ವೈದ್ಯಾಧಿಕಾರಿ ಮೇಲೆ ಹಲ್ಲೆ ಕ್ರಮಕ್ಕೆ ವಾರದ ಗಡುವು
ಹಾವೇರಿ: ತಾಲೂಕಿನ ಗುತ್ತಲ ಸಮುದಾಯ ಆರೋಗ್ಯ ಕೇಂದ್ರದ ಕರ್ತವ್ಯ ನಿರತ ವೈದ್ಯಾಧಿಕಾರಿ ಹಾಗೂ ಸಿಬ್ಬಂದಿ ಮೇಲೆ ಫೆ.28ರಂದು ರಾತ್ರಿ ಹಲ್ಲೆ ಮಾಡಿದವರನ್ನು ತಕ್ಷಣ ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ವಾರದೊಳಗೆ ಕ್ರಮ ಕೈಗೊಳ್ಳದಿದ್ದರೆ ಸೇವೆ ಸ್ಥಗಿತಗೊಳಿಸಲಾಗುವುದು ಎಂದು ಕರ್ನಾಟಕ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಡಿ.ಬಿ. ಮೂಲಿಮನಿ ತಿಳಿಸಿದರು.
ವಾರ್ತಾ ಇಲಾಖೆಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗುತ್ತಲ ಸಮುದಾಯ ಆರೋಗ್ಯ ಕೇಂದ್ರದ ಕರ್ತವ್ಯ ನಿರತ ವೈದ್ಯಾಧಿಕಾರಿ ಡಾ.ಚಂದ್ರಶೇಖರ ಹೊತಗಿಗೌಡರ ಹಾಗೂ ಇತರ ಸಿಬ್ಬಂದಿ ಮೇಲೆ ಶುಕ್ರವಾರ ರಾತ್ರಿ ವೇಳೆಗೆ ಸುಮಾರು 30ರಿಂದ 40 ಜನರು ಏಕಾಏಕಿ ಬಂದು ಹಲ್ಲೆ ನಡೆಸಿದ್ದಾರೆ. ಇಂಥ ಪ್ರಕರಣ ಮೇಲಿಂದ ಮೇಲೆ ನಡೆಯುತ್ತಿದೆ. ಇದರಿಂದ ಆಸ್ಪತ್ರೆಗಳಲ್ಲಿ ಮುಕ್ತವಾಗಿ ಜನರಿಗೆ ಸೇವೆ ನೀಡಲು ಸಾಧ್ಯವಾಗುತ್ತಿಲ್ಲ. ಗುತ್ತಲ ಆಸ್ಪತ್ರೆ ಆವರಣದಲ್ಲಿ ಹೊರ ಠಾಣೆ ಆರಂಭಿಸಿ ಪೊಲೀಸ್ ಸಿಬ್ಬಂದಿ ನಿಯೋಜಿಸಬೇಕು. ವಾರದೊಳಗೆ ತಪ್ಪಿತಸ್ಥರನ್ನು ಬಂಧಿಸಿ ಕ್ರಮ ಕೈಗೊಳ್ಳದಿದ್ದರೆ ಗುತ್ತಲ ಆಸ್ಪತ್ರೆಯಲ್ಲಿ ಸೇವೆ ಸ್ಥಗಿತಗೊಳಿಸಲಾಗುವುದು. ನಂತರ ಸಂಘದ ಕೇಂದ್ರ ಸಮಿತಿಯೊಂದಿಗೆ ಚರ್ಚಿಸಿ ಜಿಲ್ಲಾದ್ಯಂತ ಸೇವೆ ಸ್ಥಗಿತಗೊಳಿಸುವ ಕುರಿತು ನಿರ್ಧರಿಸಲಾಗುವುದು ಎಂದರು.
ಹಲ್ಲೆಗೊಳಗಾದ ವೈದ್ಯಾಧಿಕಾರಿ ಡಾ.ಚಂದ್ರಶೇಖರ ಹೊತಗಿಗೌಡರ ಮಾತನಾಡಿ, ಶುಕ್ರವಾರ ರಾತ್ರಿ ಕುಟುಂಬ ಕಲ್ಯಾಣ ಶಸ್ತ್ರ ಚಿಕಿತ್ಸೆಗೊಳದವರನ್ನು ಪರೀಕ್ಷಿಸುತ್ತಿದ್ದ ವೇಳೆ ಏಕಾಏಕಿ ಬಂದ ಜನರ ಗುಂಪು ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ನಡೆಸಿದೆ. ನಂತರ ಪೊಲೀಸ್ ರಕ್ಷಣೆಯಲ್ಲಿ ಶನಿವಾರ ಬೆಳಗಿನ ಜಾವ 5 ಗಂಟೆವರೆಗೂ ವಾಂತಿಬೇಧಿ ಪ್ರಕರಣದಲ್ಲಿ ದಾಖಲಾದವರಿಗೆ ಚಿಕಿತ್ಸೆ ನೀಡಿದ್ದೇವೆ. ಸಕಾರಣವಿಲ್ಲದೇ ಹಲ್ಲೆ ನಡೆಸಿದವರ ಮೇಲೆ ದೂರು ನೀಡಲಾಗಿದೆ ಎಂದರು. ಆಸ್ಪತ್ರೆಯ ಸ್ಟಾಫ್ ನರ್ಸ್ ಮಂಜುಳಾ ಹಾಗೂ ರಾಣಿ ದೇಸಾಯಿ, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷೆ ಎಸ್.ಬಿ. ಕಿನ್ನಾಳ ಮಾತನಾಡಿದರು. ವೈದ್ಯಾಧಿಕಾರಿಗಳ ಸಂಘದ ಕಾರ್ಯದರ್ಶಿ ಡಾ.ನಾಗರಾಜ ಎಸ್.ಕೆ., ಖಜಾಂಚಿ ಡಾ.ಎಂ.ಜಯಾನಂದ, ಸಹಕಾರ್ಯದರ್ಶಿ ಡಾ.ರಾಜೇಶ ಟಿ.ಎಸ್., ತಾಲೂಕು ವೈದ್ಯಾಧಿಕಾರಿ ಡಾ.ಪ್ರಭಾಕರ ಕುಂದೂರ, ಡಾ.ಅಭಿನವ ಸಾವಕಾರ, ಡಾ.ಲೋಹಿತ್ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

