ಕೋಲಾರ

ಬರಪೀಡಿತ ಜಿಲ್ಲೆಯಾಗಿ ಕೋಲಾರ; ಸಿಎಂಗೆ ಪ್ರಸ್ತಾವನೆ

Published On :

ಕ.ಪ್ರ.ವಾರ್ತ್ಣೆ ಕೋಲಾರ   ಆ.15
ಮಳೆಯಿಲ್ಲದೆ ಸಂಕಷ್ಟಕ್ಕೆ ಸಿಲುಕಿರುವ ಕೋಲಾರ ಜಿಲ್ಲೆಯನ್ನು ಬರಪೀಡಿತ ಜಿಲ್ಲೆಯನ್ನಾಗಿ ಘೋಷಣೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪ್ರಸ್ತಾವನೆ ಸಲ್ಲಿಸುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ.ಖಾದರ್ ತಿಳಿಸಿದರು.
ಜಿಲ್ಲಾ ಆಡಳಿತ ಮತ್ತು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿಯಿಂದ ನಗರದ ಸರ್.ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ 67ನೇ ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ಕವಾಯತು ವಂದನೆ ಸ್ವೀಕರಿಸಿದ ಬಳಿಕ ಜಿಲ್ಲೆಯ ಜನತೆಯನ್ನು ಉದ್ದೇಶಿಸಿ ಮಾತನಾಡಿದರು.
ಕೃಷಿಗೆ ಪ್ರಧಾನವಾದ ಕೋಲಾರ ಜಿಲ್ಲೆಯಲ್ಲಿ ಶೇ.75ರಷ್ಟು ಜನರು ಕೃಷಿಯನ್ನು ಅವಲಂಬಿಸಿದ್ದಾರೆ. ಇಲ್ಲಿ 1,33,626 ಹೆಕ್ಟೇರ್ ಕೃಷಿಗೆ ಯೋಗ್ಯವಾದ ಭೂಮಿಯಿದೆ, ಅದರಲ್ಲಿ 9310 ಹೆಕ್ಟೇರ್ ನೀರಾವರಿ ಪ್ರದೇಶ, ಉಳಿದ 92690 ಹೆಕ್ಟೇರ್ ಪ್ರದೇಶ ಮಳೆ ಆಧಾರಿತವಾಗಿದ್ದು, ಒಟ್ಟು 1.02 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಕೃಷಿ ಚಟುವಟಿಕೆ ಇದ್ದರೂ ಮಳೆಯಿಲ್ಲದೆ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆಂದು ಹೇಳಿದರು.
ಜೂನ್ ಅಂತ್ಯದವರೆಗೂ ಕೇವಲ 40,182 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಕಾರ್ಯ ನಡೆದಿದೆ. ಆಗಸ್ಟ್ ಅಂತ್ಯದವರೆಗೂ ಮಳೆ ಆಗದೆ ಹೋದರೆ ಕೃಷಿಗೆ ಮಾತ್ರವಲ್ಲದೆ ಕುಡಿಯುವ ನೀರಿಗೆ ಸಮಸ್ಯೆ ಉಂಟಾಗುವುದರಿಂದ ಕೋಲಾರ ಜಿಲ್ಲೆಯನ್ನು ಬರಪೀಡಿತ ಪ್ರದೇಶವನ್ನಾಗಿ ಘೋಷಣೆ ಮಾಡುವಂತೆ ಜಿಲ್ಲೆಯ ಪರವಾಗಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸುವುದಾಗಿ ನುಡಿದರು.
