ಗ್ರಾಮೀಣ ಜನರಿಗೆ ಯೋಜನೆ ಲಾಭ ತಲುಪಿಸಿ
ಹಾವೇರಿ: ಪರಿಶಿಷ್ಟ ಜಾತಿ, ಪಂಗಡಗಳಿಗೆ ಜಾರಿಗೊಳಿಸಿದ ಯೋಜನೆಗಳನ್ನು ಗ್ರಾಮೀಣ ಜನರಿಗೆ ತಲುಪಿಸಲು ಆರೋಗ್ಯ ಇಲಾಖೆ ಒತ್ತು ನೀಡಬೇಕೆಂದು ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿ ಅಧ್ಯಕ್ಷ ಪಿ.ಎಂ. ನರೇಂದ್ರಸ್ವಾಮಿ ಸೂಚಿಸಿದರು.
ಜಿಪಂ ಸಭಾಂಗಣದಲ್ಲಿ ಜರುಗಿದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಆರೋಗ್ಯ ಇಲಾಖೆಯ ಪ್ರಗತಿ ಪರಿಶೀಲಿಸಿ, ಗ್ರಾಮೀಣ ಪ್ರದೇಶದ ಪರಿಶಿಷ್ಟ ಜಾತಿ ಮತ್ತು ಪಂಗಡದ ಜನರಿಗೆ ಸೌಲಭ್ಯಗಳು ಸರಿಯಾಗಿ ದೊರೆಯುತ್ತಿಲ್ಲ. ಅಧಿಕಾರಿಗಳು ಹೆಚ್ಚಿನ ಕಾಳಜಿ ವಹಿಸಿ ಯೋಜನೆಗಳ ಸೌಲಭ್ಯವನ್ನು ಗ್ರಾಮೀಣ ಜನರಿಗೆ ತಲುಪಿಸಬೇಕು. ಇಲಾಖೆಯಲ್ಲಿ ಸಿಬ್ಬಂದಿ ಕೊರತೆಯಿಂದಾಗಿ ಅನೇಕ ವೈಫಲ್ಯಗಳು ಉಂಟಾಗುತ್ತಿದ್ದು, ಈ ಕುರಿತು ಇಲಾಖೆಯ ಮೇಲಧಿಕಾರಿಗಳಿಗೆ ವರದಿ ನೀಡಬೇಕೆಂದು ತಿಳಿಸಿದರು.
ಸಮಿತಿ ಸದಸ್ಯ ಗೋವಿಂದ ಕಾರಜೋಳ ಮಾತನಾಡಿ, ಪರಿಶಿಷ್ಟ ಜಾತಿ-ಪಂಗಡದ ಶಾಲಾ ವಿದ್ಯಾರ್ಥಿಗಳಿಗೆ ಉತ್ತಮ ದರ್ಜೆ ಸ್ಕೂಲ್ ಬ್ಯಾಗ್ ಹಾಗೂ ಸಮವಸ್ತ್ರ ನೀಡಬೇಕೆಂದು ಸಾರ್ವಾಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು. ಕೃಷಿ ಇಲಾಖೆಯಿಂದ ಎಸ್ಟಿಪಿ ಮತ್ತು ಟಿಎಸ್ಪಿ ಯೋಜನೆಯಡಿಯಲ್ಲಿ ಬರುವ ಫಲಾನುಭವಿಗಳಿಗೆ ಮಾರ್ಚ್ ಅಂತ್ಯದೊಳಗಾಗಿ ಕೃಷಿ ಪರಿಕರಗಳನ್ನು ನೀಡಬೇಕೆಂದು ಹೇಳಿದರು.
ದೌರ್ಜನ್ಯ ಪ್ರಕರಣಗಳಿಲ್ಲ: ಜಿಲ್ಲೆಯಲ್ಲಿ ಎಸ್ಸಿ, ಎಸ್ಟಿ ದೌರ್ಜನ್ಯ ಪ್ರಕರಣಗಳ ಕುರಿತು ಮಾಹಿತಿ ನೀಡುವಂತೆ ಕೇಳಿದಾಗ, ಸಮಾಜ ಕಲ್ಯಾಣಾಧಿಕಾರಿಗಳು ಮಾತನಾಡಿ, ಪ್ರತಿ ತಿಂಗಳು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಗುತ್ತಿದ್ದು, ಯಾವುದೇ ಪ್ರಕರಣಗಳು ಪತ್ತೆಯಾಗಿಲ್ಲ ಎಂದರು.
