ಕಾಗಿನೆಲೆ: ಕುಡಿವ ನೀರು ಯೋಜನೆ ಅನುಷ್ಠಾನಕ್ಕೆ ಸಿದ್ಧ
ಬ್ಯಾಡಗಿ: ಅಧಿಕಾರವಧಿಯಲ್ಲಿ ಕಾಗಿನೆಲೆ ಬಹುಗ್ರಾಮ ಕುಡಿಯುವ ನೀರು ಯೋಜನೆ ಅನುಷ್ಠಾನಗೊಳಿಸುವುದೇ ನನ್ನ ಕನಸಾಗಿದೆ ಎಂದು ಶಾಸಕ ಬಸವರಾಜ ಶಿವಣ್ಣನವರ ಹೇಳಿದರು.
ತಾಲೂಕಿನ ಕಾಗಿನೆಲೆ ಗ್ರಾಮದಲ್ಲಿ ಪಂಚಾಯತ್ ರಾಜ್ ತಾಂತ್ರಿಕ ಉಪ ವಿಭಾಗದಿಂದ ರಾಷ್ಟ್ರೀಯ ಗ್ರಾಮೀಣ ಕುಡಿಯುವ ನೀರು ಸರಬರಾಜು ಯೋಜನೆಯಡಿ ರು. 15 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಮೇಲ್ಮಟ್ಟದ ಜಲಾಗಾರ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.
ಅಪ್ಪಟ ಗ್ರಾಮೀಣ ಪ್ರದೇಶದ ರೈತ ಕುಟುಂಬದಿಂದ ಬಂದಿರುವ ನನಗೆ ಹಳ್ಳಿ ಜನರ ಸಮಸ್ಯೆಗಳ ಬಗ್ಗೆ ಪರಿಪೂರ್ಣ ಮಾಹಿತಿಯಿದೆ. ನಗರ ಪ್ರದೇಶದಲ್ಲಿ ಕುಡಿಯುವ ನೀರಿಗೆ ಸಿಗುವಷ್ಟು ಸೌಲಭ್ಯಗಳು ಗ್ರಾಮೀಣ ಪ್ರದೇಶದಲ್ಲಿ ಲಭ್ಯವಾಗಲು ಸಾಧ್ಯವಿಲ್ಲ. ಹೀಗಾಗಿ ಹಳ್ಳಿಗಳಿಗೆ ಆದ್ಯತೆ ನೀಡುವ ಮೂಲಕ ಶಾಶ್ವತ ಕುಡಿಯುವ ನೀರು ಪೂರೈಕೆ ಚಿಂತನೆ ನಡೆಸುತ್ತಿರುವುದಾಗಿ ತಿಳಿಸಿದರು.
ಕಾಗಿನೆಲೆ ಸೇರಿದಂತೆ 18 ಗ್ರಾಮಗಳಿಗೆ ಕುಡಿಯುವ ನೀರನ್ನು ಪೂರೈಸುವ ಸುಮಾರು ರು. 34 ಕೋಟಿ ವೆಚ್ಚದ ಕಾಮಗಾರಿಗೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು ಕೆಲವೇ ದಿನಗಳಲ್ಲಿ ಚಾಲನೆ ದೊರೆಯಲಿದೆ. ಕಾಮಗಾರಿ ಪೂರ್ಣಗೊಳಿಸಿ ಜನರಿಗೆ ನಿರಂತರ ಶುದ್ಧ ಕುಡಿಯುವ ನೀರು ಪೂರೈಸುವುದಾಗಿ ತಿಳಿಸಿದರು. ಬರುವ ಬೇಸಿಗೆಯಲ್ಲಿ ಯಾವುದೇ ರೀತಿಯಲ್ಲಿ ಕುಡಿಯುವ ನೀರಿನ ತೊಂದರೆಯಾಗದಂತೆ ಎಚ್ಚರಿಕೆ ವಹಿಸಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಅಗತ್ಯವಿದ್ದ ಕಡೆ ಕೊಳವೆ ಬಾವಿ ಮೂಲಕ ನೀರುವ ಪೂರೈಸುವ ಕುರಿತು ಶೀಘ್ರದಲ್ಲೇ ಅಧಿಕಾರಿಗಳ ಮಟ್ಟದ ಸಭೆ ಕರೆಯಲಿದ್ದೇನೆ ಎಂದರು.
ಸಾನ್ನಿಧ್ಯ ವಹಿಸಿದ್ದ ನಿರಂಜನಾನಂದ ಶ್ರೀಗಳು ಮಾತನಾಡಿ, ಅಧಿಕಾರವಿದ್ದ ಸಂದರ್ಭದಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತಹ ಉತ್ತಮ ಯೋಜನೆಗಳನ್ನು ರೂಪಿಸಿದಾಗ ಮಾತ್ರ ಪ್ರಜಾಪ್ರಭುತ್ವ ವ್ಯವಸ್ಥೆಗೆ ಅರ್ಥ ಬರಲಿದೆ ಎಂದರು.
ಮುಖ್ಯ ಅತಿಥಿಗಳಾಗಿ ಜಿಪಂ ಅಧ್ಯಕ್ಷ ರಾಜೇಂದ್ರ ಹಾವೇರಣ್ಣವರ, ಸದಸ್ಯ ವಿರೂಪಾಕ್ಷಪ್ಪ ಬಳ್ಳಾರಿ, ತಾಪಂ ಅಧ್ಯಕ್ಷೆ ಚಿನ್ನವ್ವ ಪಾಸಿ, ಸದಸ್ಯೆ ಅಖೀಲಾಬಾನು ಬ್ಯಾಡಗಿ, ಗ್ರಾಪಂ ಅಧ್ಯಕ್ಷೆ ಗೀತಾ ಹರಿಜನ, ಉಪಾಧ್ಯಕ್ಷ ಅಬ್ದುಲ್ ಮುನಾಫ್ ಯಲಿಗಾರ, ಜಿಪಂ ಎಂಜಿನಿಯರಿಂಗ್ ಉಪ ವಿಭಾಗದ ಅಭಿಯಂತರ ಎಸ್.ಬಿ. ಉಳ್ಳಾಗಡ್ಡಿ, ಕಿರಿಯ ಅಭಿಯಂತ ಕೃಷ್ಣಾ ಆರೇರ, ಗುತ್ತಿಗೆದಾರ ವೈ.ಎನ್. ಕರೇಗೌಡ್ರ ಇನ್ನಿತರರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

