ಜೀವಸಂಕುಲ ಉಳಿವಿಗೆ ಪರಿಸರ ರಕ್ಷಣೆ ಅಗತ್ಯ: ಅಂಜನಪ್ಪ
ಮಡಿಕೇರಿ: ಇತ್ತೀಚಿನ ದಿನಗಳಲ್ಲಿ ಜಾಗತಿಕ ಪರಿಸರದ ಅಸಮತೋಲನದಿಂದಾಗಿ ಇಡೀ ಜೀವ ಸಂಕುಲದ ಮೇಲೆ ಕೆಟ್ಟ ಪರಿಣಾಮ ಉಂಟಾಗುತ್ತಿದೆ. ಆದ್ದರಿಂದ ಪರಿಸರ ಸಂರಕ್ಷಣೆ ಮಾಡುವಲ್ಲಿ ಪ್ರತಿಯೊಬ್ಬರೂ ಮುಂದಾಗಬೇಕಿದೆ ಎಂದು ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೆ.ಬಿ. ಅಂಜನಪ್ಪ ಕರೆ ನೀಡಿದ್ದಾರೆ.
ಜಿಲ್ಲಾಡಳಿತ, ಮಾಲಿನ್ಯ ನಿಯಂತ್ರಣ ಮಂಡಳಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ಸಂಯುಕ್ತ ಆಶ್ರಯದಲ್ಲಿ ನಗರದ ದೇವರಾಜ ಅರಸು ಭವನದಲ್ಲಿ ನಡೆದ 'ಪರಿಸರ ಮಿತ್ರ ಶಾಲಾ ಪ್ರಶಸ್ತಿ' ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.
ಪರಿಸರ ಸಂರಕ್ಷಣೆ ಮಾಡಿದಾಗ ಮಾತ್ರ ಜೀವ ಸಂಕುಲ ಉಳಿಯಲು ಸಾಧ್ಯ. ಆ ನಿಟ್ಟಿನಲ್ಲಿ ಉತ್ತಮ ವಾತಾವರಣ ನಿರ್ಮಾಣ ಮಾಡಲು ಹೆಚ್ಚು ಗಿಡಗಳನ್ನು ನೆಟ್ಟು ಹವಾಮಾನದಲ್ಲಿ ಸಮತೋಲನ ತರಲು ಪ್ರಯತ್ನಿಸಬೇಕು ಎಂದು ಅಂಜನಪ್ಪ ಅಭಿಪ್ರಾಯಪಟ್ಟರು.
ಕೊಡಗು ಜಿಲ್ಲೆಯ ಕಾವೇರಿ ನದಿ ಪಾತ್ರದಲ್ಲಿ ಜಲ ಮಾಲಿನ್ಯ ತಡೆಯುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ. ಕಾವೇರಿ ನದಿ ಪಾತ್ರದಲ್ಲಿನ 21 ಗ್ರಾ.ಪಂ. ವ್ಯಾಪ್ತಿಯಲ್ಲಿ ಘನ ಮತ್ತು ದ್ರವ ತ್ಯಾಜ್ಯಗಳನ್ನು ವಿಲೇವಾರಿ ಮಾಡಲು ಮುತುವರ್ಜಿ ವಹಿಸಲಾಗಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಗ್ರಾಪಂಗಳಲ್ಲಿ ತ್ಯಾಜ್ಯವನ್ನು ಸಮರ್ಪಕ ವಿಲೇವಾರಿ ಮಾಡಲು ಕ್ರಮ ವಹಿಸಲಾಗುವುದು ಎಂದು ಅವರು ತಿಳಿಸಿದರು.
