ಕ್ರೀಡಾ ಸಚಿವರ ಹೇಳಿಕೆ ಖಂಡಿಸಿ ಪ್ರತಿಭಟನೆ
ಹಾವೇರಿ: ಅಂಗವಿಕಲರನ್ನು ಅವಮಾನಿಸುವ ರೀತಿಯಲ್ಲಿ ಕ್ರೀಡಾ ಸಚಿವ ಅಭಯಚಂದ್ರ ಜೈನ್ ನೀಡಿರುವ ಹೇಳಿಕೆ ಖಂಡಿಸಿ ಜಿಲ್ಲಾ ಅಂಗವಿಕಲರ ಸಂಘದ ನೇತೃತ್ವದಲ್ಲಿ ನೂರಾರು ಅಂಗವಿಕಲರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.
ಸ್ಥಳೀಯ ಮುರಘರಾಜೇಂದ್ರ ಮಠದಿಂದ ಪ್ರತಿಭಟಾನಾ ಮೆರವಣಿಗೆ ಆರಂಭಿಸಿ ನಗರದ ಹೊಸಮನಿ ಸಿದ್ಧಪ್ಪ ವೃತ್ತದಲ್ಲಿ ಮಾನವ ಸರಪಳಿ ರಚಿಸಿ, ಕೆಲಹೊತ್ತು ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿದರು. ಕ್ರೀಡಾ ಸಚಿವ ಅಭಯಚಂದ್ರ ಜೈನ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ನೇತೃತ್ವ ವಹಿಸಿದ್ದ ಅಂಗವಿಕಲರ ಸಂಘದ ಜಿಲ್ಲಾಧ್ಯಕ್ಷ ಪುಟ್ಟಪ್ಪ ಜಲದಿ ಮಾತನಾಡಿ, ಮಂಗಳೂರಿನಲ್ಲಿ ಇತ್ತೀಚೆಗೆ ಅಧಿಕಾರಿಯೊಬ್ಬರು ಅಂಗವಿಕಲರ ಕ್ರೀಡಾಪಟುಗಳ ಸಹಾಯಧನ ಕುರಿತು ಪ್ರಶ್ನಿಸಿದಾಗ ಕ್ರೀಡಾ ಸಚಿವ ಅಭಯಚಂದ್ರ ಜೈನ್ ಅವರು ಕುಳ್ಳರು, ಕುಂಟರು, ಕುರುಡರಿಗೆ ಕೊಡಲು ಸರ್ಕಾರದಲ್ಲಿ ಹಣವಿಲ್ಲ ಎಂದು ಹೇಳಿದ್ದು ರಾಜ್ಯದ ಅಂಗವಿಕಲರಿಗೆ ನೋವುಂಟು ಮಾಡಿದೆ. ಜವಾಬ್ದಾರಿಯುತ ಸ್ಥಾನದಲ್ಲಿದ್ದುಕೊಂಡು ರಾಜ್ಯದ ಅಂಗವಿಕಲ ಕ್ರೀಡಾಪಟುಗಳ ಕುರಿತು ಕೇವಲವಾಗಿ ಮಾತಾಡಿದ್ದು ಸರಿಯಲ್ಲ. ಕೂಡಲೇ ಮುಖ್ಯಮಂತ್ರಿಗಳು ಕ್ರೀಡಾ ಸಚಿವ ಅಭಯಚಂದ್ರ ಜೈನ್ ಅವರನ್ನು ಸಚಿವ ಸಂಪುಟದಿಂದ ಕೈಬಿಟ್ಟು, ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು. ಇಲ್ಲವಾದರೆ ಇಂತಹ ದುಷ್ಟ ಮನಸ್ಸಿನ ವ್ಯಕ್ತಿಗಳಿಂದ ರಾಜ್ಯ ಸರ್ಕಾರಕ್ಕೆ ಕೆಟ್ಟ ಹೆಸರು ಬರಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಒಂದು ವೇಳೆ ಜೈನ್ ಅವರನ್ನು ಸಂಪುಟದಿಂದ ಕೈಬಿಡದಿದ್ದರೆ ಅಂಗವಿಕಲರ ಸಂಘದ ವತಿಯಿಂದ ರಾಜ್ಯಾದ್ಯಂತ ಹೋರಾಟ ಮಾಡುವುದಾಗಿ ಎಚ್ಚರಿಸಿದರು. ನಂತರ ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ರಾಜ್ಯ ಘಟಕದ ಅಧ್ಯಕ್ಷ ಅಲ್ಲಾಭಕ್ಷ ಹರಿಹರ, ಜಿಲ್ಲಾ ಉಪಾಧ್ಯಕ್ಷ ಮೌನೇಶ ಬಡಿಗೇರ, ಕಾರ್ಯದಶಿಂ ವಿ.ಸಿ. ಪಾಟೀಲ, ಖಜಾಂಚಿ ಬಸವರಾಜ ಕುಂದಗೋಳ, ಪಾಂಡುರಂಗ ಸುತಾರ, ವೆಂಕಟೇಶ ಮೆರಹವಾಡೆ, ಬಾಲಕೃಷ್ಣ ಆರೇರ, ಪರಶುರಾಮ ಉಳ್ಳಾಕಾಶಿ, ರಾಜು ಜವಳಿ, ಬಿ.ಎಂ. ಬಸವರೆಡ್ಡಿ, ಎಸ್.ಎಸ್. ಬಂಗಿಗೌಡ್ರ, ಶಾಂತಪ್ಪ ಯಮನೂರ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

