7 ರಂದು ದೇವನಹಳ್ಳಿ ಜಿಲ್ಲಾ ಕೇಂದ್ರ ಒತ್ತಾಯಕ್ಕಾಗಿ ಸರ್ವ ಪಕ್ಷ ಸಭೆ
ಕ.ಪ್ರ.ವಾರ್ತೆ ದೇವನಹಳ್ಳಿ ಆ. 4
ದೇವನಹಳ್ಳಿ ಜಿಲ್ಲಾ ಕೇಂದ್ರ ಹೋರಾಟ ಸಮಿತಿಯಿಂದ ಆ. 7 ರಂದು ಸರ್ಣ ಪಕ್ಷಗಳ ಹಾಗೂ ಸಂಘ ಸಂಸ್ಥೆಗಳ ಸಭೆ ಗುರುಭವನದಲ್ಲಿ ಕರೆಯಲಾಗಿದೆ ಎಂದು ಸಂಚಾಲಕರಾದ ಬಿ.ಕೆ.ಶಿವಪ್ಪ ಪ್ರವಾಸಿ ಮಂದಿರದಲ್ಲಿ ಭಾನುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಈ ಸಭೆಯಲ್ಲಿ ಶಾಸಕರು ಹಾಗೂ ಎಲ್ಲ ರಾಜಕೀಯ ಪಕ್ಷಗಳ ಮುಖಂಡರು ಭಾಗವಹಿಸಲಿದ್ದಾರೆ ಎಂದರು.
ಇತ್ತೀಚೆಗೆ ದೇವನಹಳ್ಳಿಯ ಸಮಾರಂಭಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಕೀಲರ ಸಂಘ ಹಾಗೂ ಇತರ ಸಂಘ ಸಂಸ್ಥೆಗಳ ಬೇಡಿಕೆಯಂತೆ ದೇವನಹಳ್ಳಿ ಪಟ್ಟಣವನ್ನು ಜಿಲ್ಲಾ ಕೇಂದ್ರ ಮಾಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದ್ದರು.
ಮುಖ್ಯಮಂತ್ರಿಯವರ ವಾಗ್ದಾನ ದೊಡ್ಡಬಳ್ಳಾಪುರ ತಾಲೂಕನ್ನು ಜಿಲ್ಲಾ ಕೇಂದ್ರ ಮಾಡಬೇಕೆಂದು ಹೋರಾಟ ಮಾಡುತ್ತಿರುವವರ ಕಣ್ಣು ಕೆಂಪಾಯಿತು. ಮತ್ತೆ ದೊಡ್ಡಬಳ್ಳಾಪುರ ತಾಲೂಕಿನವರು ಸಹ ಹೋರಾಟ ಮಾಡಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ್ದರು.
ದೇವನಹಳ್ಳಿ ಅಥವಾ ದೊಡ್ಡಬಳ್ಳಾಪುರ ಜಿಲ್ಲಾ ಕೇಂದ್ರ ಮಾಡಲು ಇರುವ ಅರ್ಹತೆಗಳ ಬಗ್ಗೆ ವಿಶ್ಲೇಷಣೆ ಮಾಡುವಂತಾಗಬೇಕು ಎಂದು ಇಲ್ಲಿನ ಹೋರಾಟ ಸಮಿತಿಯ ಮುಖ್ಯಸ್ಥರಾದ ಡಾ.ಮೂರ್ತಿ ಅಭಿಪ್ರಾಯ ಪಟ್ಟರು. ಪ್ರಮುಖವಾಗಿ ಇರುವ ಅರ್ಹತೆಗಳೆಂದರೆ ಬೆಂಗಳೂರು ಮೇಕ್ರಿಸರ್ಕಲ್ನಿಂದ ದೇವನಹಳ್ಳಿಗೆ ಕೇವಲ 30 ನಿಮಿಷಗಳಲ್ಲಿ ತಲುಪಬಹುದಾಗಿದೆ. ಅಲ್ಲದೆ ವಿಮಾನ ನಿಲ್ದಾಣಕ್ಕೆ ಮತ್ತು ದೇವನಹಳ್ಳಿವರೆಗೂ ಮೆಟ್ರೋ ರೈಲುಸಂಚಾರಕ್ಕೆ ಈಗಾಗಲೇ ಯೋಜನೆ ರೂಪಿಸಲಾಗಿದೆ ಎಂದರು.
