ಇಂದು ಶಿರಹಟ್ಟಿಗೆ ನಾಯಕರ ದಂಡು
-ಮಹದೇವಪ್ಪ ಎಂ. ಸ್ವಾಮಿ
ಶಿರಹಟ್ಟಿ: ನಾಮಪತ್ರ ಸಲ್ಲಿಸುವ ಕಾರ್ಯ ಬುಧವಾರ ಕೊನೆಗೊಂಡಿದ್ದು, ಹಾವೇರಿ ಲೋಕಸಭಾ ಚುನಾವಣಾ ಪ್ರಚಾರಕ್ಕೆ ಈಗ ವಿಐಪಿ ನಾಯಕರ ಸರದಿ ಆರಂಭವಾಗುತ್ತಿದ್ದು, ಚುನಾವಣಾ ಕಣ ರಂಗೇರುತ್ತಿದೆ. ಬಿಜೆಪಿ ಪರ ಪ್ರಚಾರಕ್ಕೆ ಪಕ್ಷದ ರಾಜ್ಯ ನಾಯಕರಾದ ಮಾಜಿ ಸಿಎಂ ಜಗದೀಶ ಶೆಟ್ಟರ್, ಮಾಜಿ ಸಚಿವ ಕಳಕಪ್ಪ ಬಂಡಿ, ಶಾಸಕರಾದ ಶ್ರೀಶೈಲಪ್ಪ ಬಿದರೂರ, ರಾಮಣ್ಣ ಲಮಾಣಿ ಮತ್ತಿತರರು ಮಾ. 27ರಂದು ಶಿರಹಟ್ಟಿಗೆ ಆಗಮಿಸಲಿದ್ದು, ತಾಲೂಕಿನ ನಾಲ್ಕು ಜಿಪಂ ಕ್ಷೇತ್ರ ವ್ಯಾಪ್ತಿಯಲ್ಲಿ ಪಕ್ಷದ ಹಾವೇರಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಶಿವಕುಮಾರ ಉದಾಸಿ ಪರವಾಗಿ ಬಹಿರಂಗ ಸಭೆ ನಡೆಸಿ ಮತಯಾಚನೆ ಮಾಡಲಿದ್ದಾರೆ.
ಇನ್ನೊಂದು ವಾರದಲ್ಲಿ ಬಿಜೆಪಿಯ ಮಾಜಿ ಸಚಿವ ಶ್ರೀರಾಮುಲು ಸೇರಿದಂತೆ ಮತ್ತಿತರ ನಾಯಕರು ಆಗಮಿಸಿ ಪಕ್ಷದ ಅಭ್ಯರ್ಥಿ ಪರ ಪ್ರಚಾರ ನಡೆಸುವರು. ಬಿಜೆಪಿ ಜಿಲ್ಲೆಯಲ್ಲಿ ಮುಖ್ಯವಾಗಿ ಮಾಜಿ ಸಚಿವ ಶ್ರೀರಾಮುಲು ಅವರನ್ನು ನಂಬಿಕೊಂಡಿದ್ದು, ಅವರು ಪ್ರಚಾರ ಕೈಗೊಂಡರೆ ಪಕ್ಷದ ಅಭ್ಯರ್ಥಿಗಳಿಗೆ ಅನುಕೂಲವಾಗುತ್ತದೆ ಎಂಬ ಸುದ್ದಿ ಎಲ್ಲೆಡೆ ಕೇಳಿ ಬರುತ್ತಿದೆ. ಅದಕ್ಕಾಗಿ ಈಗಾಗಲೇ ಶ್ರೀರಾಮುಲು ಅವರಿಗೆ ಪ್ರಚಾರಕ್ಕೆ ಆಹ್ವಾನಿಸಲಾಗಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.
ಮನೆ ಮನೆಗೆ ತೆರಳಿ ಮೋದಿ ಪರ ಪ್ರಚಾರ: ಈಗಾಗಲೇ ಸ್ಥಳೀಯ ಬಿಜೆಪಿ ಮುಖಂಡರು ಪಪಂ ವ್ಯಾಪ್ತಿಯ 17 ವಾರ್ಡ್ಗಳಲ್ಲಿ ಮನೆ ಮನೆಗೆ ತೆರಳಿ ಮೋದಿಯವರ ಚರಿತ್ರೆ ಪುಸ್ತಕ ಮುಟ್ಟಿಸುವ ಕಾರ್ಯಕ್ರಮದಲ್ಲಿ ಭರ್ಜರಿ ಪ್ರಚಾರ ಕಾರ್ಯ ನಡೆಸಿದ್ದು, ಗ್ರಾಮೀಣ ಪ್ರದೇಶದಲ್ಲಿಯೂ ಬಿಜೆಪಿ ಪಕ್ಷವನ್ನು ಬಲಿಷ್ಠಗೊಳಿಸಲು ಮುಖಂಡರು ಕಾರ್ಯಪ್ರವೃತ್ತರಾಗಿದ್ದಾರೆ. ಬಹುಶಃ ಚುನಾವಣಾ ಪೂರ್ವ ಸಮೀಕ್ಷೆ ಹೆಚ್ಚು ಹರ್ಷ ತಂದಿದ್ದು, ನರೇಂದ್ರ ಮೋದಿ ಅವರನ್ನು ಪ್ರಧಾನಿಯನ್ನಾಗಿ ಮಾಡುವ ಹುಮ್ಮಸ್ಸಿನಲ್ಲಿ ಪ್ರಚಾರಕಾರ್ಯ ತೀವ್ರಗೊಳಿಸಿರುವುದು ಕಂಡುಬರುತ್ತಿದೆ. ಗುರುವಾರ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಪಟ್ಟಣದಲ್ಲಿ ಬಿಜೆಪಿ ಕಾರ್ಯಾಲಯ ಉದ್ಘಾಟನೆ ನೆರವೇರಿಸಿ ಬಸವೇಶ್ವರ ವೃತ್ತದಲ್ಲಿ ಬಹಿರಂಗ ಸಭೆ ಉದ್ದೇಶಿಸಿ ಮಾತನಾಡಲಿದ್ದಾರೆ. ಚುನಾವಣೆಯಲ್ಲಿ ಜನರನ್ನು ಆಕರ್ಷಿಸುವ ನಿಟ್ಟಿನಲ್ಲಿ ಬಿಜೆಪಿ ಮುಂಬರುವ ದಿನಗಳಲ್ಲಿ ನಟ-ನಟಿಯರನ್ನು ಪ್ರಚಾರ ಕಾರ್ಯಕ್ಕೆ ಆಹ್ವಾನಿಸಿದ್ದು, ದಂಡು ಪಟ್ಟಣಕ್ಕೆ ಹರಿದು ಬರಲಿದೆ. ಶಿರಹಟ್ಟಿ ಪಟ್ಟಣದಲ್ಲಿ ಬಹಿರಂಗ ಸಭೆ ಮುಗಿದ ನಂತರ ತಾಲೂಕಿನ ಬೆಳ್ಳಟ್ಟಿ, ಹೆಬ್ಬಾಳ, ಮಾಗಡಿ ಮತ್ತು ಶಿಗ್ಲಿ ಜಿಲ್ಲಾ ಪಂಚಾಯತ ಕ್ಷೇತ್ರದಲ್ಲಿಯೂ ಪ್ರಚಾರ ಕಾರ್ಯ ಕೈಗೊಳ್ಳಲಿದ್ದಾರೆ ಎಂದು ಪಕ್ಷದ ಮೂಲಗಳಿಂದ ತಿಳಿದು ಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

