ಕೋಲಾರ

ವಿದ್ಯಾರ್ಥಿ ವೇತನ ವಿಳಂಬ ಖಂಡಿಸಿ ಪ್ರತಿಭಟನೆ

Published On :

ಎಬಿವಿಪಿ ನೇತೃತ್ವದಲ್ಲಿ ಸಮಾಜ ಕಲ್ಯಾಣ ಇಲಾಖೆ ಕಚೇರಿಗೆ ವಿದ್ಯಾರ್ಥಿಗಳ ಮುತ್ತಿಗೆ
ಕ.ಪ್ರ.ವಾರ್ತೆ ಚಿಂತಾಮಣಿ ಆ.3
ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಸರ್ಕಾರಿ ಕಾಲೇಜಿನಲ್ಲಿ ವಿದ್ಯಾರ್ಥಿ ವೇತನ ಸಮರ್ಪಕವಾಗಿ ವಿತರಿಸದೆ ಸಮಾಜ ಕಲ್ಯಾಣ ಅಧಿಕಾರಿಗಳು ವಿಳಂಬ ನೀತಿ ಪಾಲಿಸುತ್ತಿದ್ದಾರೆ ಎಂದು ಆರೋಪಿಸಿ ಎಬಿವಿಪಿ ನೂರಾರು ವಿದ್ಯಾರ್ಥಿಗಳು ಶನಿವಾರ ಬೆಳಿಗ್ಗೆ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದರು.
ಪಟ್ಟಣದ ಕೆ.ಆರ್. ಬಡಾವಣೆಯ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಸರ್ಕಾರಿ ಕಾಲೇಜಿನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿಳಂಬ ಮಾಡಲಾಗುತ್ತಿದೆ. ಈ ಬಗ್ಗೆ ಹಲವು ಬಾರಿ ಅಧಿಕಾರಿಗಳಿಗೆ ದೂರು ನೀಡಿದ್ದರೂ ಪ್ರಯೋಜನವಿಲ್ಲದ ಕಾರಣ ತಾಲೂಕು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸಂಘಟನೆಯ ನೂರಾರು ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳ ಏಕಪಕ್ಷೀಯ ಧೋರಣೆ ವಿರುದ್ಧ ಆರೋಪಿಸಿ ಇಲಾಖೆ ಕಚೇರಿಗೆ ಬೀಗ ಜಡಿದು ಪ್ರತಿಭಟಿಸಿದರು.
ಕಿರುಕುಳ:  ತಾಲೂಕಿನ ವ್ಯಾಪ್ತಿಯ ಸರ್ಕಾರಿ ಕಾಲೇಜು ಬಡ ದಲಿತ ವಿದ್ಯಾರ್ಥಿಗಳಿಗೆ ಸುಮಾರು 508 ಜನಕ್ಕೆ ವಿದ್ಯಾರ್ಥಿ ವೇತನ ನೀಡದೆ ತಾಲೂಕು ಅಧಿಕಾರಿ ಹಾಗೂ ವ್ಯವಸ್ಥಾಪಕರು ವಿದ್ಯಾರ್ಥಿಗಳಿಗೆ ಕಿರುಕುಳ ನೀಡುತ್ತಿದ್ದಾರೆ. ಖಾಸಗಿ ವಿದ್ಯಾ ಸಂಸ್ಥೆಗಳ ಜೊತೆ ಒಳಒಪ್ಪಂದ ಮಾಡಿಕೊಂಡು ಬಡ ದಲಿತ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನೂರಾರು ವಿದ್ಯಾರ್ಥಿಗಳು ಅಧಿಕಾರಿಗಳ ಧೋರಣೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಇವರನ್ನು ಕೂಡಲೇ ಅಮಾನತುಪಡಿಸಿ ಸಂಬಂಧಪಟ್ಟ ಮೇಲಧಿಕಾರಿಗಳು ತಾಲೂಕಿಗೆ ಬರುವ ವಿದ್ಯಾರ್ಥಿ ವೇತನವನ್ನು ಕೂಡಲೇ ದೊರಕಿಸಿಕೊಡಬೇಕೆಂದು ಆಗ್ರಹಿಸಿದರು.
ಮಾತಿನ ಚಕಮುಖಿ:  ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದ ಸುದ್ದಿ ತಿಳಿದ ಪೊಲೀಸರು ಸರ್ಕಾರಿ ಕಚೇರಿಗೆ ಬೀಗ ಜಡಿಯದಂತೆ ತಾಕೀತು ಮಾಡಿದರು. ಆಗ ಹಲವು ವಿದ್ಯಾರ್ಥಿಗಳು ತೀವ್ರ ಬೇಸರಗೊಂಡು ಪರಸ್ಪರ ವಾಗ್ವಾದಕ್ಕಿಳಿದರು.