ವಿಮಾನ ನಿಲ್ದಾಣ: ದೇವನಹಳ್ಳಿ ಬಳಿ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣ ಇರುವುದರಿಂದ ದೇಶ ವಿದೇಶಗಳ ಗಣ್ಯರು ಬಂದು ಹೋಗುವವರಿದ್ದಾರೆ ಭದ್ರತೆ ದೃಷ್ಟಿಯಿಂದ ಜಿಲ್ಲಾಧಿಕಾರಿಗಳು ಶೀಘ್ರ ಕ್ರಮ ಕೈಗೊಳ್ಳಬಹುದಾಗಿದೆ. ದೇವನಹಳ್ಳಿಯಿಂದ ಬೆಂಗಳೂರಿಗೆ ಸಾರಿಗೆ ವ್ಯವಸ್ಥೆ ಮತ್ತು ಪ್ರಯಾಣಿಕರ ಸಂಖ್ಯ ಹೆಚ್ಚಾಗಿದೆ, ಈಗಾಗಲೇ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಸ್ವಂತ ಕಟ್ಟಡ ನಿರ್ಮಾಣ ಮುಕ್ತಾಯ ಹಂತದಲ್ಲಿದೆ ಎಂದು ಡಾ.ಮೂರ್ತಿ ತಿಳಿಸಿದರು.
ಇದೇ ಸಂಧರ್ಭದಲ್ಲಿ ಸಂಚಾಲಕ ಬಿ.ಕೆ.ಶಿವಪ್ಪ ಮಾತನಾಡಿ, ರಾಜ್ಯ ಸರ್ಕಾರಕ್ಕೆ ಹೆಚ್ಚಿನ ಆದಾಯ ತರುವ ನೋಂದಣಿ ಕಚೇರಿ, ಅಬಕಾರಿ ಇಲಾಖೆ ಅಲ್ಲದೆ ಸಾರಿಗೆ ಇಲಾಖೆಯಿಂದ ಕೋಟ್ಯಂತರ ರು. ವರಮಾನ ಇರುವುದಲ್ಲದೆ ಮುಂದಿನ ದಿನಗಳಲ್ಲಿ 85 ಕೈಗಾರಿಕೆಗಳು ಕೋಟ್ಯಂತರ ರು. ವೆಚ್ಚದಲ್ಲಿ ನಿರ್ಮಾಣವಾಗಲಿದ್ದು ಲಕ್ಷಾಂತರ ಮಂದಿಗೆ ಉದ್ಯೋಗಾವಕಾಶಗಳು ದೊರೆಯಲಿವೆ. ಆದ್ದರಿಂದ ದೇವನಹಳ್ಳಿ ಜಿಲ್ಲಾ ಕೇಂದ್ರಕ್ಕೆ ಅರ್ಹವಾಗಿದೆ ಎಂದು ತಿಳಿಸಿದರು.
ಮಾನವ ಹಕ್ಕುಗಳ ಜಾಗೃತಿ ಸಮಿತಿ ಅಧ್ಯಕ್ಷರಾದ ನಾರಾಯಣಸ್ವಾಮಿ, ನಿವೃತ್ತ ದೈಹಿಕ ಶಿಕ್ಷಕ ನಾಗರಾಜ್ ಮಾತನಾಡಿದರು. ಜಾಲಿಗೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಎಸ್.ಎಂ. ಆನಂದಕುಮಾರ್ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

