ಹಾವೇರಿ

ಮುಕ್ತ, ನ್ಯಾಯಸಮ್ಮತ ಚುನಾವಣೆಗೆ ಸಹಕರಿಸಿ: ಜಿಲ್ಲಾಧಿಕಾರಿ ಸೂಚನೆ

Published On :

ಹಾವೇರಿ: ಚುನಾವಣಾ ಆಯೋಗವು ಲೋಕಸಭೆ ಸಾರ್ವತ್ರಿಕ ಚುನಾವಣೆ ಘೋಷಿಸಿದ್ದು ಮುಕ್ತ, ನ್ಯಾಯಸಮ್ಮತ ಹಾಗೂ ಶಾಂತಿಯುತವಾಗಿ ಚುನಾವಣಾ ಪ್ರಕ್ರಿಯೆ ನಡೆಸಬೇಕಿದೆ. ಈ ನಿಟ್ಟಿನಲ್ಲಿ ಚುನಾವಣೆಗೆ ನಿಯೋಜಿಸಿರುವ ಎಲ್ಲ ನೋಡಲ್ ಅಧಿಕಾರಿಗಳು ಸಮರ್ಪಕವಾಗಿ ಹಾಗೂ ದಕ್ಷತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಎಂ. ಮಂಜುನಾಥ ನಾಯಕ ಸೂಚಿಸಿದರು.
ನಗರದ ಜಿಲ್ಲಾ ಗುರುಭವನದಲ್ಲಿ ಲೋಕಸಭಾ ಚುನಾವಣೆಯ ನೀತಿ ಸಂಹಿತೆ, ಖರ್ಚು ವೆಚ್ಚ ಹಾಗೂ ಸ್ವೀಪ್ ಕಾರ್ಯಕ್ರಮದ ಕುರಿತು ಶನಿವಾರ ಏರ್ಪಡಿಸಿದ್ದ ಜಿಲ್ಲೆ ವ್ಯಾಪ್ತಿಯ ಬೂತ್ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು. ನಿಯೋಜಿಸಿರುವ ಎಲ್ಲ ಅಧಿಕಾರಿಗಳು ಕಟ್ಟುನಿಟ್ಟಾಗಿ ಚುನಾವಣೆಯ ನಿಯಮಗಳನ್ನು ಪಾಲಿಸಬೇಕು. ಚುನಾವಣಾ ಆಯೋಗದ ನಿರ್ದೇಶನದಂತೆ ನೋಡಲ್ ಅಧಿಕಾರಿಗಳನ್ನು ಹಾಗೂ ಸಹಾಯಕ ಸಿಬ್ಬಂದಿಯನ್ನು ನೇಮಕ ಮಾಡಲಾಗಿದೆ. ಲೋಕಸಭಾ ಸಾರ್ವತ್ರಿಕ ಚುನಾವಣೆ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಯಾವುದೇ ಗೊಂದಲಗಳಿಗೆ ಆಸ್ಪದ ನೀಡದೆ ಅಚ್ಚುಕಟ್ಟಾಗಿ ಕಾರ್ಯನಿರ್ವಹಿಸಬೇಕೆಂದು ಸೂಚಿಸಿದರು.
ಅಪರ ಜಿಲ್ಲಾಧಿಕಾರಿ ಶಶಿಧರ ಕುರೇರ ಮಾತನಾಡಿ, ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ತಾಲೂಕು ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಯಾವುದೇ ಸರ್ಕಾರಿ ಕಾರ್ಯಕ್ರಮಗಳನ್ನು ಮಾಡಬಾರದು. ಚುನಾವಣೆ ನಿಯಮಗಳನ್ನು ಕಟ್ಟುನಿಟ್ಟಾಗಿ ಅಧಿಕಾರಿಗಳು ಪಾಲಿಸಬೇಕು. ರಾಜಕೀಯ ಸಭೆ ಸಮಾರಂಭಗಳಿಗೆ ಅಧಿಕಾರಿಗಳು ಹೋಗಬಾರದು. ಜಿಲ್ಲೆಯ ಎಲ್ಲ ಇಲಾಖಾಧಿಕಾರಿಗಳು ಸಿಬ್ಬಂದಿ ವರ್ಗದವರಿಗೆ ಚುನಾವಣೆ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ರಜೆ ನೀಡಬಾರದು. ಸರ್ಕಾರದ ಸಾಧನೆಯನ್ನು ಬಿಂಬಿಸುವ ಫ್ಲೆಕ್ಸ್ ಮತ್ತು ಬಂಟಿಂಗ್ಸ್‌ಗಳನ್ನು ತೆಗೆದುಹಾಕಬೇಕೆಂದು ಈಗಾಗಲೇ ಅಧಿಕಾರಿಗಳಿಗೆ ಸೂಚಿಸಲಾಗಿದೆ. ತಕ್ಷಣವೇ ತಮ್ಮ ಸಿಬ್ಬಂದಿ ಮೂಲಕ ಅಂಥ ಫ್ಲೆಕ್ಸ್‌ಗಳನ್ನು ತೆಗೆಸಬೇಕು. ಫ್ಲೈಯಿಂಗ್ ಸ್ಕ್ವಾಡ್‌ಗಳನ್ನು ಪ್ರತಿಯೊಂದು ಹೋಬಳಿ ಮಟ್ಟಕ್ಕೆ ನೇಮಿಸಲಾಗಿದ್ದು, ಅವರೊಂದಿಗೆ ವಿಡಿಯೋಗ್ರಾಫರ್ ತಂಡವನ್ನು ನೇಮಕ ಮಾಡಲಾಗಿದೆ ಎಂದರು. ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಸ್ವೀಪ್ ಅಧ್ಯಕ್ಷ ಕೆ.ಬಿ. ಆಂಜನಪ್ಪ ಮಾತನಾಡಿ, ಲೋಕಸಭೆ ಚುನಾವಣೆ ಕೂಡ ಸುಗಮವಾಗಿ ನಡೆಸಲು ಈಗಾಗಲೇ ಜಿಲ್ಲಾ ಮಟ್ಟದ ಸಮಿತಿಗಳನ್ನು ರಚಿಸಲಾಗಿದ್ದು, ಶಿಕ್ಷಣ, ಆರೋಗ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ಫಾರಂಗಳನ್ನು ಶಾಲಾ ಮಕ್ಕಳಿಗೆ ನೀಡಿ ತೆಗೆದುಕೊಳ್ಳಲಾಗುವುದು. ಮತದಾನ ಜಾಗೃತಿಗೆ ಸಂಘ-ಸಂಸ್ಥೆಗಳ ಮೂಲಕ ಅರಿವು ಮೂಡಿಸಲಾಗುವುದು ಎಂದರು. ಎಸ್ಪಿ ಎನ್. ಶಶಿಕುಮಾರ, ಪೊಲೀಸ್ ಬಂದೋಬಸ್ತ್ ಕುರಿತು ಮಾತನಾಡಿದರು.
ಅಬಕಾರಿ ಉಪ ಆಯುಕ್ತ ಟಿ. ನಾಗರಾಜಪ್ಪ, ಸಾರಿಗೆ ಇಲಾಖೆಯ ಅಧಿಕಾರಿ ವಿ.ಡಿ. ತಹಸೀಲ್ದಾರ್, ಜಿಪಂ ಮುಖ್ಯ ಲೆಕ್ಕಾಧಿಕಾರಿ ಶಿವಪುತ್ರನ್ ಚುನಾವಣೆ ಕುರಿತು ಮಾಹಿತಿ ನೀಡಿದರು. ಡಿವೈಎಸ್ಪಿ ಡಿ.ಎಸ್. ಜಗಮೈನವರ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.