28ರಂದು ಫೀ.ಮಾ. ಕಾರ್ಯಪ್ಪ ಜನ್ಮದಿನಾಚರಣೆ

Updated on: 

ಮಡಿಕೇರಿ: ವೀರಾ ಸೇನಾನಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಜನ್ಮ ದಿನಾಚರಣೆಯನ್ನು 28ರಂದು ಅರ್ಥಪೂರ್ಣವಾಗಿ ಆಚರಣೆ ಮಾಡಲು ಎಲ್ಲಾ ರೀತಿಯ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಎನ್.ವಿ. ಪ್ರಸಾದ್ ಸೂಚನೆ ನೀಡಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಾರ್ಯಪ್ಪ ಜನ್ಮದಿನಾಚರಣೆ ಸಂಬಂಧಿತ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಜನ್ಮ ದಿನಾಚರಣೆಯನ್ನು ಅಚ್ಚುಕಟ್ಟಾಗಿ ಆಚರಣೆ ಮಾಡಲು ವಿವಿಧ ಇಲಾಖೆ ಅಧಿಕಾರಿಗಳು ಕೈ ಜೋಡಿಸಿ ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.
ಗಾಂಧಿ ಮೈದಾನದಲ್ಲಿ ನಡೆಯುವ ಸಭಾ ಕಾರ್ಯಕ್ರಮಕ್ಕೆ ಶಾಲಾ ಕಾಲೇಜು ವಿದ್ಯಾರ್ಥಿಗಳು, ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತಾಗಲು ಮುತುವರ್ಜಿ ವಹಿಸುವುದು. ಗಾಂಧಿ ಮೈದಾನದಲ್ಲಿ ವೇದಿಕೆ ನಿರ್ಮಾಣ, ಶಾಮಿಯಾನ, ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ, ಅತಿಥಿಗಳನ್ನು ಆಹ್ವಾನಿಸುವುದು ಮತ್ತಿತರವನ್ನು ಅಚ್ಚುಕಟ್ಟಾಗಿ ನಿರ್ವಹಣೆ ಮಾಡಲು ಕ್ರಮವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.
ಸಭಾ ಕಾರ್ಯಕ್ರಮದಲ್ಲಿ ಸ್ವಾಗತ, ನಾಡಗೀತೆ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವ್ಯವಸ್ಥಿತವಾಗಿ ನಿರ್ವಹಣೆ ಮಾಡುವ ಬಗ್ಗೆ ಸೈನಿಕ ಕಲ್ಯಾಣ ಮತ್ತು ಪುನರ್ವವಸತಿ ಇಲಾಖೆ ಹಾಗೂ ನಗರಸಭೆ ಪೌರಾಯುಕ್ತರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಯೊಂದಿಗೆ ಸಹಕರಿಸುವಂತೆ ಡಾ.ಎನ್.ವಿ. ಪ್ರಸಾದ್ ಸಲಹೆ ಮಾಡಿದರು.
ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಜಯಂತಿಯಂದು ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ವತಿಯಿಂದ ಯಾವುದಾದರೂ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಬಹುದಾಗಿದೆ ಎಂದು ಸಲಹೆ ಮಾಡಿದರು.
ಉಪ ಪೊಲೀಸ್ ವರಿಷ್ಠಾಧಿಕಾರಿ ರಾಜೀವ್ ಮಾಂಗ್, ಕನ್ನಡ ಮತ್ತು ಸಂಸ್ಕೃತಿ ಸಹಾಯಕ ನಿರ್ದೇಶಕಿ ಇಂದ್ರಮ್ಮ, ಪೌರಾಯುಕ್ತ ಎನ್.ಎಂ. ಶಶಿಕುಮಾರ್, ಸೈನಿಕ ಕಲ್ಯಾಣ ಇಲಾಖೆಯ ಬಿ.ಆರ್. ಶೆಟ್ಟಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಬಸವರಾಜು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಲಿಂಗರಾಜು, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಟಿ. ಸ್ವಾಮಿ, ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ಗುರುಮೂರ್ತಿ, ಶಿಕ್ಷಣಾಧಿಕಾರಿ ಕೆ.ವಿ. ಸುರೇಶ್, ಉಪನ್ಯಾಸಕರಾದ ದಯಾನಂದ, ಕರಿಬಸಪ್ಪ ಮತ್ತಿತರರು ಇದ್ದರು.
