ಹಾವೇರಿ

ಚೆಕ್‌ಪೋಸ್ಟ್‌ಗಳಲ್ಲಿ ವಾಹನ ತಪಾಸಣೆಗೆ ಸೂಚನೆ

Published On :

ಹಾವೇರಿ:  ಲೋಕಸಭೆ ಸಾರ್ವತ್ರಿಕ ಚುನಾವಣೆ ನೀತಿ ಸಂಹಿತೆ ಜಾರಿಯಾಗಿದ್ದು, ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕು. ಜಿಲ್ಲೆಯ ಪ್ರತಿಯೊಂದು ಚೆಕ್ ಪೋಸ್ಟ್‌ಗಳಲ್ಲಿ ಅನಧಿಕೃತ ವಾಹನಗಳ ಹಾಗೂ ಕಾನೂನು ಬಾಹಿರ ಸಾಗಾಣಿಕೆ ವಾಹನಗಳ ತಪಾಸಣೆ ಮಾಡಲು ಈಗಾಗಲೇ ತಂಡಗಳನ್ನು ರಚಿಸಲಾಗಿದ್ದು, ಈ ತಂಡಗಳಿಗೆ ಆದಷ್ಟು ಶೀಘ್ರವಾಗಿ ಸಭೆ ಮಾಡಿ, ವರದಿಯನ್ನು ಚುನಾವಣೆ ಶಾಖೆಗೆ ಕಳುಹಿಸಬೇಕು ಎಂದು ಜಿಲ್ಲಾಧಿಕಾರಿ ಎಂ. ಮಂಜುನಾಥ ನಾಯಕ ಸೂಚಿಸಿದರು.
ಜಿಲ್ಲಾ ಪಂಚಾಯಿತಿ ಸಭಾಭವನದಲ್ಲಿ ಗುರುವಾರ ಜರುಗಿದ ಲೋಕಸಭಾ ಸಾರ್ವತ್ರಿಕ ಚುನಾವಣೆಯ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ 12 ಚೆಕ್‌ಪೋಸ್ಟ್ ಗುರುತಿಸಲಾಗಿದ್ದು, ಅಲ್ಲಿ 24 ಗಂಟೆಯೂ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು. ಚುನಾವಣಾ ನೀತಿ ಸಂಹಿತೆ ಅನುಷ್ಠಾನವನ್ನು ಕಟ್ಟುನಿಟ್ಟಾಗಿ ಪಾಲಿಸಲು ಜಿಲ್ಲೆಯ ಆರು ವಿಧಾನಸಭೆ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬರುವ ಏಳು ತಾಲೂಕಿನ ಪ್ರತಿಯೊಂದು ಗ್ರಾಪಂ, ಹೋಬಳಿ, ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಸ್ಥಳೀಯ ಅಧಿಕಾರಿಗಳನ್ನೊಳಗೊಂಡ ತಂಡಗಳನ್ನು ರಚಿಸಲಾಗಿದೆ.
ಶಿಸ್ತು ಉಲ್ಲಂಘಿಸಿದರೆ ಕ್ರಮ
ಚುನಾವಣೆ ವೆಚ್ಚಗಳಿಗೆ ಮತ್ತು ಚುನಾವಣೆಗೆ ಸಂಬಂಧಪಟ್ಟ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ಬಗ್ಗೆ ನಿಗಾವಹಿಸಲು ಕಣ್ಗಾವಲು ಸೆಕ್ಟರ್ ಅಧಿಕಾರಿಗಳ ತಂಡವನ್ನು ತಾಲೂಕು ಮಟ್ಟದಲ್ಲಿ ರಚಿಸಲಾಗಿದೆ ಎಂದರು.ನೀತಿ ಸಂಹಿತೆ ಉಲ್ಲಂಘಿಸಿದರೆ ಕಾನೂನು ಪ್ರಕಾರ ಶಿಸ್ತು ಕ್ರಮ ಕೈಗೊಳ್ಳಲಾಗುವುದೆಂದು ಜಿಲ್ಲಾಧಿಕಾರಿ ತಿಳಿಸಿದರು.
