ಹಾವೇರಿ

ನೀರಿನ ಸಮಸ್ಯಾತ್ಮಕ ಗ್ರಾಮ ಗುರುತಿಸಿ

Published On :

ಕನ್ನಡಪ್ರಭ ವಾರ್ತೆ, ಹಾವೇರಿ, ಜ. 6
ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಂಡಾಗ ಪರಿಹಾರ ಕಂಡುಕೊಳ್ಳುವ ಬದಲು ಈಗಲೇ ಸಮಸ್ಯಾತ್ಮಕ ಗ್ರಾಮಗಳನ್ನು ಗುರುತಿಸಬೇಕು. ಮುಂಜಾಗ್ರತಾ ಕ್ರಮ ಕೈಗೊಂಡು ಬೇಸಿಗೆಯಲ್ಲಿ ಸಮಸ್ಯೆ ಉದ್ಭವವಾಗದಂತೆ ನೋಡಿಕೊಳ್ಳಬೇಕು ಎಂದು ಸಂಸದ ಶಿವಕುಮಾರ ಉದಾಸಿ ಅಧಿಕಾರಿಗಳಿಗೆ ಸೂಚಿಸಿದರು.
ಇಲ್ಲಿಯ ಜಿಪಂ ಸಭಾಭವನದಲ್ಲಿ ಸೋಮವಾರ ಏರ್ಪಡಿಸಿದ್ದ ಕೇಂದ್ರ ಪುರಸ್ಕೃತ ಕಾರ್ಯಕ್ರಮಗಳ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯ ಎಷ್ಟು ಗ್ರಾಮಗಳಲ್ಲಿ ಕುಡಿವ ನೀರಿನ ಸಮಸ್ಯೆ ಎದುರಾಗುತ್ತದೆ ಎಂಬ ಪಟ್ಟಿಯನ್ನು ಸಿದ್ಧಪಡಿಸಬೇಕು. ಈ ನಿಟ್ಟಿನಲ್ಲಿ ಯಾವ ಕ್ರಮ ಕೈಗೊಳ್ಳಲಾಗಿದೆ ಎಂದು ಪಿಆರ್‌ಇ ಇಲಾಖೆ ಅಧಿಕಾರಿಗಳನ್ನು ಕೇಳಿದರು. ಇದಕ್ಕೆ ಉತ್ತರಿಸಿದ ಕಾರ್ಯಪಾಲಕ ಅಭಿಯಂತರ ಶ್ರೀಕಾಂತ ಮೈಸೂರು, ಜಿಲ್ಲೆಯಲ್ಲಿ ಕುಡಿವ ನೀರಿನ 51 ಸಮಸ್ಯಾತ್ಮಕ ಗ್ರಾಮಗಳನ್ನು ಗುರುತಿಸಲಾಗಿದೆ ಎಂದು ತಿಳಿಸಿದರು. ಎಲ್ಲ ತಾಪಂ ಇಒಗಳನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬೇಕು. ಬೋರ್‌ವೆಲ್ ಮರುಪೂರಣಕ್ಕೆ ಯಾವ ಕ್ರಮ ಕೈಗೊಳ್ಳಲಾಗಿದೆ ಎಂಬ ಮಾಹಿತಿ ನೀಡುವಂತೆ ಸಂಸದರು ಸೂಚಿಸಿದರು.
ಅಂಗನವಾಡಿಗೆ ಶುದ್ಧ ನೀರು
ಎಲ್ಲ ಅಂಗನವಾಡಿಗಳಿಗೆ ಕುಡಿಯುವ ನೀರಿನ ಪೂರೈಕೆ ಜತೆಗೆ ಉತ್ತಮ ಗುಣಮಟ್ಟದ ನೀರು ಶುದ್ಧೀಕರಣ ಯಂತ್ರಗಳನ್ನು ಅಳವಡಿಸಬೇಕು. ಅಂಗನವಾಡಿಗಳಲ್ಲಿರುವ ನೀರು ಶುದ್ಧೀಕರಣ ಯಂತ್ರಗಳನ್ನು ಪರಿಶೀಲಿಸಿ, ಒಂದು ವಾರದಲ್ಲಿ ವರದಿ ನೀಡಬೇಕು ಎಂದು ಆದೇಶಿಸಿದರು. ಜಿಪಂ ಅಧ್ಯಕ್ಷ ರಾಜೇಂದ್ರ ಹಾವೇರಣ್ಣನವರ, ಅಂಗನವಾಡಿಗಳಿಗೆ ಕುಡಿಯುವ ನೀರು ಪೂರೈಸುವ ಯೋಜನೆಯಲ್ಲೇ ಶುದ್ಧೀಕರಣ ಯಂತ್ರವನ್ನೂ ಸೇರಿಸಿ ಕ್ರಿಯಾಯೋಜನೆ ತಯಾರಿಸುವಂತಾಗಬೇಕು. ಹಲವೆಡೆ ಮಕ್ಕಳು ಅಶುದ್ಧ ನೀರು ಕುಡಿದು ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ ಎಂದರು.
