ಕೊಡಗು

'ಮೀನಾ'ದಲ್ಲಿ ಮಕ್ಕಳ ಪ್ರತಿಭೆ ಅನಾವರಣ

Published On :

ಮಡಿಕೇರಿ: ಗ್ರಾಮೀಣ ವಿದ್ಯಾರ್ಥಿಗಳಲ್ಲಿ ವಿಷಯ ಜ್ಞಾನ ಹಾಗೂ ನಾನಾ ಪ್ರತಿಭೆಗಳಿದ್ದರೂ ಅದನ್ನು ವೇದಿಕೆಗಳಲ್ಲಿ, ಸಭೆ ಸಮಾರಂಭಗಳಲ್ಲಿ ಪ್ರದರ್ಶಿಸಲು ಸಾಧ್ಯವಾಗದೆ ಆತ್ಮ ಸ್ಥೈರ್ಯದಿಂದ ತೊಳಲಾಡುವುದನ್ನು ಕಾಣುತ್ತೇವೆ. ಇದನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಮಾಧ್ಯಮಿಕ ಶಾಲಾ ಹಂತದಲ್ಲಿ ವಿದ್ಯಾಥರ್‌ಗಳಿಗೆ ಸಂವೇದನಾ ಶೀಲತೆ, ಜೀವನ ಕೌಶಲ್ಯ ಹಾಗೂ ನಾಯಕತ್ವ ಗುಣಗಳನ್ನು ವೃದ್ಧಿಸಬೇಕು ಎಂಬ ಉದ್ದೇಶದಿಂದ ನಗರದ ಸಂತ ಜೋಸೆಫರ ಸಂಯುಕ್ತ ಪ್ರೌಢಶಾಲೆಯಲ್ಲಿ ಗುರುವಾರದಂದು ಜಿ.ಪಂ, ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ “ÉßÞ«Û’ ಕಾರ್ಯಕ್ರಮ ನಡೆಯಿತು.
ವಿವಿಧ ಸ್ಪರ್ಧೆ: ವಿದ್ಯಾರ್ಥಿಗಳು ಚರ್ಚಾಸ್ಪರ್ಧೆ, ಪ್ರಬಂಧ, ರಂಗೋಲಿ ಸ್ಪರ್ಧೆ, ಏಕಪಾತ್ರಾಭಿನಯ, ಅಣಕು ಪ್ರದರ್ಶನ, ಸಮೂಹ ನೃತ್ಯ ಮತ್ತಿತರರವನ್ನು ಮೀನಾ ಕಾರ್ಯಕ್ರಮದ ಮೂಲಕ ಏರ್ಪಡಿಸಿ ಗ್ರಾಮೀಣ ವಿದ್ಯಾರ್ಥಿಗಳಲ್ಲಿ ಆತ್ಮಸ್ಥೈರ್ಯ ಮತ್ತು ವಿಶ್ವಾಸವನ್ನು ತುಂಬುವ ದಿಸೆಯಲ್ಲಿ ಕಾರ್ಯಕ್ರಮ ಜರುಗಿತು.
ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಕಕ್ಕಬ್ಬೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಮೋಹಿನಿ ಪಿ.ಎಂ. ಮಾತನಾಡಿ ಪುರುಷ ಪ್ರಧಾನ ಸಮಾಜದಲ್ಲಿ ಹೆಣ್ಣು ಮಕ್ಕಳ ಮೇಲೆ ನಿರಂತರ ಶೋಷಣೆ ನಡೆಯುತ್ತಿದೆ. ಇದು ತಪ್ಪಬೇಕು. ಹೆಣ್ಣು ಮಕ್ಕಳನ್ನು ಅಕ್ಷರಸ್ಥರನ್ನಾಗಿ ಮಾಡಿದರೆ ಸಮಾಜ ಅಭಿವೃದ್ಧಿ ಹೊಂದಲು ಸಾಧ್ಯ. ಬಾಲ್ಯ ವಿವಾಹ, ಬಾಲ ಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆ ಮಾಡಬೇಕು. ಹಾಗೆಯೇ ಲಿಂಗ ತಾರತಮ್ಯ ಹೋಗಲಾಡಿಸಲು ಪ್ರಯತ್ನಿಸಬೇಕು ಎಂದು ವಿದ್ಯಾರ್ಥಿನಿ ಹೇಳಿದ್ದು ಮಕ್ಕಳ ಬೌದ್ಧಿಕತೆಯನ್ನು ಪ್ರದರ್ಶಿಸುವಂತಿತ್ತು.
