ಕೋಲಾರ

'ಅನ್ಯಾಯ ತಡೆಗೆ ಕಾನೂನು ಅರಿವು ಮುಖ್ಯ'

Published On :

ಚಿಕ್ಕಬಳ್ಳಾಪುರ: ಶೋಷಣೆ, ಕಿರುಕುಳ, ಅನ್ಯಾಯಕ್ಕೆ ಗುರಿ ಆಗುವುದರಿಂದ ಮುಕ್ತರಾಗಲು ನೆರವಾಗುವ ಕಾನೂನಿನ ಬಗ್ಗೆ ಪ್ರತಿಯೊಬ್ಬರು ತಿಳಿದುಕೊಳ್ಳಬೇಕೆಂದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎಸ್.ವೈ.ಈರಣ್ಣವರ್ ಹೇಳಿದರು.
ನಗರದ ಅಂಬೇಡ್ಕರ್ ಭವನದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯಾಲಯ, ವಕೀಲರ ಸಂಘ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಆರೋಗ್ಯ ಇಲಾಖೆ, ಜಿಲ್ಲಾ ಪೊಲೀಸ್ ಇಲಾಖೆ, ಕಾರ್ಮಿಕ ಇಲಾಖೆ ಆಶ್ರಯದಲ್ಲಿ ಆಯೋಜಿಸಿದ್ದ ಕಾನೂನು ಸಾಕ್ಷರತಾ ರಥ ಮತ್ತು ಸಂಚಾರ ಜನತಾ ನ್ಯಾಯಾಲಯದ ಉದ್ಘಾಟನೆ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜನರು ಸಂವಿಧಾನಬದ್ಧವಾಗಿ ತಮ್ಮ ಹಕ್ಕುಗಳನ್ನು ಅನುಭವಿಸಲು ಮತ್ತು ಶೋಷಣೆ, ಅನ್ಯಾಯ, ಕಿರುಕುಳಗಳಿಂದ ಮುಕ್ತರನ್ನಾಗಿಸುವ ನಿಟ್ಟಿನಲ್ಲಿ ಕಾನೂನು ನಿಯಮಗಳು ವರದಾಯಕವಾಗಿವೆ. ಸಮಾಜದಲ್ಲಿ ಶಾಂತಿ ಸೌಹಾರ್ದ ಕಾಪಾಡುವುದರ ಜತೆಗೆ ಜನರು ನೆಮ್ಮದಿಯಿಂದ ಜೀವನ ನಡೆಸುವಂತೆ ಕಾನೂನು ನೋಡಿಕೊಳ್ಳುತ್ತದೆ ಎಂದರು.
ಮಹಿಳೆಯರು, ಮಕ್ಕಳು ದೌರ್ಜನ್ಯ, ಲೈಂಗಿಕ ಕಿರುಕುಳ, ದಬ್ಬಾಳಿಕೆಗೆ ಹೆಚ್ಚಿಗೆ ಗುರಿಯಾಗುತ್ತಾರೆ. ಇದಕ್ಕೆ ಕಡಿವಾಣ ಹಾಕುವ ಕಾನೂನು, ಮನೆಯೊಳಗಾಗಲಿ ಅಥವಾ ಸಮಾಜದಲ್ಲಾಗಲಿ ಮಹಿಳೆಯರು ಮತ್ತು ಮಕ್ಕಳ ಸೇರಿದಂತೆ ಎಲ್ಲರ ಹಿತವನ್ನು ಕಾಪಾಡುತ್ತದೆ ಎಂದರು.
ಭ್ರೂಣ ಲಿಂಗ ಪತ್ತೆ ಮತ್ತು ಹತ್ಯೆ, ಹೆಣ್ಣು ಮಕ್ಕಳನ್ನು ವೇಶ್ಯಾವಾಟಿಕೆ ದಂಧೆಗೆ ದೂಡುವಂತಹುದು, ಯಾವುದೇ ರೀತಿಯಲ್ಲಿ ಕಿರುಕುಳ ನೀಡುವಂತಹುದು ಕಾನೂನು ಪ್ರಕಾರ ಅಪರಾಧ. ಈ ಆರೋಪಗಳು ದೃಢಪಟ್ಟರೆ ಅಪರಾಧಿಗಳಿಗೆ ಕಠಿಣ ಶಿಕ್ಷೆಯಾಗುತ್ತದೆ. ಕಾನೂನಿನ ಬಗ್ಗೆ ಅರಿವು ಮೂಡಿಸಲು ಜಿಲ್ಲೆಯ ಅನೇಕ ಹಳ್ಳಿಗಳಲ್ಲಿ ಕಾನೂನು ಸಾಕ್ಷರತಾ ರಥ ಮತ್ತು ಸಂಚಾರ ನ್ಯಾಯಾಲಯ ಸಂಚರಿಸುತ್ತಿದೆ ಎಂದು ತಿಳಿಸಿದರು.
