ಸುಳ್ಳು ಭರವಸೆ ನೀಡುತ್ತಲೇ ಕಾಲ ಕಳೆದ ಮೊಯ್ಲಿ
ಚಿಕ್ಕಬಳ್ಳಾಪುರ: ಸುಳ್ಳು ಭರವಸೆಗಳನ್ನು ನೀಡುತ್ತಲೇ ಕಾಲ ಕಳೆದ ಕ್ಷೇತ್ರದ ಸಂಸದ, ಕೇಂದ್ರ ಸಚಿವ ಎಂ. ವೀರಪ್ಪ ಮೊಯ್ಲಿ ಅವರಿಗೆ ಜನರೇ ತಕ್ಕ ಪಾಠ ಕಲಿಸಬೇಕೆಂದು ಬಿಜೆಪಿ ರಾಜ್ಯ ಯುವ ಮೋರ್ಚಾ ಉಪಾಧ್ಯಕ್ಷ ತಮ್ಮೇಗೌಡ ತಿಳಿಸಿದರು.
ತಾಲೂಕಿನ ಹೊನ್ನೇನಹಳ್ಳಿಯಲ್ಲಿ ಆಯೋಜಿಸಿದ್ದ ಬಿಜೆಪಿ ಯುವ ಮೋರ್ಚಾ ವಿಶೇಷ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿ, ಹಣದುಬ್ಬರ, ಭ್ರಷ್ಟಾಚಾರ, ಹಗರಣಗಳೇ ಕೇಂದ್ರ ಯುಪಿಎ ಸರ್ಕಾರದ ಸಾಧನೆಯಾಗಿದೆ. ಇದರ ಅಸಮರ್ಥ ಆಡಳಿತದಿಂದ ಜನರು ತೊಂದರೆ ಅನುಭವಿಸುತ್ತಿರುವುದರ ನಡುವೆ ದೇಶ ಅಭಿವೃದ್ಧಿಯಲ್ಲಿ ಹಿನ್ನಡೆ ಹೊಂದಿದೆ. ಈ ಬಗ್ಗೆ ಜನ ಜಾಗೃತಿ ಮೂಡಿಸುವ ಕೆಲಸವನ್ನು ಪಕ್ಷದ ಕಾರ್ಯಕರ್ತರು ಮಾಡಬೇಕೆಂದರು. ಮುಖ್ಯಮಂತ್ರಿ ನರೇಂದ್ರ ಮೋದಿ ಗುಜರಾತ್ ರಾಜ್ಯವನ್ನು ಅಭಿವೃದ್ಧಿಯತ್ತ ಕೊಂಡೊಯ್ದು ಎಲ್ಲರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದ್ದು, ಇವರು ಪ್ರಧಾನಿಯಾದಾಗ ದೇಶ ತ್ವರಿತವಾಗಿ ಅಭಿವೃದ್ಧಿ ಹೊಂದುವುದಲ್ಲದೇ ಪೆಡಂಭೂತ ಸಮಸ್ಯೆಗಳು ದೂರವಾಗುತ್ತವೆ. ಈ ನಿಟ್ಟಿನಲ್ಲಿ ಇವರ ಕೈ ಬಲಪಡಿಸಲು ಮುಂದಾಗಬೇಕಾಗಿದ್ದು ಇದೀಗ ದೇಶದಾದ್ಯಂತ ಎದ್ದಿರುವ ಮೋದಿ ಅಲೆಯನ್ನು ಸಮರ್ಪಕವಾಗಿ ಬಳಸಿಕೊಂಡು ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತರಬೇಕೆಂದು ತಿಳಿಸಿದರು. ಯುವ ಮೋರ್ಚಾ ಜಿಲ್ಲಾಅಧ್ಯಕ್ಷ ಮಂಜುನಾಥ್ ರೆಡ್ಡಿ ಮಾತನಾಡಿ, ನರೇಂದ್ರಮೋದಿಯವರನ್ನು ಮುಂದಿನ ಪ್ರಧಾನಿಯನ್ನಾಗಿಸಲು ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಪಕ್ಷದ ಸಂಸದರನ್ನು ಆಯ್ಕೆ ಮಾಡುವ ಜವಾಬ್ದಾರಿ ನಮ್ಮ ಮೇಲಿದೆ ಎಂದರು. ತಾಲೂಕು ಅಧ್ಯಕ್ಷ ಶ್ರೀನಿವಾಸ್ ರೆಡ್ಡಿ, ಗ್ರಾಮಾಂತರ ಯುವ ಮೋರ್ಚಾ ಅಧ್ಯಕ್ಷ ಶ್ರೀನಿವಾಸ್ ಮಾತನಾಡಿದರು. ಬಿಜೆಪಿ ಮುಖಂಡರಾದ ಸುಬ್ಬರಾಜ್, ಕಿಶೋರ್, ಲೋಕೇಶ್, ಪ್ರದೀಪ್, ನವೀನ್ ಕುಮಾರ್, ಶ್ರೀಮುರಳಿ, ತಾಯಪ್ಪ, ಭೈರೇಗೌಡ, ಹರ್ಷಿತ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