ಕಗ್ಗೋಡ್ಲು ಹಿರಿಯ ಪ್ರಾಥಮಿಕ ಶಾಲೆಯ ಎಚ್.ಕೆ. ಅಂಜನ, ಫಾಸಿಲ್, ಅಸ್ಮೀನಾ ಮತ್ತಿತರರು ಹೆಣ್ಣು ಮಕ್ಕಳಲ್ಲಿ ಆತ್ಮವಿಶ್ವಾಸ ತುಂಬುವಂತಾಗಬೇಕು. ಹೆಣ್ಣು ಮಕ್ಕಳ ಸಬಲೀಕರಣವಾಗಲು ಶಿಕ್ಷಣವನ್ನು ಕಡ್ಡಾಯವಾಗಿ ಕೊಡಿಸಬೇಕು. ದೇಶದಲ್ಲಿ ನಡೆಯುತ್ತಿರುವ ಅತ್ಯಾಚಾರಗಳು ನಿಲ್ಲಬೇಕು ಎಂದು ವಿದ್ಯಾರ್ಥಿನಿಯರು ಪ್ರತಿಪಾದಿಸಿದರು.
ಸ್ತ್ರೀ ಶಿಕ್ಷಣ ಅಗತ್ಯ: ಅಧ್ಯಕ್ಷತೆ ವಹಿಸಿದ್ದ ವಿದ್ಯಾರ್ಥಿನಿ ಶೃತಿ ಮಾತನಾಡಿ ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ. ಹೆಣ್ಣು ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ಕೊಡಿಸಬೇಕು. ವರದಕ್ಷಿಣೆ, ಲಿಂಗ ತಾರತಮ್ಯ ವಿರುದ್ಧ ಎಲ್ಲರೂ ಕೈಜೋಡಿಸಿ ಹೋರಾಟ ಮಾಡಬೇಕು ಎಂದು ವಿದ್ಯಾರ್ಥಿನಿ ಕರೆ ನೀಡಿದ್ದು ಮನಮುಟ್ಟುವಂತ್ತಿತ್ತು.
ಜಿ.ಪಂ. ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಮಣಿನಂಜಪ್ಪ ಮಾತನಾಡಿ, ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಬಿಸಿಯೂಟ, ಬೈಸಿಕಲ್, ಪಠ್ಯಪುಸ್ತಕ, ಸಮವಸ್ತ್ರ ಹೀಗೆ ಹತ್ತು ಹಲವು ಯೋಜನೆಗಳನ್ನು  ತಲುಪಿಸುವ ಮೂಲಕ ಪ್ರತಿಯೊಬ್ಬರಿಗೂ ಶಿಕ್ಷಣ ಪಡೆಯುವಂತಾಗಲು ಶ್ರಮಿಸುತ್ತಿದೆ ಎಂದರು. ವಿದ್ಯಾರ್ಥಿಗಳಲ್ಲಿ ಗುರಿ ಇದ್ದರೆ ಮಾತ್ರ ಯಶಸ್ಸು ಗಳಿಸಲು ಸಾಧ್ಯ. ಹಿರಿಯರ ಸಲಹೆ ಮಾರ್ಗದರ್ಶನ ಪಡೆದು ಒಳ್ಳೆಯ ಸಾಧನೆ ಮಾಡಬೇಕು. ಡಾ.ಬಿ.ಆರ್. ಅಂಬೇಡ್ಕರ್, ಅಬ್ರಹಾಂ ಲಿಂಕನ್ ಮಾದರಿಯನ್ನು ಸ್ಮರಿಸಿಕೊಂಡು ವಿದ್ಯಾರ್ಥಿಗಳು ಮುಖ್ಯವಾಹಿನಿಗೆ ಬರಲು ಪ್ರಯತ್ನಿಸಬೇಕು ಎಂದು ಅವರು ಸಲಹೆ ಮಾಡಿದರು.
