ಭ್ರಷ್ಟಾಚಾರ: ಸಿಡಿದೆದ್ದು ಹೊರನಡೆದ ಜಿಪಂ ಸದಸ್ಯರು
ಕ.ಪ್ರ.ವಾರ್ತೆ ಚಿಕ್ಕಬಳ್ಳಾಪುರ ಆ.12
ಜನರು ಕುಡಿಯುವ ನೀರಿನ ತೀವ್ರ ಸಮಸ್ಯೆ ಅನುಭವಿಸುತ್ತಿದ್ದರೆ, ಇತ್ತ ಅಧಿಕಾರಿಗಳು ಕುಡಿಯುವ ನೀರಿನ ಸರಬರಾಜು ಕಾಮಗಾರಿಗಳಲ್ಲಿ ವ್ಯಾಪಕ ಭ್ರಷ್ಟಾಚಾರಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ ಎಂದು ಜಿ.ಪಂ. ಸದಸ್ಯರು ಆಕ್ರೋಶ ವ್ಯಕ್ತಪಡಿಸಿ, ಕೆಲ ಸಮಯ ಸಭೆಯಿಂದ ಹೊರಗೆ ಹೋದ ಘಟನೆ ಸೋಮವಾರ ಜಿ.ಪಂ. ಸಾಮಾನ್ಯ ಸಭೆಯಲ್ಲಿ ನಡೆಯಿತು.
ಭ್ರಷ್ಟಾಚಾರದ ಬಗ್ಗೆ ಗಮನ ಸೆಳೆಯುತ್ತಿದ್ದರೂ ಸಹ ಸೂಕ್ತ ರೀತಿಯಲ್ಲಿ ಪ್ರತಿಕ್ರಿಯೆ ತೋರದೇ ತಾವಾಡಿದ್ದೇ ಆಟ ಎಂಬ ವರ್ತನೆ ತೋರುತ್ತಿರುವ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದಲ್ಲಿ ಸಭೆಗೆ ತಾವು ಆಗಮಿಸುವುದಿಲ್ಲ ಎಂದು ಸದಸ್ಯರು ಪಟ್ಟುಹಿಡಿದ ಕಾರಣ ಕೆಲ ಸಮಯ ಸಭೆಯಲ್ಲಿ ಗೊಂದಲ ಮೂಡಿತು.
ಜಿ.ಪಂ. ಸಭಾಂಗಣದಲ್ಲಿ ಅಧ್ಯಕ್ಷ ಚಿನ್ನಪ್ಪ ಅಧ್ಯಕ್ಷತೆಯಲ್ಲಿ ಸೋಮವಾರ ಜಿ.ಪಂ. ಸಾಮಾನ್ಯ ಸಭೆ ಕರೆಯಲಾಗಿತ್ತು. ಕೃಷಿ, ಆರೋಗ್ಯ, ತೋಟಗಾರಿಕೆ ಸೇರಿದಂತೆ ವಿವಿಧ ಇಲಾಖೆಗಳು ಸಾಧಿಸಿದ ಪ್ರಗತಿ ಪರಿಶೀಲಿಸಿ ಚರ್ಚೆ ನಡೆಸುತ್ತಿದ್ದ ಸಂದರ್ಭ ಪಂಚಾಯತ್ರಾಜ್ ಮತ್ತು ಎಂಜಿನಿಯರಿಂಗ್ ವಿಭಾಗದ ಅಧಿಕಾರಿಗಳ ಕಾರ್ಯ ನಿರ್ವಹಣೆ ಕುರಿತು ಸದಸ್ಯರು ಗಮನ ಸೆಳೆದು, ಕುಡಿಯುವ ನೀರಿನ ಸರಬರಾಜು ಕಾಮಗಾರಿಗಳಲ್ಲಿ ನಡೆಯುತ್ತಿರುವ ವ್ಯಾಪಕ ಭ್ರಷ್ಟಾಚಾರದ ಬಗ್ಗೆ ಪ್ರಸ್ತಾಪಿಸಿದರು.
