ಮಡಿಕೇರಿ: ಮಡಿಕೇರಿ ನಗರ ವ್ಯಾಪ್ತಿಯಲ್ಲಿನ ಅನಿಯಮಿತ ವಿದ್ಯುತ್ ಕಡಿತ ಹಾಗೂ ಕಲುಷಿತ ನೀರು ಸರಬರಾಜನ್ನು ವಿರೋಧಿಸಿ ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾದ ನಗರ ಘಟಕದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಯಿತು.
ಎಸ್ಡಿಪಿಐ ನಗರಾಧ್ಯಕ್ಷ ನೂರುದ್ದೀನ್, ಜಿಲ್ಲಾಧ್ಯಕ್ಷ ಫಜಲುಲ್ಲಾ ನೇತೃತ್ವದಲ್ಲಿ ಶುಕ್ರವಾರ ಬೆಳಗ್ಗೆ ಪಕ್ಷದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಸಮಾವೇಶಗೊಂಡು ಘೋಷಣೆಗಳ ಸಹಿತ ಪ್ರತಿಭಟನೆ ನಡೆಸಿ, ಅಪರ ಜಿಲ್ಲಾಧಿಕಾರಿ ಡಾ. ಶಿವಶಂಕರ್ ಅವರಿಗೆ ಮನವಿ ಸಲ್ಲಿಸಿದರು.
ನಗರಸಭಾ ವ್ಯಾಪ್ತಿಯಲ್ಲಿ ಕಳೆದ ಎರಡು ತಿಂಗಳಿನಿಂದ ಸಮರ್ಪಕವಾಗಿ ವಿದ್ಯುತ್ ಸರಬರಾಜಾಗುತ್ತಿಲ್ಲ. ವಿದ್ಯುತ್ ಇಲಾಖೆ ಮನಬಂದಂತೆ ಲೋಡ್ಶೆಡ್ಡಿಂಗ್ ಮಾಡುತ್ತಿರುವುದು ಅವೈಜ್ಞಾನಿಕ. ಇದರಿಂದ ವಿದ್ಯಾರ್ಥಿಗಳನ್ನು ಒಳಗೊಂಡಂತೆ ವಾಣಿಜ್ಯೋದ್ಯಮಿಗಳು, ಸಾರ್ವಜನಿಕರು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆಂದು ಮನವಿಯಲ್ಲಿ ತಿಳಿಸಲಾಗಿದೆ.
ನಗರದ ಕೆಲ ಬಡಾವಣೆಗಳಲ್ಲಿ ಕಲುಷಿತ ನೀರು ಸರಬರಾಜಾಗುತ್ತಿದ್ದು, ಈ ಬಗ್ಗೆ ನಗರಸಭೆಯ ಅಧಿಕಾರಿಗಳು ಪರಿಶೀಲಿಸಿ ಕಲುಷಿತ ನೀರು ಸರಬರಾಜಾಗದಂತೆ ಎಚ್ಚರಿಕೆ ವಹಿಸಲು ನಗರಸಭೆಗೆ ಸೂಚನೆ ನೀಡುವಂತೆ ಜಿಲ್ಲಾಡಳಿತವನ್ನು ಒತ್ತಾಯಿಸಲಾಗಿದೆ.
ಪ್ರತಿಭಟನೆಯಲ್ಲಿ ಎಸ್ಡಿಪಿಐನ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಮಿನ್ ಮೊಹಿಸಿನ್, ನಗರ ಕಾರ್ಯದರ್ಶಿ ಅಬ್ದುಲ್ ಅಡ್ಕಾರ್, ಉಪಾಧ್ಯಕ್ಷ ಖಲೀಲ್, ಖಜಾಂಚಿ ಬಷೀರ್ ಸೇರಿದಂತೆ ಪಕ್ಷದ ವಿವಿಧ ಘಟಕದ ಪದಾಧಿಕಾರಿಗಳು ಪಾಲ್ಗೊಂಡಿದ್ದರು.