ಚುರುಕಾದ ಹಾಗೂ ಉತ್ತಮ ಸಂವಹನ ಸಾಮರ್ಥ್ಯ ಹೊಂದಿದ್ದ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರನ್ನು ಒಳಗೊಂಡ ಒಂದು ತಂಡವನ್ನು ಮೀನಾ ತಂಡ ಎಂದು ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ರಚಿಸಿ ಆ ಮೂಲಕ ಗ್ರಾಮೀಣ ಪ್ರದೇಶಗಳಲ್ಲಿ ಬಾಲಕಿಯರಿಗೆ ಶಿಕ್ಷಣ ನೀಡಲು ಉತ್ತೇಜನ ನೀಡುವುದು ಮೀನಾ ಕಾರ್ಯಕ್ರಮದ ಉದ್ದೇಶವಾಗಿದೆ. ಜೊತೆಗೆ ವಿದ್ಯಾರ್ಥಿನಿಯರಲ್ಲಿ ಧೈರ್ಯ, ಸಂವಹನ, ಸಹಪಾಠಿಗಳಲ್ಲಿ ಸಂವೇದನಾ ಶೀಲತೆ ಹಾಗೂ ಮುಂದಾಳತ್ವ ಗುಣಗಳನ್ನು ಬೆಳೆಸಿಕೊಳ್ಳಲು ಮೀನಾ ಕಾರ್ಯಕ್ರಮ ಸಹಕಾರಿಯಾಗಿದೆ ಎಂದು ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಬಿ. ಅಂಜನಪ್ಪ ತಿಳಿಸಿದರು.
ಶಿಕ್ಷಕರಾದ ರಮಾನಂದ ಮಾತನಾಡಿ, ವಿದ್ಯಾರ್ಥಿಗಳು ವ್ಯಕ್ತಿತ್ವ ವಿಕಸನ ಮತ್ತು ಶಿಸ್ತನ್ನು ಬೆಳೆಸಿಕೊಳ್ಳಬೇಕು. ಪೋಷಕರು ಮಕ್ಕಳಿಗೆ ಉತ್ತಮ ಮಾರ್ಗದರ್ಶನ ಮಾಡಬೇಕು ಎಂದು ಅವರು ಸಲಹೆ ಮಾಡಿದರು.
ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಬಿ.ಎಚ್.ಬಸವರಾಜು, ಸರ್ವಶಿಕ್ಷಣ ಅಭಿಯಾನ ಯೋಜನಾಧಿಕಾರಿ ಕೃಷ್ಣೇಗೌಡ, ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಧರನ್, ಸರ್ವಶಿಕ್ಷಣ ಅಭಿಯಾನದ ಅಧಿಕಾರಿ ಶಿವಾನಂದ, ಮೀನಾ ಕಾರ್ಯಕ್ರಮದಲ್ಲಿ ಜಿಲ್ಲೆಯ ಸರ್ಕಾರಿ 263 ಹಿರಿಯ ಪ್ರಾಥಮಿಕ ಶಾಲೆಯಿಂದ ಸುಮಾರು 789 ವಿದ್ಯಾರ್ಥಿಗಳು ಮೀನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ನಾನಾ ಕಾರ್ಯಕ್ರಮಗಳನ್ನು ನೀಡಿದರು. ಕ್ಷೇತ್ರ ಸಂಪನ್ಮೂಲ ಅಧಿಕಾರಿಗಳು, ಶಾಲೆಯ ಮುಖ್ಯೋಪಾಧ್ಯಾಯರು ಮತ್ತಿತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.