ಬಯಲುಸೀಮೆ ಜಿಲ್ಲೆ ಮೊದಲೇ ಅಂತರ್ಜಲಮಟ್ಟದ ಸಮಸ್ಯೆಯಿಂದ ತತ್ತರಿಸುತ್ತಿದೆ. ಕೊಳವೆಬಾವಿಗಳನ್ನು ಕೊರೆದರೂ ಸಹ ಸಮರ್ಪಕ ನೀರು ಸಿಗುತ್ತಿಲ್ಲ. ಈ ಹಿನ್ನೆಲೆ ಅನೇಕ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಮಿತಿ ಮೀರಿ ಜನ ಸಾಮಾನ್ಯರು ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ. ಈ ನಡುವೆ ಪ್ರತಿ ಸಭೆಯಲ್ಲೂ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಇಷ್ಟು ಅನುದಾನ ಖರ್ಚು ಮಾಡಲಾಗುತ್ತಿದೆ ನೀರು ಸರಬರಾಜು ಮಾಡಲು ಇಂತಿಷ್ಟು ಕಾಮಗಾರಿಗಳು ನಡೆದಿವೆ ಎಂದು ಮಾಹಿತಿ ನೀಡುತ್ತಿರುವ ಅಧಿಕಾರಿಗಳು ವಾಸ್ತವವಾಂಶ ಮರೆತು ದಿಕ್ಕು ತಪ್ಪಿಸುತ್ತಿದ್ದಾರೆ. ಬಾಗೇಪಲ್ಲಿ ಮತ್ತು ಗುಡಿಬಂಡೆ ತಾಲೂಕಿನಲ್ಲಿ ಕುಡಿಯುವ ನೀರಿನ ಸರಬರಾಜು ಮಾಡುವ ಕಾಮಗಾರಿಗಳು ಭ್ರಷ್ಟಾಚಾರದಿಂದ ಕೂಡಿವೆ. ಅಕ್ರಮವಾಗಿ ಗುತ್ತಿಗೆಯಲ್ಲಿ ಕೇವಲ ಹಣವನ್ನು ಲೂಟಿ ಮಾಡಲಾಗುತ್ತಿದೆ. ಆದರೆ, ನೀರಿನ ಸಮಸ್ಯೆ ಮಾತ್ರ ಬಗೆಹರಿಯುತ್ತಿಲ್ಲ ಎಂದು ಆರೋಪಿಸಿದರು.
ಈ ಹಿಂದಿನ ಸಭೆಗಳಲ್ಲೂ ಕುಡಿಯುವ ನೀರು ಸರಬರಾಜು ಮಾಡುವ ಕಾಮಗಾರಿಗಳಲ್ಲಿ ಅಕ್ರಮ, ಭ್ರಷ್ಟಾಚಾರ ನಡೆಸಲಾಗಿದೆ ಎನ್ನುವುದರ ಬಗ್ಗೆ ತಿಳಿಸುತ್ತ ಸಂಬಂಧಪಟ್ಟ ಅಧಿಕಾರಿಗಳು ಸಮಜಾಯಿಷಿ ನೀಡಬೇಕೆಂದು ಒತ್ತಾಯಿಸಿಕೊಂಡು ಬರಲಾಗುತ್ತಿದೆ. ಬಾಗೇಪಲ್ಲಿಯ ತಿಮ್ಮಂಪಲ್ಲಿ ಗ್ರಾಮದಲ್ಲಿ ಜಿಲ್ಲಾ ಪಂಚಾಯತ್ ಎಂಜಿನಿಯರಿಂಗ್ ವಿಭಾಗದಿಂದ ಕೊರೆಯಲಾದ ಕೊಳವೆಬಾವಿಗಳನ್ನು ಖಾಸಗಿಯವರು ಉಪಯೋಗಿಸುತ್ತಿರುವ ದೂರಿನ್ವಯ ತನಿಖೆ ಕೈಗೊಳ್ಳಲು ಸೂಚನೆ ನೀಡಲಾಗಿತ್ತು. ಆದರೆ, ಇದುವರೆಗೂ ತನಿಖೆ ಮಾಹಿತಿಯನ್ನು ನೀಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಕೇವಲ ಮಾಹಿತಿಯನ್ನು ಕೊಡುತ್ತೇವೆ ಎಂದೇಳಿಕೊಂಡು ಬರುತ್ತಿದ್ದಾರಷ್ಟೇ ಸ್ವತಃ ಭ್ರಷ್ಟಾಚಾರ ನಡೆದಿರುವ ಬಗ್ಗೆ ನಾವು ತಿಳಿಸಿದರೂ ಸಹ ಏನು ಕ್ರಮ ಕೈಗೊಳ್ಳುವುದಿಲ್ಲ ಎಂದರೆ ಏನರ್ಥ, ನಮ್ಮ ಮಾತಿಗೆ ಬೆಲೆಯಿಲ್ಲವೇ ಎಂದು ಪ್ರಶ್ನಿಸಿದ ಸದಸ್ಯರು, ನಿರ್ಲಕ್ಷ್ಯ ತೋರಿದ ಅಧಿಕಾರಿ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಬೇಕು. ಇಲ್ಲದಿದ್ದಲ್ಲಿ ಸಭೆಯಲ್ಲಿ ನಾವು ಕುಳಿತುಕೊಳ್ಳುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಜಿ.ಪಂ. ಅಧ್ಯಕ್ಷ ಚಿನ್ನಪ್ಪ, ಕಾನೂನಿಗೆ ವಿರುದ್ಧ ಕೆಲಸಗಳನ್ನು ನಡೆಸಲು ಬಿಡುವುದಿಲ್ಲ. ಒಂದು ವೇಳೆ ತಪ್ಪೆಸಗಿರುವುದು ಕಂಡುಬಂದರೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದೇಳಿ ಸದಸ್ಯರನ್ನು ಸಮಾಧಾನಪಡಿಸಿದರು.