ಈ ಸಂದರ್ಭ ಎಬಿವಿಪಿ ಜಿಲ್ಲಾ ಸಂಚಾಲಕ ಮಂಜುನಾಥರೆಡ್ಡಿ ಮಾತನಾಡಿ, ವಿದ್ಯಾರ್ಥಿ ವೇತನ ಹಣವನ್ನು ಖಾಸಗಿ ಶಾಲೆಗಳಿಗೆ ಮೊದಲು ಅನುದಾನ ನೀಡಿ ನಂತರ ಸರ್ಕಾರಿ ಕಾಲೇಜು ವಿದ್ಯಾರ್ಥಿಗಳಿಗೆ ವೇತನ ನೀಡದೆ ಅನ್ಯಾಯ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ವ್ಯವಸ್ಥಾಪಕ ಶೌಕತ್ ಉಲ್ಲಾ ಒಂದಿಲ್ಲೊಂದು ಸುಳ್ಳು ಹೇಳುತ್ತಾ ವಿದ್ಯಾರ್ಥಿಗಳಿಗೆ ಬೇಜವಾಬ್ದಾರಿ ಉತ್ತರ ನೀಡುತ್ತಿದ್ದಾರೆ. ಬಡವರ ವಿದ್ಯಾರ್ಥಿ ವೇತನ ಗುಳುಂ ಮಾಡಲು ಹೊರಟಿದ್ದಾರೆ ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ವಿದ್ಯಾರ್ಥಿಗಳ ತಾಳ್ಮೆ ಪರೀಕ್ಷಿಸಿದ ಅಧಿಕಾರಿಗಳು:  ವಿದ್ಯಾರ್ಥಿಗಳು ಬೆಳಿಗ್ಗೆ 11 ಗಂಟೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರೂ ಸ್ಥಳೀಯ ಸಮಾಜ ಕಲ್ಯಾಣ ಅಧಿಕಾರಿಗಳಾಗಲಿ, ವ್ಯವಸ್ಥಾಪಕರಾಗಲಿ ಕಚೇರಿಗೆ ಬರಲಿಲ್ಲ. ಇದರಿಂದ ಕ್ರೋಧಗೊಂಡ ಪ್ರತಿಭಟನಾಕಾರರು 2 ಗಂಟೆಗೂ ಹೆಚ್ಚು ಕಾಲ ಧಿಕ್ಕಾರ ಕೂಗಿದರು. ಕಡೆಗೆ ತಾಳ್ಮೆ ಕಳೆದುಕೊಂಡು ಕಚೇರಿ ಮುಂಭಾಗದ ರಸ್ತೆ ನಡುವೆಯೇ ಧರಣಿ ನಡೆಸಿದರು.
ವಿದ್ಯಾರ್ಥಿ ವೇತನ ಶೀಘ್ರ ವಿತರಿಸಲು ಆಗ್ರಹಿಸಿ ಈಗಾಗಲೇ ಮೂರ್ನಾಲ್ಕು ಬಾರಿ ಹೋರಾಟ ನಡೆಸಲಾಗಿದೆ. ತಾಲೂಕು ದಂಡಾಧಿಕಾರಿಗಳು ಹಾಗೂ ಶಾಸಕರು ಸಮಸ್ಯೆ ಬಗೆಹರಿಸಲು ಸೂಚಿಸಿದರೂ ಸ್ಥಳೀಯ ಅಧಿಕಾರಿಗಳು ಬೆಲೆ ನೀಡದೆ ಬೇಜವಾಬ್ದಾರಿತನ ಪ್ರದರ್ಶಿಸಿದ್ದಾರೆ ಎಂದು ವಿದ್ಯಾರ್ಥಿಗಳು ಆರೋಪಿಸಿದರು.
ದೂರವಾಣಿ ಮುಖಾಂತರ ವಿದ್ಯಾರ್ಥಿಗಳನ್ನು ಸಂಪರ್ಕಿಸಿದ ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿ ಕೃಷ್ಣಪ್ಪ 1 ವಾರದೊಳಗೆ ಸಮಸ್ಯೆ ಬಗೆಹರಿಸಲು ಪ್ರಾಮಾಣಿಕವಾಗಿ ಕ್ರಮ ಕೈಗೊಳ್ಳುತ್ತೇನೆ ಎಂದು ಹಾಗೂ ತಪ್ಪಿತಸ್ಥರ ಅಧಿಕಾರಿಗಳ ವಿರುದ್ಧ ಮೇಲಾಧಿಕಾರಿಗಳಿಗೆ ಕ್ರಮ ಕೈಗೊಳ್ಳಲು ಸೂಚಿಸಿರುವುದಾಗಿ ವಿದ್ಯಾರ್ಥಿಗಳಿಗೆ ತಿಳಿಸಿದರು.
ಎಬಿವಿಪಿ ಸಂಘಟನೆಯ ಮುಖಂಡರಾದ ಸುರೇಶ್, ನವಾಜ್, ಸಯ್ಯದ್, ಹರ್ಷಿಯಾ, ಶ್ವೇತಾ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.