ಜಿಲ್ಲೆಯ ವಿವಿಧ ಇಲಾಖೆಗಳ ಅಧಿಕಾರಿ, ಸಿಬ್ಬಂದಿಯನ್ನು ಚುನಾವಣಾ ಕರ್ತವ್ಯಕ್ಕೆ ನಿಯೋಜಿಸುವುದರಿಂದ ಆಯಾ ತಾಲೂಕಿನ ಸಿಬ್ಬಂದಿ ವಿವರಗಳನ್ನು ಎಚ್‌ಆರ್‌ಎಂಎಸ್‌ನಲ್ಲಿ  ಅಳವಡಿಸಬೇಕು. ಜಿಲ್ಲೆಯಲ್ಲಿ ಜರುಗುವ ಪ್ರತಿಯೊಂದು ರಾಜಕೀಯ ಪಕ್ಷಗಳ ಸಭೆ ಸಮಾರಂಭ ಹಾಗೂ ಇತ್ಯಾದಿ ಚಟುವಟಿಕೆ ಬಗ್ಗೆ ಚಿತ್ರೀಕರಿಸುವ ವೀಡಿಯೋ ವೀಕ್ಷಣೆಗೆ ತಂಡ ರಚನೆ ಮಾಡಲಾಗಿದೆ. ಮತದಾರರ ಚೀಟಿಗೆ ಸಾರ್ವಜನಿಕರಿಂದ ಪ್ರತಿದಿನ ಸ್ವೀಕರಿಸುವ ಅರ್ಜಿಗಳನ್ನು ಪರಿಶೀಲಿಸಿ ನಿಯಮಾವಳಿ ಪ್ರಕಾರ ವಿಲೇವಾರಿ ಮಾಡುವುದು, ಅರ್ಜಿಗಳನ್ನು ಆಯೋಗದ ಸಾಫ್ಟ್‌ವೇರ್‌ನಲ್ಲಿ ಎಂಟ್ರಿ ಮಾಡಿ ಪ್ರತಿದಿನ ಪ್ರಗತಿ ವರದಿಯನ್ನು ಚುನಾವಣಾ ಶಾಖೆಗೆ ಕಳುಹಿಸಬೇಕೆಂದು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು.
ಜಿಲ್ಲೆಯ ಎಲ್ಲ ಅಧಿಕಾರಿಗಳು ಲೋಕಸಭಾ ಚುನಾವಣೆ ಮುಗಿಯುವ ವರೆಗೆ ಕೇಂದ್ರ ಸ್ಥಾನವನ್ನು ಬಿಟ್ಟು ತೆರಳಬಾರದು. ಅತಿ ಅವಶ್ಯವಿದ್ದಲ್ಲಿ ಮಾತ್ರ ಜಿಲ್ಲಾ ಚುನಾವಣಾಧಿಕಾರಿ ಅನುಮತಿಯನ್ನು ಪಡೆದು ತೆರಳಬೇಕೆಂದು ಅವರು ತಿಳಿಸಿದರು.
ಫ್ಲೆಕ್ಸ್, ಬ್ಯಾನರ್ ತೆಗೆಯಲು ಸೂಚನೆ
ಅಪರ ಜಿಲ್ಲಾಧಿಕಾರಿ ಶಶಿಧರ ಕುರೇರ, ಜಿಲ್ಲೆಯ ಎಲ್ಲ ಕಡೆಗಳಲ್ಲಿ ಸರ್ಕಾರದ ಸಾಧನೆಯ ಕುರಿತು ಅಳವಡಿಸಿರುವ ಹೋಲ್ಡಿಂಗ್ಸ್, ಫ್ಲೆಕ್ಸ್ ಮತ್ತು ಬಂಟಿಂಗ್ಸ್‌ಗಳನ್ನು ತೆಗೆದು ಹಾಕಬೇಕೆಂದು ಸಂಬಂಧಪಟ್ಟ ಗ್ರಾಪಂ ಮತ್ತು ತಹಸೀಲ್ದಾರ್‌ಗೆ ಸೂಚಿಸಿದರು. ಚುನಾವಣೆಗೆ ಅಗತ್ಯವಾದ ವಾಹನವನ್ನು ಅಧಿಕಾರಿಗಳು ಒದಗಿಸಬೇಕು ಎಂದು ಸೂಚಿಸಿದರು.