30ರಂದು ಗಾಂಧಿ ಪುಣ್ಯತಿಥಿ, ಹುತಾತ್ಮರ ದಿನಾಚರಣೆ
ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯ ಪುಣ್ಯತಿಥಿ ಹಾಗೂ ಹುತಾತ್ಮರ ದಿನಾಚರಣೆಯನ್ನು 30 ರಂದು ಅರ್ಥಪೂರ್ಣವಾಗಿ ಆಚರಿಸುವ ಬಗ್ಗೆ ಜಿಲ್ಲಾಧಿಕಾರಿ ಡಾ.ಎನ್.ವಿ. ಪ್ರಸಾದ್ ಅಧ್ಯಕ್ಷತೆಯಲ್ಲಿ ಮಂಗಳವಾರ ಸಭೆ ನಡೆಯಿತು.
ಜಿಲ್ಲಾಧಿಕಾರಿ ಡಾ.ಎನ್.ವಿ. ಪ್ರಸಾದ್ ಮಾತನಾಡಿ, ಮಹಾತ್ಮ ಗಾಂಧೀಜಿ ಅವರ ಪುಣ್ಯತಿಥಿ ಹಾಗೂ ಹುತಾತ್ಮರ ದಿನಾಚರಣೆಯು ಅಪರೂಪದ ಕಾರ್ಯಕ್ರಮವಾಗಿದ್ದು, ಕಳೆದ ವರ್ಷದಂತೆ ಈ ಬಾರಿಯು ಖಜಾನೆಯಲ್ಲಿರುವ ಚಿತಾಭಸ್ಮವನ್ನು ಹೊರತೆಗೆದು ಪೊಲೀಸ್ ಬ್ಯಾಂಡ್‌ನೊಂದಿಗೆ ಮೆರವಣೆಗೆ ಮೂಲಕ ಗಾಂಧಿ ಮೈದಾನಕ್ಕೆ ತೆರಳಲಾಗುತ್ತದೆ. ಗಾಂಧಿ ಮಂಟಪದಲ್ಲಿ ಸರ್ವಧರ್ಮ ಪ್ರಾರ್ಥನೆ ಹಾಗೂ ಭಜನೆ ಕಾರ್ಯಕ್ರಮ ನಡೆಯಲಿದ್ದು, ಅಧಿಕಾರಿಗಳು, ಸಿಬ್ಬಂದಿ ಹಾಗೂ ಸರ್ವೋದಯ ಸಮಿತಿ ಸದಸ್ಯರು ಪಾಲ್ಗೊಳ್ಳಲಿದ್ದಾರೆ ಎಂದು ಜಿಲ್ಲಾಧಿಕಾರಿ  ತಿಳಿಸಿದರು.
ಗಾಂಧಿ ಮಂಟಪದ ಬಳಿ ಗಾಂಧೀಜಿ ಅವರ ಸ್ಮಾರಕ ಭವನ ನಿರ್ಮಾಣಕ್ಕೆ ಸಂಬಂಧಿಸಿದಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಹೇಳಿದರು.
ಸರ್ವದೋಯ ಸಮಿತಿ ಸದಸ್ಯ ಕೋಡಿ ಚಂದ್ರಶೇಖರ್ ಮಾತನಾಡಿ, ಗಾಂಧಿ ಮಂಟಪದ ಬಳಿ ಶಾಶ್ವತ ಸ್ಮಾರಕ ಭವನ ನಿರ್ಮಾಣ ಮಾಡುವಂತಾಗಬೇಕು ಎಂದು ಮನವಿ ಮಾಡಿದರು.
ಸರ್ವೋದಯ ಸಮಿತಿ ಸದಸ್ಯ  ಕೋಡಿ ಚಂದ್ರಶೇಖರ್, ವಾಸುದೇವ, ಭಾರತೀಯ ಸೇವಾದಳದ ಭಾರಿಕೇರ ಗಣೇಶ್, ಸ್ಕೌಟ್ಸ್ ಮತ್ತು ಗೈಡ್ಸ್‌ನ ಜಿಲ್ಲಾ ಪ್ರಧಾನ ಆಯುಕ್ತ ಕೆ.ಟಿ. ಬೇಬಿ ಮ್ಯಾಥ್ಯು, ಫಿಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ಎನ್.ಎಸ್.ಎಸ್. ಅಧಿಕಾರಿ ಸುರೇಶ್ ಮತ್ತಿತರರು ಇದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com