಯಾಯ ಹನುಮಂತಗೌಡ ಗೊಲ್ಲರ ಕಾರ್ಯಕ್ರಮ ನಿರೂಪಿಸಿದರು. ಮಂಡಳಿ ಕಚೇರಿಯ ದತ್ತಾತ್ರೇಯ ಶಾನುಭೋಗ್ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