ತಪ್ಪು ಮಾಹಿತಿ ನೀಡಬೇಡಿ: ಪ್ರತಿ ಸಭೆಯಲ್ಲೂ ಸಹ ಪದೇ ಪದೇ ಇದೇ ಮಾತು ಹೇಳಲಾಗುತ್ತಿದೆ. ಸೂಕ್ತ ಅಂಕಿ ಅಂಶಗಳೊಂದಿಗೆ ತಮ್ಮ ಇಲಾಖೆಯ ಪ್ರಗತಿಯ ಬಗ್ಗೆ ತಿಳಿದು ಬಂದು ಸಭೆಗೆ ಮಾಹಿತಿ ನೀಡಬೇಕೆಂದು ಸೂಚಿಸಲಾಗುತ್ತಿದೆ. ಆದರೂ ಸಹ ಕೆಲ ಅಧಿಕಾರಿಗಳು ನಿರ್ಲಕ್ಷ್ಯ ತೋರುತ್ತಿದ್ದು, ಇನ್ನೂ ಇದನ್ನು ಸಹಿಸಲು ಸಾಧ್ಯವಿಲ್ಲ ಎಂದು ಜಿ.ಪಂ. ಅಧ್ಯಕ್ಷ ಚಿನ್ನಪ್ಪ ಅಸಮಾಧಾನ ವ್ಯಕ್ತಪಡಿಸಿದರು. ಇನ್ನು ಮುಂದಾದರೂ ಯಾವುದೇ ಸಭೆಗೆ ಅಧಿಕಾರಿಗಳು ಅಂಕಿ ಅಂಶಗಳೊಂದಿಗೆ ಹಾಜರಾಗಬೇಕೆಂದು ಸೂಚನೆ ನೀಡಿದರು.
ಅಸಮರ್ಪಕ ಮಾಹಿತಿಯೊಂದಿಗೆ ಬಂದು ಸಭೆಗೆ ತಪ್ಪು ಮಾಹಿತಿ ನೀಡಿ ದಿಕ್ಕು ತಪ್ಪಿಸುವಂತಹುದು ಸಹ ಸಹಿಸಲಾಗುವುದಿಲ್ಲ ಎಂದು ಎಚ್ಚರಿಕೆ ನೀಡಿದರು.
ಸರ್ಕಾರಿ ಆಸ್ಪತ್ರೆಯಲ್ಲಿ ಶುಚಿತ್ವ ಕಾಪಾಡುವ ಬಗ್ಗೆ ಆರೋಗ್ಯ ಇಲಾಖೆಯ ಯೋಜನೆಗಳ ಮಾಹಿತಿ ನಾಮ ಫಲಕಗಳನ್ನು ಎಲ್ಲಾ ತಾಲೂಕಿನ ಆಸ್ಪತ್ರೆಗಳಲ್ಲಿ ಕಡ್ಡಾಯವಾಗಿ ಪ್ರದರ್ಶಿಸಲು ಹಾಗೂ ಜಿಲ್ಲಾ ಆಸ್ಪತ್ರೆಯಲ್ಲಿ ಬಿಸಿ ನೀರು ಕಲ್ಪಿಸಬೇಕೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ಅವರು ಸೂಚನೆ ನೀಡಿದರು.
ಸಭೆಯಲ್ಲಿ ಶಿಡ್ಲಘಟ್ಟ ಶಾಸಕ ರಾಜಣ್ಣ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ರಾಘವೇಂದ್ರ ಹನುಮಾನ್, ಸಿಇಓ ನೀಲಾ ಮಂಜುನಾಥ್ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

