ಶನಿವಾರಸಂತೆ: ಕೊಡಗು ಜಿಲ್ಲಾ ಪೊಲೀಸ್ ಇಲಾಖೆ, ಶನಿವಾರಸಂತೆ ಪೊಲೀಸ್ ಠಾಣೆ ವತಿಯಿಂದ ಮಹಿಳಾ ದೌರ್ಜನ್ಯ, ಲೈಂಗಿಕ ಕಿರುಕುಳ ಕುರಿತು ಮಹಿಳೆಯರಿಗಾಗಿ ಜಾಗೃತಿ ಮಾಹಿತಿ ಸಭೆಯನ್ನು ಶನಿವಾರಸಂತೆ ಪೊಲೀಸ್ ಠಾಣೆ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.
ಸಭೆಯಲ್ಲಿ ಮಾತನಾಡಿದ ಶನಿವಾರಸಂತೆ ಪೊಲೀಸ್ ಠಾಣಾಧಿಕಾರಿ ರವಿಕಿರಣ್, ಇತ್ತೀಚಿನ ದಿನಗಳಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಹಿಳೆಯರು ಜಾಗೃತಿಗಳ್ಳಬೇಕಾಗಿದೆ. ಹೀಗಾಗಿ ಪೊಲೀಸ್ ಇಲಾಖೆಯಿಂದ ಮಾಹಿತಿ ನೀಡುವ ಸಲುವಾಗಿ ಇಂತಹ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದರು.
ಗ್ರಾ.ಪಂ. ಸದಸ್ಯ ಎಸ್.ಎನ್. ರಘು ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಕಾಮುಕರು ಚಿಕ್ಕ ಮಗುವಿನಿಂದ ಹಿಡಿದು ವಯಸ್ಸಾದ ಮಹಿಳೆಯರ ಮೇಲೆ ಅತ್ಯಾಚಾರ ಮಾಡುತ್ತಿದ್ದಾರೆ. ಅತ್ಯಾಚಾರಿಗಳು ಮಾನವ ಸಂಬಂಧದ ಬೆಲೆಯೇ ಗೊತ್ತಿಲ್ಲದಂತೆ ವರ್ತಿಸುತ್ತಿದ್ದು, ಇಂತಹ ಪ್ರಕರಣ ಎಸೆಗುವವರಿಗೆ ಘೋರವಾದ ಶಿಕ್ಷೆ ನೀಡಬೇಕು ಎಂದು ಹೇಳಿದರು.
ಸಭೆಯಲ್ಲಿ ಗ್ರಾ.ಪಂ. ಅಧ್ಯಕ್ಷೆ ಭುವನೇಶ್ವರಿಹರೀಶ್ ಮಾತನಾಡಿದರು. ಸಭೆಯಲ್ಲಿ ವಿವಿಧ ಮಹಿಳಾ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಶಾಲಾ ಶಿಕ್ಷಕಿಯರು ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಗ್ರಾ.ಪಂ. ಸದಸ್ಯರಾದ ಮಹಮ್ಮದ್ ಗೌಸ್, ಜ್ಯೋತಿ, ಶಶಿಕಲಾ ಇದ್ದರು.