ಉಪ ಪೊಲೀಸ್ ವರಿಷ್ಠಾಧಿಕಾರಿ ರಾಜೀವ್ ಮಾಂಗ್ 'ನಿಸರ್ಗ ಸಿರಿ' ಕಿರುಹೊತ್ತಿಗೆ ಬಿಡುಗಡೆ ಮಾಡಿ, ವನ್ಯಜೀವಿಗಳಿಗೆ ಅರಣ್ಯದಲ್ಲಿ ಆಹಾರ ಸಿಗದೆ ಇತ್ತೀಚಿನ ದಿನಗಳಲ್ಲಿ ಕಾಡು ಪ್ರಾಣಿಗಳು ನಾಡಿಗೆ ಬರುವಂತಾಗಿದೆ. ಅರಣ್ಯದಲ್ಲಿ ವನ್ಯ ಪ್ರಾಣಿಗಳಿಗೆ ಬೇಕಿರುವ ಆಹಾರ, ಗಿಡ- ಮರಗಳನ್ನು ಬೆಳೆಸುವಂತಾಗಬೇಕು ಎಂದು ಸಲಹೆ ಮಾಡಿದರು.
ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಪ್ರಧಾನ ಆಯುಕ್ತ ಕೆ.ಟಿ.ಬೇಬಿ ಮ್ಯಾಥ್ಯೂ ಮಾತನಾಡಿದರು.
ಮಾಲಿನ್ಯ ನಿಯಂತ್ರಣ ಮಂಡಳಿಯ ಹಿರಿಯ ಪರಿಸರ ಅಧಿಕಾರಿ ಎಂ.ಲಕ್ಷ್ಮಣ್ ಮಾತನಾಡಿ, ಜಿಲ್ಲೆಯಲ್ಲಿ ಕಾಫಿ ಪಲ್ಪಿಂಗ್ನಿಂದ ಉಂಟಾಗುವ ಮಾಲಿನ್ಯ ತಡೆಯುವ ನಿಟ್ಟಿನಲ್ಲಿ ಕ್ರಮ ವಹಿಸಲಾಗಿದೆ. ಇತ್ತೀಚಿನ ದಿನಗಳಲ್ಲಿ ಕಾಫಿ ಪಲ್ಪಿಂಗ್ನಿಂದ ಉಂಟಾಗುವ ಮಾಲಿನ್ಯ ಸಂಬಂಧಿಸಿದಂತೆ ಯಾವುದೇ ದೂರುಗಳು ಕೇಳಿ ಬಂದಿಲ್ಲ ಎಂದು ತಿಳಿಸಿದರು.
ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿ ಎಂ.ಜಿ. ರಘುರಾಮ್ ಮಾತನಾಡಿದರು. ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಬಿ.ಎಚ್. ಬಸವರಾಜು, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಎಚ್.ಡಿ. ಪುಟ್ಟರಾಜು, ಶಿಕ್ಷಣಾಧಿಕಾರಿ ಕೆ.ವಿ. ಸುರೇಶ್, ರಾಜ್ಯ ವಿಜ್ಞಾನ ಪರಿಷತ್ ಕಾರ್ಯಕಾರಿ ಸಮಿತಿ ಸದಸ್ಯ ಟಿ.ಜಿ. ಪ್ರೇಮ್ ಕುಮಾರ್, ಸ್ಕೌಟ್ಸ್ ಮತ್ತು ಗೈಡ್ಸ್ನ ಅಣ್ಣಯ್ಯ, ಪ್ರಧಾನ ಕಾರ್ಯದರ್ಶಿ ದಮಯಂತಿ, ಮಾರ್ಗರೇಟ್ ಲಸ್ರಾದೋ, ಆರತಿ ವಿ. ಶೆಣೈ ಮತ್ತಿತರರು ಇದ್ದರು.
ಶಿಕ್ಷಣ ಸಂಯೋಜಕ ಎಚ್.ಆರ್. ಮುತ್ತಪ್ಪ ಸ್ವಾಗತಿಸಿದರು. ಶಿಕ್ಷಕರಾದ ಕೆ.ವಿ. ರಂಜಿತ್, ಉಮಾಪತಿ ನಿರೂಪಿಸಿದರು. ಪರಿಸರ ಅಧಿಕಾರಿ ಮಹೇಂದ್ರ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

