ಮತದಾರರಿಗೆ ಜಾಗೃತಿ ಅಗತ್ಯ
ಹಾವೇರಿ: ಮತದಾನದ ಮಹತ್ವ ಹಾಗೂ ಪ್ರಜಾಪ್ರಭುತ್ವದ ಸಹಾಯಕ ಅಂಶಗಳ ಕುರಿತು ಜನಸಾಮಾನ್ಯರಿಗೆ ಅರಿವು ಮೂಡಿಸುವುದು ಅಗತ್ಯವಾಗಿದೆ ಎಂದು ಜಿಲ್ಲಾ ಸತ್ರ ನ್ಯಾಯಾಧೀಶರಾದ ಎಸ್. ಸಾವಿತ್ರಿ ವಿನಾಯಕ ಹೇಳಿದರು.
ಶನಿವಾರ ಜಿಲ್ಲಾ ನ್ಯಾಯಾಲಯದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ನ್ಯಾಯವಾದಿಗಳ ಸಂಘದಿಂದ ಜರುಗಿದ ಮತದಾರರ ಜಾಗೃತಿ ಅಭಿಯಾನದ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಪ್ರತಿಯೊಬ್ಬ ಪ್ರಜೆ ತಪ್ಪದೇ ಮತದಾನ ಮಾಡಬೇಕು ಹಾಗೂ ಮತದಾನದ ಮಹತ್ವ ಅರಿಯಬೇಕು. 18 ವರ್ಷ ತುಂಬಿದ ಪ್ರತಿಯೊಬ್ಬರೂ ಮತದಾನಕ್ಕೆ ಅರ್ಹರಾಗಿದ್ದು, ಮತದಾನ ಮಾಡುವ ಮೂಲಕ ತಮ್ಮ ಹಕ್ಕನ್ನು ಚಲಾಯಿಸಬೇಕು ಎಂದರು.
ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಸ್.ಎ. ಹುದ್ದಾರ ಮಾತನಾಡಿ, ಮತದಾರರು ಯಾವುದೇ ಆಸೆ, ಆಮಿಷ ಮತ್ತು ಒತ್ತಡಕ್ಕೆ ಒಳಗಾಗದೇ ನಿರ್ಭೀತಿಯಿಂದ ಮತ ಚಲಾಯಿಸಬೇಕು ಎಂದು ತಿಳಿಸಿದರು.
ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಸ್ವಿಪ್ ಸಮಿತಿ ಅಧ್ಯಕ್ಷ ಕೆ.ಬಿ. ಆಂಜನಪ್ಪ ಮಾತನಾಡಿ, ಮತದಾನ ಪವಿತ್ರ ಕರ್ತವ್ಯವಾಗಿದ್ದು, 18 ವರ್ಷ ತುಂಬಿದ ಹಾಗೂ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿದ ಸಾರ್ವಜನಿಕರು ಏ. 17ರಂದು ತಪ್ಪದೇ ಮತ ಚಲಾಯಿಸುವ ಮೂಲಕ ತಮ್ಮ ಸಂವಿಧಾನ ಬದ್ಧ ಹಕ್ಕನ್ನು ಚಲಾಯಿಸಬೇಕು. ತಮ್ಮ ಕುಟುಂಬದ ಸದಸ್ಯರಿಗೆ ಮತದಾನದ ಮಹತ್ವ ತಿಳಿಸುವುದರೊಂದಿಗೆ ಮತದಾನ ಮಾಡುವಂತೆ ಪ್ರೇರೇಪಿಸಬೇಕೆಂದು ಕರೆ ನೀಡಿದರು.
ಈ ಕಾರ್ಯಕ್ರಮದಲ್ಲಿ ಹಿರಿಯ ದಿವಾಣಿ ನ್ಯಾಯಾಧೀಶರಾದ ಎಂ.ವಿ. ಚನ್ನಕೇಶವರೆಡ್ಡಿ, ಕಿರಿಯ ದಿವಾಣಿ ನ್ಯಾಯಾಧೀಶರಾದ ಎಸ್.ಬಿ. ಕೆಂಭಾವಿ, ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಡಾ. ಐ.ಎ. ಲೋಕಾಪುರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಲ್ಯಾಣ ಇಲಾಖೆಯ ವಿಜಯಕುಮಾರ, ಸಿಡಿಪಿಒ ಡಿ.ಎಚ್. ಲಲಿತಾ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಚ್.ಎಸ್. ರಾಘವೇಂದ್ರಸ್ವಾಮಿ, ಜಿಲ್ಲಾ ವಾರ್ತಾಧಿಕಾರಿ ಎಂ. ಜುಂಜಣ್ಣ ಇತರರು ಇದ್ದರು.