ಜಿಲ್ಲಾ ನ್ಯಾಯಲಯ ಕಾನೂನು ಅರಿವು ಮಧ್ಯಸ್ಥಿಕೆ ಹಾಗೂ ಲೋಕ ಆದಾಲತ್‌ನಂತಹ ಉಪಯುಕ್ತ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬಂದಿದೆ. ಜನರು ಸಣ್ಣಪುಟ್ಟ ವ್ಯಾಜ್ಯಗಳನ್ನು ಮುಂದಿಟ್ಟುಕೊಂಡು ನ್ಯಾಯಾಲಯದ ಮೆಟ್ಟಿಲುಗಳನ್ನೇರಿ ಅನವಶ್ಯಕವಾಗಿ ತಮ್ಮ ಸಮಯ ಮತ್ತು ಹಣ ವ್ಯರ್ಥ ಮಾಡಿಕೊಳ್ಳುವುದನ್ನು ತಪ್ಪಿಸುತ್ತಿದೆ. ವಾದಿ -ಪ್ರತಿವಾದಿಗಳನ್ನು ಕರೆಸಿ ರಾಜಿ ಸಂಧಾನದ ಮೂಲಕ ಪ್ರಕರಣವನ್ನು ತ್ವರಿತವಾಗಿ ಇತ್ಯರ್ಥಗೊಳಿಸುವಂತಹ ಕೆಲಸವನ್ನು ಮಾಡಲಾಗುತ್ತಿದೆ ಎಂದರು.
ಕಾನೂನಿನ ಬಗ್ಗೆ ಅರಿವು ಮೂಡಿಸುವುದರ ಜತೆಗೆ ಲೋಕ್ ಅದಾಲತ್ ಮೂಲಕ ವ್ಯಾಜ್ಯಗಳನ್ನು ಇತ್ಯರ್ಥಪಡಿಸುವ ಕಾನೂನು ಸಾಕ್ಷರತಾ ರಥ ಮತ್ತು ಸಂಚಾರಿ ನ್ಯಾಯಾಲಯವು ಆ.14 ರಿಂದ ಸೆ.1 ರವರೆಗೆ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲೂ ಸಂಚರಿಸಲಿದೆ. ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳಬಹುದೆಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಶಿವಪ್ರಸಾದ್ ಮಾತನಾಡಿ, ಕಾನೂನು ಅರಿವು ಕಾರ್ಯಕ್ರಮ ಬಹಳ ಮಹತ್ವವುಳ್ಳದ್ದು. ನಾವು ಸದಾ ಕಾನೂನಿನ ಚೌಕಟ್ಟಿನಲ್ಲಿ ಬದುಕು ನಡೆಸಬೇಕು. ನಮಗೆ ಕಾನೂನಿನ ಬಗ್ಗೆ ಅರಿವು ಇಲ್ಲದಿದ್ದರೆ, ಸಂವಿಧಾನದ ಹಕ್ಕುಗಳ ಉಲ್ಲಂಘನೆಯಾಗುತ್ತದೆ ಎಂದರು.
ವಕೀಲರ ಸಂಘದ ಅಧ್ಯಕ್ಷ ಕೆ.ಎಚ್.ತಮ್ಮೇಗೌಡ ಮಾತನಾಡಿ, ಹುಟ್ಟಿನಿಂದ ಸಾವಿನವರೆಗೂ ಮನುಷ್ಯನನ್ನು ಕಾನೂನು ಎಚ್ಚರಿಸುತ್ತದೆ. ಇಂತಹ ಕಾನೂನು ಅರಿವು ಕಾರ್ಯಕ್ರಮ ಗ್ರಾಮೀಣ ಪ್ರದೇಶದ ಕಟ್ಟಕಡೆಯ ವ್ಯಕ್ತಿಗೂ ತಲುಪಬೇಕಾದುದು ಅವಶ್ಯಕ ಎಂದು ತಿಳಿಸಿದರು.
ಹಿರಿಯ ನ್ಯಾಯಾಧೀಶೆ ರಾಜೇಶ್ವರಿ ಎನ್.ಹೆಗಡೆ ಕಾನೂನು ಅರಿವು ಕಾರ್ಯಕ್ರಮದ ಬಗ್ಗೆ ತಿಳಿಸಿದರು. ಕಾನೂನು ಸಾಕ್ಷರತಾ ರಥ ಹಾಗೂ ಸಂಚಾರಿ ಜನತಾ ನ್ಯಾಯಾಲಯಕ್ಕೆ ಮತ್ತು ಹಳೆಯ ಎ.ಸಿ. ಕಚೇರಿಯಲ್ಲಿ ಹೊಸದಾಗಿ ಪ್ರಾರಂಭಿಸಲಾಗಿರುವ ಹೆಚ್ಚುವರಿ ಜಿಲ್ಲಾ ನ್ಯಾಯಾಲಯವನ್ನು ಜಿಲ್ಲಾಧಿಕಾರಿ ಡಾ. ಆರ್.ವಿಶಾಲ್ ಉದ್ಘಾಟಿಸಿದರು.
ನ್ಯಾಯಾಧೀಶ ಅಮರನಾರಾಯಣ, ಜಿಲ್ಲಾ ಸರ್ಕಾರಿ ವಕೀಲ ಜಿ.ಆರ್. ಹರಿಕುಮಾರ್, ಸುರೇಖಾ, ಅಜಿತ್‌ಪ್ರಸಾದ್, ವಕೀಲರ ಸಂಘದ ಕಾರ್ಯದರ್ಶಿ ಎಚ್.ಸಿ.ಪಾಪಿರೆಡ್ಡಿ ಮುಂತಾದವರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.