ಗದಗ ಜಿಲ್ಲಾಧಿಕಾರಿ ಎನ್.ಎಸ್. ಪ್ರಸನ್ನಕುಮಾರ್ ಮಾತನಾಡಿ, ಎಂಸಿಸಿ ತಂಡದ ಸದಸ್ಯರು ಚುನಾವಣೆಯ ಕಾನೂನು ಪಾಲನೆಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ತಿಳಿಸಿದರು.
ಸ್ವೀಪ್‌ನಿಂದ ಮತದಾನದಲ್ಲಿ ಹೆಚ್ಚಳ
ಜಿಪಂ ಸಿಇಒ ಕೆ.ಬಿ. ಆಂಜನಪ್ಪ ಮಾತನಾಡಿ, ಕಳೆದ ಚುನಾವಣೆಯಲ್ಲಿ ಹಾವೇರಿ ಜಿಲ್ಲೆ ಸ್ವೀಪ್ ಕಾರ್ಯಕ್ರಮ ಅತ್ಯಂತ ಉತ್ತಮವಾಗಿದ್ದು, ಶೇ.10ರಷ್ಟು ಮತದಾನ ಹೆಚ್ಚಳವಾಗಿತ್ತು ಹಾಗೂ ಚುನಾವಣಾ ಆಯೋಗ ಕೂಡ ಮೆಚ್ಚುಗೆ ವ್ಯಕ್ತಪಡಿಸಿತ್ತು. ಈ ಲೋಕಸಭಾ ಚುನಾವಣೆ ಕೂಡ ಸುಗಮವಾಗಿ ನಡೆಸಲು ಎಲ್ಲ ಅಧಿಕಾರಿಗಳ ಸಹಕಾರ ಅಗತ್ಯವಾಗಿದೆ. ಅಲ್ಲದೇ, ಮತದಾರರಿಗೆ ಮತದಾನದ ಬಗ್ಗೆ ಅರಿವು ಮೂಡಿಸಲು ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಜಿಲ್ಲಾ ಮಟ್ಟದಲ್ಲಿ ಸಮಿತಿಗಳನ್ನು ರಚಿಸಲಾಗಿದ್ದು, ಈ ಸಾರಿ ಸ್ಥಳೀಯ ಚಾನೆಲ್‌ಗಳ ಮೂಲಕ ಪ್ರಚಾರ, ಕಾಲೇಜುಗಳಲ್ಲಿ ವಿಶೇಷ ಶಿಬಿರಗಳ ಆಯೋಜನೆ, ಸರ್ಕಾರಿ ಇಲಾಖೆಗಳು, ಸಂಘ-ಸಂಸ್ಥೆಗಳೊಂದಿಗೆ ಮತದಾನ ಬಗ್ಗೆ ಜಾಗೃತಿ ಕಾರ್ಯಕ್ರಮ ನಡೆಸಲಾಗುವುದು ಎಂದು ತಿಳಿಸಿದರು.
ಗದಗ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೀರಣ್ಣ ತುರುಮರಿ, ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಾಲಕೃಷ್ಣ, ಗದಗ ಅಪರ ಜಿಲ್ಲಾಧಿಕಾರಿ ನಾಗರಾಜ ಮಾತನಾಡಿದರು.
 ಹಾವೇರಿ ಎಎಸ್ಪಿ ಡಿ.ಎಸ್. ಜಗಮೈಯ್ಯನವರ, ಜಿಲ್ಲಾ ಮಟ್ಟದ ಚುನಾವಣಾಧಿಕಾರಿ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.