ಜಿಲ್ಲಾ ನ್ಯಾಯಾಲಯದ ಆವರಣದಿಂದ ಹೊರಟ ಮತದಾರರ ಜಾಗೃತಿ ಜಾಥಾ ಪ್ರವಾಸಿ ಮಂದಿರದ ಎದುರುಗಡೆ ಮಾನವ ಸರಪಳಿ ನಿರ್ಮಿಸಿ, ಜಾಥಾದಲ್ಲಿ ಪಾಲ್ಗೊಂಡ ಸದಸ್ಯರು ಮತದಾರರಲ್ಲಿ ಜಾಗೃತಿ ಮೂಡಿಸುವ ಘೋಷಣೆಗಳನ್ನು ಕೂಗಿದರು.
ಮತದಾರರ ಜಾಗೃತಿಗಾಗಿ ವೈವಿಧ್ಯಮಯ ಕಾರ್ಯಕ್ರಮ
ಹಾವೇರಿ: ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಎಲ್ಲ ಮತದಾರರು ತಪ್ಪದೇ ಮತಚಲಾಯಿಸಿ, ಮತದಾನ ಪ್ರಮಾಣ ಹೆಚ್ಚಾಗುವಂತೆ ಮಾಡಲು ಜಿಲ್ಲಾ ಸ್ವೀಪ್ ಸಮಿತಿಯಿಂದ ಮತದಾರರ ಜಾಗೃತಿಗೆ ವೈವಿಧ್ಯಮ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಕೆ.ಬಿ. ಆಂಜನಪ್ಪ ಹೇಳಿದರು.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ತಾಲೂಕುವಾರು ನೋಡಲ್ ಅಧಿಕಾರಿಗಳ ಸ್ವೀಪ್ ಸಮಿತಿಯ ಹಾಗೂ ಮಾದರಿ ನೀತಿ ಸಂಹಿತೆ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.
ಮತದಾರರನ್ನು ಕಡ್ಡಾಯ ಮತದಾನಕ್ಕೆ ಪ್ರೇರೇಪಿಸುವ ನಿಟ್ಟಿನಲ್ಲಿ ಈಗಾಗಲೇ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ, ಸಭೆ ಸಮಾರಂಭ, ಜಾಥಾ, ಮಾನವ ಸರಪಳಿ ಇತ್ಯಾದಿ ಕಾರ್ಯಕ್ರಮ ಹಮ್ಮಿಕೊಂಡಿದೆ. ಕಡ್ಡಾಯ ಮತದಾನಕ್ಕೆ ಉತ್ತೇಜನ ನೀಡಲು ಜಿಲ್ಲೆಯ ಎಲ್ಲ ಪದವಿ ಕಾಲೇಜು, ಪಾಲಿಟೆಕ್ನಿಕ್, ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ ಜಾಥಾ ಕಾರ್ಯಕ್ರಮ ಅಲ್ಲದೇ ಕಡ್ಡಾಯ ಮತದಾನದ ಪ್ರತಿಜ್ಞಾವಿಧಿ ಸ್ವೀಕಾರ ಕಾರ್ಯಕ್ರಮ ಹಮ್ಮಿಕೊಳ್ಳಬೇಕೆಂದು ತಾಪಂ ಇಒಗಳಿಗೆ ಸೂಚಿಸಿದರು.