ಜಿಲ್ಲೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ ಹಾಸ್ಟೆಲ್ಗಳಲ್ಲಿ ವಾಸಿಸುತ್ತಿರುವ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆಯುತ್ತಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅನುದಾನವನ್ನು ಬಳಸಿಕೊಂಡು ವಿದ್ಯಾರ್ಥಿ ನಿಲಯಗಳಲ್ಲಿ ಮೂಲಸೌಕರ್ಯ ಹಾಗೂ ಶುದ್ಧ ಕುಡಿಯುವ ನೀರ ವ್ಯವಸ್ಥೆ ಮಾಡುವಂತೆ ಸಮಿತಿ ಅಧ್ಯಕ್ಷರು ತಿಳಿಸಿದರು.
20 ಬೋಗಸ್ ಪ್ರಮಾಣಪತ್ರ
ಹಾಸ್ಟೆಲ್ಗಳ ನ್ಯೂನತೆ ಸರಿಪಡಿಸಲು ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ನೇಮಿಸಿ ಎಂದು ಜಿಲ್ಲಾಧಿಕಾರಿಗಳಿಗೆ ತಿಳಿಸಿದ ಅವರು, ಜಿಲ್ಲೆಯಲ್ಲಿ ಬೋಗಸ್ ಎಸ್ಸಿ ಜಾತಿ ಪ್ರಮಾಣ ಪತ್ರದ 20 ಪ್ರಕರಣಗಳು ದಾಖಲಾಗಿದ್ದು, ಅಧಿಕಾರಿಗಳು ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ತಾಕೀತು ಮಾಡಿದರು.
ಗ್ರಾಮೀಣ ಪ್ರದೇಶದಲ್ಲಿ ನೈರ್ಮಲ್ಯ ಕಾಪಾಡಬೇಕು. ಎಸ್ಸಿ, ಎಸ್ಟಿ ಫಲಾನುಭವಿಗಳು ಉಳಿತಾಯ ಖಾತೆ ತೆರೆಯಲು ಬ್ಯಾಂಕ್ಗಳು ಸ್ಪಂದಿಸುತ್ತಿಲ್ಲ ಎಂಬ ದೂರುಗಳು ಕೇಳಿಬರುತ್ತಿದ್ದು, ಬ್ಯಾಂಕ್ ಅಧಿಕಾರಿಗಳ ಸಭೆ ನಡೆಸಿ, ಸೂಕ್ತ ನಿರ್ದೇಶನ ಮಾಡಬೇಕು. ಸಾರ್ವಜನಿಕರು ನೀಡುವ ದೂರು ಹಾಗೂ ಅಹವಾಲುಗಳನ್ನು ಸ್ವೀಕರಿಸಿ ಸೂಕ್ತ ತನಿಖೆ ನಡೆಸುವಂತೆ ಎಂದು ಸೂಚಿಸಿದರು.
ಸಮಿತಿ ಸದಸ್ಯರಾದ ಮನೋಹರ ತಹಶೀಲ್ದಾರ, ಗುರುಪಾಟೀಲ ಶಿರವಾಳ, ಪ್ರೊ ಕೃಷ್ಣ ಭಟ್, ಆರ್. ಧರ್ಮಸೇನ, ಯು.ಬಿ. ಬಣಕಾರ, ನಂಜುಂಡಸ್ವಾಮಿ, ಜಿಲ್ಲಾಧಿಕಾರಿ ಪಾಂಡುರಂಗ ನಾಯಕ, ಎಸ್ಪಿ ಎನ್. ಶಶಿಕುಮಾರ್, ಜಿಪಂ ಸಿಇಒ ಕೆ.ಬಿ. ಆಂಜನಪ್ಪ, ಜಿಪಂ ಉಪಕಾರ್ಯದರ್ಶಿ ಜಿ. ಗೋವಿಂದಸ್ವಾಮಿ, ಅಪರ ಜಿಲ್ಲಾಧಿಕಾರಿ ಶಶಿಧರ ಕುರೇರ, ಹಾವೇರಿ ಉಪವಿಭಾಗಾಧಿಕಾರಿ ಮಹ್ಮದ ಜುಬೇರ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

