ಭ್ರಷ್ಟಾಚಾರ ತಡೆ ಜನರ ಸಹಕಾರದಿಂದಷ್ಟೇ ಸಾಧ್ಯ
ಚಿಕ್ಕಬಳ್ಳಾಪುರ: ಜನರು ಲೋಕಾಯುಕ್ತರಿಗೆ ಸಮರ್ಪಕವಾಗಿ ಸಹಕಾರ ನೀಡಿದಾಗ ಮಾತ್ರ ಸರ್ಕಾರಿ ಕಚೇರಿಗಳಲ್ಲಿನ ಅಕ್ರಮ ವ್ಯವಹಾರ, ಭ್ರಷ್ಟಾಚಾರವನ್ನು ಸುಲಭವಾಗಿ ದೂರ ಮಾಡಲು ಸಾಧ್ಯವಾಗುತ್ತದೆ ಎಂದು ಲೋಕಾಯುಕ್ತ ಇನ್ಸ್ಪೆಕ್ಟರ್ ಮಂಜೇಗೌಡ ಅಭಿಪ್ರಾಯ ವ್ಯಕ್ತಪಡಿಸಿದರು.
ನಗರದ ತಾ.ಪಂ. ಸಭಾಂಗಣದಲ್ಲಿ ನಡೆದ ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು.
ಕೆಲ ಕಚೇರಿಗಳಲ್ಲಿ ಅಧಿಕಾರಿಗಳು ನ್ಯಾಯಯುತವಾಗಿ ಕೆಲಸ ಮಾಡಿಕೊಡಲು ವಿಳಂಬ ಮಾಡುವುದು. ಹಣಕ್ಕಾಗಿ ಒತ್ತಾಯಿಸುತ್ತ ಕಿರುಕುಳ ಕೊಡುವಂತಹುದು ನಡೆಯುತ್ತಿರುತ್ತದೆ. ಈ ಬಗ್ಗೆ ಸಮರ್ಪಕವಾಗಿ ದೂರುಗಳನ್ನು ಜನರು ನೀಡಬೇಕು. ಆಗ ಮಾತ್ರ ಸೂಕ್ತ ಕ್ರಮ ಕೈಗೊಂಡು ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಬಹುದೆಂದು ತಿಳಿಸಿದರು.
ಯಾವುದೇ ಅಧಿಕಾರಿಗಳ ವಿರುದ್ಧ ಜನರು ದೂರು ನೀಡಿದಾಗ ಲೋಕಾಯುಕ್ತ ಪೊಲೀಸರು ತನಿಖೆ ನಡೆಸಿ, ತಪ್ಪಿತಸ್ಥರಿಗೆ ಕಾನೂನು ಪ್ರಕಾರವಾಗಿ ಶಿಕ್ಷೆ ಕೊಡಿಸುತ್ತಾರೆ. ಅದೇ ರೀತಿ ಉತ್ತಮವಾಗಿ ಕಾರ್ಯ ನಿರ್ವಹಿಸುವಂತಹ ಅಧಿಕಾರಿಗಳಿಗೆ ಬೇಕಂತಲೇ ಇಲ್ಲವೇ ದುರುದ್ದೇಶದಿಂದ ಕಿರುಕುಳ ನೀಡುವಂತಹುದನ್ನು ಸಹ ಸಹಿಸುವುದಿಲ್ಲ. ಪ್ರಾಮಾಣಿಕ ಅಧಿಕಾರಿಗಳಿಗೆ ರಕ್ಷಣೆ ನೀಡಿ, ದಿಕ್ಕು ತಪ್ಪಿಸುವಂತಹವರಿಗೆ ಪಾಠ ಕಲಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಸರ್ಕಾರ ಜನರ ಕಲ್ಯಾಣಕ್ಕಾಗಿ ಅನೇಕ ಕಾರ್ಯಕ್ರಮಗಳು, ಯೋಜನೆಗಳನ್ನು ಜಾರಿಗೆಗೆ ತರುತ್ತಿದೆ. ಅಧಿಕಾರಿಗಳು ಪ್ರಾಮಾಣಿಕವಾಗಿ ಅರ್ಹ ಫಲಾನುಭವಿಗಳಿಗೆ ಸಕಾಲದಲ್ಲಿ ಸವಲತ್ತುಗಳು ಸಿಗುವಂತೆ ಮಾಡಿ ಸರ್ಕಾರದ ಯೋಜನೆಗಳನ್ನು ಯಶಸ್ವಿಗೊಳಿಸಬೇಕೆಂದು ಸಲಹೆ ನೀಡಿದರು.