ಬೆಂಗಳೂರು ಮಾದರಿಯಲ್ಲಿ ಅಭಿವೃದ್ಧಿ: ಕೋಲಾರ ಬೆಂಗಳೂರಿಗೆ ಅತ್ಯಂತ ಸಮೀಪವಿದೆ, ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಅನುದಾನದಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿವೆ, ಕೈಗಾರಿಕೆಗಳು ಸ್ಥಾಪನೆ ಆಗುತ್ತಿರುವುದರಿಂದ ಸಾವಿರಾರು ಜನರಿಗೆ ಉದ್ಯೋಗ ಸಿಗುತ್ತಿದೆ. ಮುಂದಿನ ವರ್ಷಗಳಲ್ಲಿ ಜಿಲ್ಲೆ ಶರವೇಗದಲ್ಲಿ ಅಭಿವೃದ್ಧಿಯಾಗಲಿದ್ದು, ಬೆಂಗಳೂರಿನ ಕೈಗಾರಿಕೋದ್ಯಮಿಗಳು ಜಿಲ್ಲೆಯಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸಲು ಉತ್ಸಾಹ ತೋರುತ್ತಿರುವುದರಿಂದ ಶೀಘ್ರವೇ ಕೋಲಾರ ಜಿಲ್ಲೆ ಬೆಂಗಳೂರಿಗೆ ಪರ್ಯಾಯವಾಗಿ ಬೆಳೆಯುವುದರಲ್ಲಿ ಅನುಮಾನವಿಲ್ಲ, ಇದಕ್ಕಾಗಿ ನಮ್ಮ ಸರ್ಕಾರ ಹೆಚ್ಚಿನ ಸಹಕಾರ ನೀಡಲಿದೆ ಎಂದರು.
ಕೋಲಾರ ತಾಲೂಕಿನ ನರಸಾಪುರ, ವೇಮಗಲಲ್ಹಾಗೂ ಮಾಲೂರು ಸಮೀಪ ಕೈಗಾರಿಕೆಗಳ ಸ್ಥಾಪನೆಗಾಗಿ ಈಗಾಗಲೇ ರೈತರಿಂದ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ, ರೈತರಿಗೆ ಒಳ್ಳೆಯ ಬೆಲೆ ಸಿಗುತ್ತಿದೆ. ಕೈಗಾರಿಕೆಗಳಲ್ಲಿ ಭೂಮಿ ಕಳೆದುಕೊಳ್ಳುವ ರೈತರಿಗೆ ಉದ್ಯೋಗ ನೀಡಲಾಗುವುದರಿಂದ ನಿರುದ್ಯೋಗಿಗಳಿಗೆ ಹೆಚ್ಚಿನ ಅನುಕೂಲವಾಗುವುದೆಂದು ತಿಳಿಸಿದರು. ಕೆಜಿಎಫ್ ಚಿನ್ನದ ಗಣಿಯನ್ನು ಮತ್ತೆ ಆರಂಭಿಸಲು ಪ್ರಯತ್ನಗಳು ನಡೆದಿದೆ. ಕೋಲಾರ ನಗರದ ಅಭಿವೃದ್ಧಿಗೆ ರಾಜ್ಯ ಮತ್ತು ಕೇಂದ್ರ ಸರ್ಕಾರದಿಂದ ಹರಿದು ಬರುತ್ತಿರುವ ಅನುದಾನದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ. ಕೆರೆಗಳ ಒತ್ತುವರಿ ತೆರವುಗೊಳಿಸಿ ಅಂತರ್ಜಲ ಅಭಿವೃದ್ಧಿಪಡಿಸಲಾಗುವುದು. ನಗರದಲ್ಲಿ ಪಾರ್ಕ್ಗಳ ಅಭಿವೃದ್ಧಿಗೆ ಒತ್ತು ನೀಡಲಾಗಿದೆ. ಕಲ್ಯಾಣಿಗಳ ಪುನಶ್ಚೇತನಕ್ಕೆ ಹಣ ಮೀಸಲಿಡಲಾಗಿದೆ. ವಿವಿಧ ವಸತಿ ಯೋಜನೆ, ರಸ್ತೆಗಳ ಅಭಿವೃದ್ಧಿ, ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು 29 ಕೋಟಿ ವೆಚ್ಚ ಮಾಡಿ 800 ಗ್ರಾಮಗಳಲ್ಲಿ ನೀರು ಪೂರೈಕೆ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ. ಈಗ 845 ಗ್ರಾಮದಲ್ಲಿ ಕಾಮಗಾರಿ ಪ್ರಗತಿಯಲ್ಲಿದೆ. 324 ಕೊಳವೆ ಬಾವಿಗಳನ್ನು ಕೊರೆಸಲಾಗಿದೆ ಎಂದು ತಿಳಿಸಿದರು.