ಜಿಲ್ಲೆಯ ಎಲ್ಲ ಅಂಗನವಾಡಿ ಕಾರ್ಯಕರ್ತೆಯರು, ಸ್ವ-ಸಹಾಯ, ಸ್ತ್ರೀ ಶಕ್ತಿ ಗುಂಪುಗಳ ಸದಸ್ಯರಿಂದ ಕರ ಪತ್ರಗಳ ಮೂಲಕ ಮನೆ ಮನೆಗೆ ಭೇಟಿ, ಕಡ್ಡಾಯ ಮತದಾನಕ್ಕೆ ಪ್ರೇರೇಪಿಸುವುದು, ಪ್ರತಿಜ್ಞಾವಿಧಿ ಸ್ವೀಕಾರಕ್ಕೆ ಸಹಿ ಸಂಗ್ರಹ ಕಾರ್ಯಕ್ಕಾಗಿ ಎಲ್ಲರಿಗೂ ಆಯಾ ತಾಲೂಕು ಕೇಂದ್ರದಲ್ಲಿ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳುವುದು, ಬೂತ್ಮಟ್ಟದ ಅಧಿಕಾರಿಗಳು (ಬಿಎಲ್ಓ) ವೋಟರ್ ಸ್ಲೀಪ್ಗಳನ್ನು ಮತದಾರರ ಮನೆ ಬಾಗಿಲಿಗೆ ತಲುಪಿಸುವ ಸಂದರ್ಭದಲ್ಲಿ ಕಡ್ಡಾಯ ಮತದಾನದ ಕುರಿತು ಮತದಾರರ ಕುಟುಂಬಗಳಿಗೆ ನೀತಿ ಸಂಹಿತೆ ಸಂಗ್ರಹಿಸುವಂತ ಮಹತ್ವದ ಕಾರ್ಯಕ್ರಮ ಹಮ್ಮಿಕೊಳ್ಳಬೇಕು. ಜಿಲ್ಲೆಯ ಪ್ರತಿ ಗ್ರಾಮ ಪಂಚಾಯಿತಿಯಿಂದ ಒಂದು ಸಾವಿರ ಪ್ಲೆಜ್ ಫಾರಂ ತೆಗೆದುಕೊಳ್ಳಬೇಕು. ಗ್ರಾಪಂ ವ್ಯಾಪ್ತಿಯಲ್ಲಿ ಬೀದಿ ನಾಟಕ, ಸಂಗೀತ ಕಾರ್ಯಕ್ರಮ ಏರ್ಪಡಿಸಬೇಕೆಂದು ಪಿಡಿಒಗಳಿಗೆ ಸೂಚಿಸಿದರು.
ಹಾನಗಲ್ಲ ತಾಲೂಕಿನಲ್ಲಿ ಕಳೆದ ಬಾರಿ ಚುನಾವಣೆಯಲ್ಲಿ ಕಡಿಮೆ ಮತದಾನವಾಗಿರುವುದರಿಂದ ವಿವಿಧ ಕಾರ್ಯಕ್ರಮಗಳನ್ನು ಹಾಕಿಕೊಂಡು ಮತದಾನಕ್ಕೆ ಪ್ರೇರೇಪಿಸಬೇಕು. ಚುನಾವಣೆಯನ್ನು ಮುಕ್ತ ಹಾಗೂ ನ್ಯಾಯ ಸಮ್ಮತವಾಗಿ ನಡೆಸುವ ಉದ್ದೇಶದಿಂದ ನೀತಿ ಸಂಹಿತೆ ಪಾಲನೆಯ ಬಗ್ಗೆ ನಿಗಾವಹಿಸಲು ಪ್ರತಿ ವಿಧಾನಸಭಾ ಕ್ಷೇತ್ರವಾರು ಸ್ಟ್ಯಾಟಿಕ್ ಸರ್ವೇಲೆನ್ಸ್ ತಂಡ, ಫ್ಲೈಯಿಂಗ್ ಸ್ಕ್ವಾಡ್, ಅಕ್ರಮ ಮದ್ಯ ಸಾಗಾಣಿಕೆ ಮತ್ತು ವಿತರಣೆ ಕುರಿತು ನಿಗಾವಹಿಸಲು ವಿವಿಧ ತಂಡ ರಚಿಸಲಾಗಿದೆ. ತಮ್ಮ ವಾಪ್ತಿಯ ಚೆಕ್ ಪೋಸ್ಟ್ಗಳನ್ನು ಗುರುತಿಸಿ ಹೆಚ್ಚಿನ ಗಮನ ನೀಡಬೇಕು. ಮತದಾನ ಕೇಂದ್ರಗಳಲ್ಲಿ ಸಾರ್ವಜನಿಕರಿಗಾಗಿ ಮತದಾನದ ದಿನದಂದು ಕುಡಿಯುವ ನೀರು ಇತ್ಯಾದಿ ಸವಲತ್ತುಗಳನ್ನು ಒದಗಿಸಬೇಕೆಂದು ಎಂಸಿಎಂಸಿ ತಂಡದ ಅಧಿಕಾರಿಗಳಿಗೆ ಸೂಚಿಸಿದರು. ಸಭೆಯಲ್ಲಿ ಡಿಡಿಪಿಐ ಎಸ್.ಬಿ. ಕೊಡ್ಲಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಚ್.ಎಸ್. ರಾಘವೇಂದ್ರಸ್ವಾಮಿ, ವಾರ್ತಾಧಿಕಾರಿ ಎಂ. ಜುಂಜಣ್ಣ, ತಾಲೂಕಿನ ಎಲ್ಲಾ ಕಾರ್ಯನಿರ್ವಹಣಾಧಿಕಾರಿಗಳು, ಎಂಸಿಎಂಸಿ ತಂಡದ ಅಧಿಕಾರಿಗಳು ಇದ್ದರು.
ಮತದಾನದಿಂದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮನ್ನಣೆ
ಬ್ಯಾಡಗಿ: ಸಮಾಜದ ಕಟ್ಟಕಡೆಯ ವ್ಯಕ್ತಿಯೂ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬೇಕು. ಅಂದಾಗ ಮಾತ್ರ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮನ್ನಣೆ ಸಿಗಲಿದೆ ಎಂದು ಚುನಾವಣಾಧಿಕಾರಿ ಡಾ. ರಾಜಣ್ಣ ಅಭಿಪ್ರಾಯ ವ್ಯಕ್ತಪಡಿಸಿದರು. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಶನಿವಾರ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಆಶ್ರಯದಲ್ಲಿ ಜರುಗಿದ ಮತದಾರ ಜಾಗೃತಿ (ಸ್ವೀಪ್) ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡಬೇಕಾದಲ್ಲಿ ಜನಾಭಿಪ್ರಾಯ ಸಂಗ್ರಹಣೆ ಅವಶ್ಯವಿದೆ. ಎಲ್ಲವನ್ನೂ ನಿರ್ಧರಿಸುವ ಸಂವಿಧಾನಾತ್ಮಕ ಹಕ್ಕನ್ನು ಸರ್ಕಾರ ದಯಪಾಲಿಸಿದ್ದರೂ ತಮಗೆ ಸೂಕ್ತವೆನಿಸಿದ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳುವಲ್ಲಿ ವಿಫಲರಾಗುತ್ತಿದ್ದೇವೆ. ಸಂವಿಧಾನಾತ್ಮಕವಾಗಿ ನೀಡಿದ ಮತದಾನದ ಹಕ್ಕನ್ನು ಪ್ರತಿಯೊಬ್ಬರೂ ಚಲಾಯಿಸುವಂತೆ ಮನವಿ ಮಾಡಿದರು. ತಹಸೀಲ್ದಾರ್ ಶಿವಶಂಕರ ನಾಯಕ್ ಮಾತನಾಡಿ, ಪ್ರಜಾತಂತ್ರ ವ್ಯವಸ್ಥೆಯಲ್ಲಿ ಅತ್ಯಧಿಕ ಮತಗಳನ್ನು ಪಡೆದವರು ಆಯ್ಕೆಯಾಗುತ್ತಾರೆ. ಆದರೆ ಇತ್ತೀಚೆಗೆ ಮತಗಟ್ಟೆಯಿಂದ ಹೊರಗುಳಿಯತ್ತಿರುವ ಜನರಿಂದ ಶೇಕಡಾವಾರು ಮತಗಳನ್ನು ಪರಿಗಣಿಸಿದ ಶೇ. 25ರಷ್ಟು ಮತಗಳನ್ನು ಪಡೆದವರು ಚುನಾಯಿತರಾಗುತ್ತಿದ್ದಾರೆ. ಹಾಗಿದ್ದರೆ ಇನ್ನುಳಿದ ಶೇ. 75 ಜನರ ಅಭಿಪ್ರಾಯವೇನು? ಇದರಿಂದ ಜನರ ಮನೋಸ್ಥಿತಿ ಅರ್ಥೈಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದರು. ವೇದಿಕೆಯಲ್ಲಿ ಟಿಇಓ ಎಸ್.ಆರ್. ಪಾಟೀಲ, ಬಿಈಒ ಪ್ರಸನ್ನಕುಮಾರ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಅಣ್ಣಪ್ಪ, ಪಶು ವೈದ್ಯಕೀಯ ಇಲಾಖೆಯ ಡಾ. ನಾಗರಾಜ, ಹಿಂದುಳಿದ ವರ್ಗಗಳ ಇಲಾಖೆಯ ಗೀತಾ ಕುಂದಾಪುರ ಇನ್ನಿತರರು ಉಪಸ್ಥಿತರಿದ್ದರು. ವ್ಯವಸ್ಥಾಪಕ ಮೂಲೇರ ಸ್ವಾಗತಿಸಿದರು. ಎಸ್.ಎಸ್. ಅರಳೀಕಟ್ಟಿ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