ಪ್ರತಿ ತಿಂಗಳು ಜಿಲ್ಲೆಯ ವಿವಿಧೆಡೆ ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಸಭೆಗಳನ್ನು ನಡೆಸಲಾಗುತ್ತಿದೆ. ಈ ಮೂಲಕ ಸರ್ಕಾರಿ ಕಚೇರಿಗಳಲ್ಲಿ ಕೆಲಸ ಮಾಡಿಕೊಡಲು ನಿರ್ಲಕ್ಷ್ಯ ವಹಿಸುವ, ಭ್ರಷ್ಟಾಚಾರದಲ್ಲಿ ತೊಡಗಿರುವ ಅಧಿಕಾರಿಗಳ ವಿರುದ್ಧ ದೂರುಗಳನ್ನು ಕೇಳಿ ಬಗೆಹರಿಸಲಾಗುತ್ತಿದೆ. ಇದನ್ನು ಸದುಪಯೋಗಪಡಿಸಿಕೊಂಡು, ಯಾವುದೇ ಇಲಾಖೆಯ ಅಧಿಕಾರಿಗಳು ಭ್ರಷ್ಟಾಚಾರದಲ್ಲಿ ತೊಡಗಿದ್ದಲ್ಲಿ ಸಾರ್ವಜನಿಕರು ನೇರವಾಗಿ ಲೋಕಾಯುಕ್ತರಿಗೆ ದೂರು ನೀಡಬಹುದು ಎಂದು ತಿಳಿಸಿದರು.
ಅಹವಾಲು ಸ್ವೀಕಾರ
ಆ.27 ರಂದು ಬೆಳಗ್ಗೆ 11 ಗಂಟೆಗೆ ಗುಡಿಬಂಡೆ ತಾಲೂಕಿನ ತಾ.ಪಂ. ಕಚೇರಿ ಸಭಾಂಗಣದಲ್ಲಿ ಹಾಗೂ ಮಧ್ಯಾಹ್ನ 3 ಗಂಟೆಗೆ ಬಾಗೇಪಲ್ಲಿ ತಾಲೂಕಿನ ಪುರಸಭೆ ಸಭಾಂಗಣದಲ್ಲಿ ಲೋಕಾಯುಕ್ತ ಪೊಲೀಸರು ಆಯಾ ತಾಲೂಕು ವ್ಯಾಪ್ತಿಗೆ ಸೇರಿದ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದು ಸರ್ಕಾರಿ ಕಚೇರಿಗಳಲ್ಲಿ ಕೆಲಸ ಮಾಡಿಕೊಡಲು ವಿಳಂಬ, ನಿರ್ಲಕ್ಷ್ಯ ಮಾಡುತ್ತಿದ್ದಲ್ಲಿ ಮತ್ತು ಹಣಕ್ಕೆ ಒತ್ತಾಯಿಸುತ್ತಿದ್ದಲ್ಲಿ ಅಂತಹ ಅಧಿಕಾರಿ, ಸಿಬ್ಬಂದಿಗಳ ವಿರುದ್ಧ ಸಾರ್ವಜನಿಕರು ಅಹವಾಲುಗಳನ್ನು ನೀಡಬಹುದು. ಸಭೆಯಲ್ಲಿ ಸಂಬಂಧಿಸಿದ ತಾಲೂಕಿನ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಲೋಕಾಯುಕ್ತ ಪೊಲೀಸ್ ಇನ್ಸೆಪೆಕ್ಟರ್ ಎ.ಜಿ. ಮಂಜೇಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