ಜಿಲ್ಲೆಯ ಪ್ರಗತಿ ಪ್ರಕಟ: ವಿವಿಧ ಇಲಾಖೆಗಳಲ್ಲಿ ಆಗಿರುವ ಸಾಧನೆ, ಮುಂದುವರೆದ ಕಾಮಗಾರಿಗಳ ಮಾಹಿತಿಯನ್ನು ಸಚಿವರು ಅಂಕಿ-ಅಂಶಗಳ ಸಮೇತ ಪ್ರಕಟಿಸಿದರು. ಜಗತ್ತಿನ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾದ ಭಾರತ ಸ್ವಾತಂತ್ರ್ಯ ಪಡೆಯಲು ಅನೇಕರು ತ್ಯಾಗ ಬಲಿದಾನ ಮಾಡಿದ್ದಾರೆ. ಇದನ್ನು ಉಳಿಸುವುದು ಎಲ್ಲರ ಕರ್ತವ್ಯವಾಗಿದೆ. ಅಭಿವೃದ್ಧಿ ಪಥದಲ್ಲಿ ಭಾರತ ಎರಡನೇ ಸ್ಥಾನದಲ್ಲಿದ್ದು 2020ರ ವೇಳೆಗೆ ಪ್ರಥಮ ಸ್ಥಾನಕ್ಕೇರಬೇಕಾಗಿದೆ. ಮಾಹಿತಿ ತಂತ್ರಜ್ಞಾನ, ಏರೋಸ್ಪೇಸ್, ಕೈಗಾರಿಕಾ ಕ್ಷೇತ್ರದಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ ಎಂದು ತಿಳಿಸಿದರಲ್ಲದೆ, ರಾಜ್ಯ ಸರ್ಕಾರದ ಅನ್ನಭಾಗ್ಯ, ಕ್ಷೀರಭಾಗ್ಯ ಯೋಜನೆಯಿಂದ ಬಡವರಿಗೆ ಅನುಕೂಲವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಸಮಾರಂಭದಲ್ಲಿ ಕೇಂದ್ರ ಸಣ್ಣ ಮತ್ತು ಅತಿ ಸಣ್ಣ ಕೈಗಾರಿಕೆಗಳ ಸಚಿವ ಕೆ.ಎಚ್. ಮುನಿಯಪ್ಪ, ವಿಧಾನ ಪರಿಷತ್ ಸದಸ್ಯ ಡಿ.ಎಸ್. ವೀರಯ್ಯ, ಜಿ.ಪಂ ಅಧ್ಯಕ್ಷೆ ಚೌಡೇಶ್ವರಿ, ಉಪಾಧ್ಯಕ್ಷೆ ರತ್ನಮ್ಮ, ಜಿಲ್ಲಾ ಅಪರ ಜಿಲ್ಲಾಧಿಕಾರಿ ಡಾ. ವೆಂಕಟೇಶಮೂರ್ತಿ, ಜಿ.ಪಂ ಸಿಇಒ ಜುಲ್ಫಿಖಾರ್ ಉಲ್ಲಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ ನಿವಾಸ್ ಸೆಫಟ್, ಹೆಚ್ಚುವರಿ ಎಸ್ಪಿ ಜಮೀಲ್ ಹಾಗೂ ಇನ್ನಿತರ ಗಣ್ಯರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.