ಜಿಲ್ಲಾಧಿಕಾರಿ ಪಾಂಡುರಂಗ ನಾಯಕ, ಹಲವು ಶಾಲೆಗಳಿಗೆ ತಾವು ಭೇಟಿ ನೀಡಿದಾಗ ಅಲ್ಲಿ ನೀರು ಶುದ್ಧೀಕರಣ ಯಂತ್ರಗಳು ಇಲ್ಲದಿರುವುದು ಕಂಡು ಬಂದಿದ್ದು, ವಿತರಣೆಗೆ ಕ್ರಮ ಕೈಗೊಳ್ಳಬೇಕು ಎಂದರು. ಅಧಿಕಾರಿಗಳು, ಎಲ್ಲ ಅಂಗನವಾಡಿ ಕೇಂದ್ರಗಳಲ್ಲಿ ನೀರು ಶುದ್ಧೀಕರಣ ಯಂತ್ರಗಳಿವೆ ಎಂದು ತಿಳಿಸಿದರು. ಪ್ರತಿಕ್ರಿಯಿಸಿದ ಜಿಪಂ ಅಧ್ಯಕ್ಷ ರಾಜೇಂದ್ರ ಹಾವೇರಣ್ಣನವರ, ಅಂಗನವಾಡಿ ಕೇಂದ್ರಗಳಲ್ಲಿ ಕಡಿಮೆ ಗುಣಮಟ್ಟದ, ರು. 2-3 ಸಾವಿರ ಬೆಲೆಯ ನೀರು ಶುದ್ಧೀಕರಣ ಯಂತ್ರಗಳನ್ನು ಅಳವಡಿಸಲಾಗಿದೆ. ಅವು ಕೆಲವೇ ತಿಂಗಳಲ್ಲಿ ನಿರ್ವಹಣೆ ಇಲ್ಲದೆ ಹಾಳಾಗುತ್ತಿದೆ. ಗುಣಮಟ್ಟದ ಯಂತ್ರ ಅಳವಡಿಸಲು ಕುಡಿವ ನೀರಿನ ಯೋಜನೆಯಲ್ಲೇ ಸೇರಿಸಿ ಕ್ರಿಯಾಯೋಜನೆ ಸಿದ್ಧಪಡಿಸಲು ಸೂಚಿಸಿದರು.
ಖಾತ್ರಿಯಲ್ಲಿ 15 ಹೊಸ ಕೆಲಸ
ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ 15,633 ಜನರಿಗೆ ಉದ್ಯೋಗ ಒದಗಿಸಲಾಗಿದೆ. ಈ ಯೋಜನೆಯಲ್ಲಿ ಹೊಸದಾಗಿ 15 ಚಟುವಟಿಕೆ ಸೇರಿಸಲಾಗಿದೆ. ನಮ್ಮ ಹೊಲ ನಮ್ಮ ದಾರಿ, ವೈಯಕ್ತಿಕ ಶೌಚಾಲಯ, ಕಣ ನಿರ್ಮಾಣ, ಆಟದ ಮೈದಾನ ನಿರ್ಮಾಣ, ರಸ್ತೆ ಬದಿಯ ಗಿಡ-ಗಂಟಿ ಸ್ವಚ್ಛತೆ, ಎರೆಹುಳು ಗೊಬ್ಬರದ ತೊಟ್ಟಿ, ಸ್ಮಶಾನ ಅಭಿವೃದ್ಧಿಯನ್ನೂ ಅನುಷ್ಠಛಾನ ಮಾಡಲಾಗುವುದು ಎಂದು ಅಧಿಕಾರಿ ಸಭೆಗೆ ಮಾಹಿತಿ ನೀಡಿದರು.
ಪ್ರಧಾನ ಮಂತ್ರಿ ಗ್ರಾಮ ಸ್ವರಾಜ್ ಯೋಜನೆ ಕಾಮಗಾರಿಗಳು ಬಹಳ ವಿಳಂಬವಾಗುತ್ತಿದೆ ಎಂದು ಸಂಸದ ಶಿವಕುಮಾರ ಉದಾಸಿ ಆರೋಪಿಸಿದಾಗ, ಅಧಿಕಾರಿ ಎಲ್ಲ ಕಾಮಗಾರಿಗಳು ಮುಗಿದಿದ್ದು ಬ್ಯಾರೇಜ್ ನಿರ್ಮಾಣಕ್ಕಾಗಿ ಒಂದು ಕಾಮಗಾರಿ ವಿಳಂಬವಾಗಿದೆ. ಅದನ್ನೂ ಶೀಘ್ರದಲ್ಲಿ ಪೂರ್ಣಗೊಳಿಸಲಾಗುವುದು ಎಂದರು.
ಪ್ರಸಕ್ತ ವರ್ಷ ಪಿಎಂಜಿಎಸ್‌ವೈ ಯೋಜನೆಯಡಿ ಜಿಲ್ಲೆಗೆ 70 ಕಿ.ಮೀ. ರಸ್ತೆ ಮಂಜೂರಾಗಿದ್ದು, 12 ಕಾಮಗಾರಿಗಳನ್ನಾಗಿ ಮಾಡಿ ಟೆಂಡರ್ ಕರೆಯಲಾಗಿದೆ ಎಂದು ಅಧಿಕಾರಿ ತಿಳಿಸಿದರು. ಆರ್ಥಿಕ ವರ್ಷ ಮುಗಿಯಲು ಕೇವಲ ಎರಡೂವರೆ ತಿಂಗಳು ಬಾಕಿ ಇವೆ. ಈ ಅವಧಿಯಲ್ಲಿ ಎಲ್ಲ ಯೋಜನೆಗಳು ಪೂರ್ಣಗೊಳ್ಳಬೇಕು. ಶೇ. 100 ಸಾಧನೆ ಮಾಡಿ, ಜನರಿಗೆ ಸೌಲಭ್ಯ ಒದಗಿಸಲು ಅಧಿಕಾರಿಗಳು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಸಂಸದ ಶಿವಕುಮಾರ ಉದಾಸಿ ತಿಳಿಸಿದರು.
ಜಿಪಂ ಉಪಾಧ್ಯಕ್ಷೆ ಶೋಭಾ ನಿಸ್ಸೀಮಗೌಡ್ರ, ಜಿಪಂ ಉಪಕಾರ್ಯದರ್ಶಿ ಗೋವಿಂದಸ್ವಾಮಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.