ನೀತಿ ಸಂಹಿತೆ ಉಲ್ಲಂಘನೆ ನಿಗಾ ವಹಿಸಲು ತಂಡ ರಚನೆ
ಕನ್ನಡಪ್ರಭ ವಾರ್ತೆ, ಹಾವೇರಿ, ಮಾ.5
ಚುನಾವಣಾ ನೀತಿ ಸಂಹಿತೆಯು ಬುಧವಾರದಿಂದಲೇ ಜಾರಿಯಾಗಿದ್ದು, ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲಾಗುತ್ತಿದೆ. ಉಲ್ಲಂಘಿಸಿದರೆ ಕಾನೂನು ಪ್ರಕಾರ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಎಂ. ಮಂಜುನಾಥ ನಾಯಕ ತಿಳಿಸಿದರು.
ತಮ್ಮ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣಾ ಆಯೋಗವು ಲೋಕಸಭೆ ಸಾರ್ವತ್ರಿಕ ಚುನಾವಣೆ ದಿನಾಂಕ ಘೋಷಿಸಿದ್ದು, ಇಂದಿನಿಂದಲೇ ಸದಾಚಾರ ಸಂಹಿತೆಯೂ ಜಾರಿಯಾಗುತ್ತಿದೆ. ಜಿಲ್ಲೆಯ 6 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬರುವ 7 ತಾಲೂಕುಗಳಲ್ಲಿ ಪ್ರತಿ ಗ್ರಾಪಂ ಮಟ್ಟದಲ್ಲಿ ಪಿಡಿಒ ಹಾಗೂ ಗ್ರಾಮ ಲೆಕ್ಕಾಧಿಕಾರಿಯನ್ನು ಒಳಗೊಂಡ ತಂಡ ರಚಿಸಲಾಗಿದೆ. ಚುನಾವಣಾ ವೆಚ್ಚಗಳಿಗೆ ಹಾಗೂ ಚುನಾವಣಾ ಸಂಬಂಧೀ ಇತರೇ ವಿಷಯಗಳಿಗೆ ಸಂಬಂಧಪಟ್ಟ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳ ಬಗ್ಗೆ ನಿಗಾ ವಹಿಸಲು ಪ್ರತಿ ಹೋಬಳಿ ಹಾಗೂ ತಾಲೂಕು ಮಟ್ಟದಲ್ಲಿ ತಂಡ ರಚಿಸಲಾಗಿದೆ ಎಂದರು.
ಪ್ಲಾಯಿಂಗ್ ಸ್ಕ್ವಾಡ್, ಸ್ಟ್ಯಾಟಿಕ್ ತಂಡ, ವೀಡಿಯೋ ಕಣ್ಗಾವಲು ತಂಡ, ಚುನಾವಣಾ ವೆಚ್ಚ ಪರಿಶೀಲನಾ ತಂಡ, ಸೆಕ್ಟರ್ ಆಫೀಸರ್ಸ್ ತಂಡಗಳನ್ನು ರಚಿಸಲಾಗಿದೆ. ಅಲ್ಲದೆ, ಕಾಸಿಗಾಗಿ ಸುದ್ದಿ ಪ್ರಕಟವಾಗುವುದನ್ನು ಪರಿಶೀಲಿಸಲು ಪ್ರತ್ಯೇಕ ಮಾಧ್ಯಮ ಸಮಿತಿ ರಚಿಸಲಾಗುವುದು ಎಂದರು.
ಹಾವೇರಿ ಲೋಕಸಭಾ ವ್ಯಾಪ್ತಿಯಲ್ಲಿ ಬರುವ 5 ವಿಧಾನಸಭಾ ಕ್ಷೇತ್ರಗಳಲ್ಲಿ 1406 ಮತಗಟ್ಟೆ ಪ್ರದೇಶಗಳಲ್ಲಿ ನಿರಂತರ ಮತದಾರರ ಸೇರ್ಪಡೆ ಕಾರ್ಯಕ್ರಮ ನಡೆಸಲಾಗುತ್ತಿದೆ. ಮಾ.16ರ ವರೆಗೆ ಹೊಸದಾಗಿ ಅರ್ಜಿಗಳನ್ನು ಸ್ವೀಕರಿಸಲಾಗುತ್ತಿದೆ. ಮಾ.9ರಂದು ಮತಗಟ್ಟೆಗಳಲ್ಲಿ ಸಂಬಂಧಪಟ್ಟ ಮತದಾರರ ಪಟ್ಟಿ ಪ್ರಕಟಿಸಲಾಗುವುದು. ಪಟ್ಟಿಯಲ್ಲಿ ತಮ್ಮ ಹೆಸರು ಇರುವ ಬಗ್ಗೆ ಪರಿಶೀಲಿಸಿಕೊಂಡು ಒಂದು ವೇಳೆ ಬಿಟ್ಟಿದ್ದಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ.
ಕಳೆದ ಜ.31ರ ಪ್ರಕಾರ ಜಿಲ್ಲೆಯಲ್ಲಿ 11,16,801 ಮತದಾರರಿದ್ದು, ಈ ಪೈಕಿ 11,14,211 ಜನರಿಗೆ ಭಾವಚಿತ್ರವಿರುವ ಗುರುತಿನ ಚೀಟಿ ನೀಡಲಾಗಿದೆ ಎಂದರು.
ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಎಲ್ಲ ಮತಗಟ್ಟೆ ಕೇಂದ್ರಗಳಲ್ಲಿ ಮತದಾನ ಜರುಗಿಸಲು ಎಲ್ಲ ಇಲಾಖೆಗಳಿಂದ ಅಧಿಕಾರಿ ಮತ್ತು ಸಿಬ್ಬಂದಿ ಮಾಹಿತಿ ಪಡೆದು ನಿಯೋಜಿಸುವ ಕಾರ್ಯ ಮಾಡಲಾಗುತ್ತಿದೆ. ಪ್ರತಿ ಮತಗಟ್ಟೆಗೆ 4 ಸಿಬ್ಬಂದಿಯಂತೆ 5624 ಸಿಬ್ಬಂದಿಯನ್ನು ಚುನಾವಣೆಗೆ ಬಳಸಿಕೊಳ್ಳಲಾಗುವುದು. ಶಾಂತಿಯುತ ಮತದಾನಕ್ಕಾಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ.
ಜಿಪಂ ಸಿಇಒ ಕೆ.ಬಿ. ಆಂಜನಪ್ಪ ಮಾತನಾಡಿ, ಮತದಾರರಲ್ಲಿ ಜಾಗೃತಿ ಮೂಡಿಸಲು ಸ್ವೀಪ್ ಸಮಿತಿಯಿಂದ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಅಲ್ಲದೆ, ನೋಟಾ ನಿಯಮದ ಬಗ್ಗೆಯೂ ಜಾಗೃತಿ ಮೂಡಿಸಲಾಗುವುದು. ಸ್ಥಳೀಯ ಚಾನೆಲ್ ಹಾಗೂ ಕಾಲೇಜುಗಳಲ್ಲಿ ಜಾಗೃತಿ ಚಟುವಟಿಕೆ ಹಮ್ಮಿಕೊಂಡು ಹೆಚ್ಚಿನ ಪ್ರಮಾಣದ ಮತದಾನವಾಗಲು ಶ್ರಮಿಸಲಾಗುವುದು ಎಂದರು. ಅಪರ ಜಿಲ್ಲಾಧಿಕಾರಿ ಶಶಿಧರ ಕುರೇರ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

