ಕೋಲಾರ

ಮುಂದುವರಿದ ಅಹೋರಾತ್ರಿ ಧರಣಿ

Published On :

ಚಿಕ್ಕಬಳ್ಳಾಪುರ: ರಾಷ್ಟ್ರೀಯ ಹೆದ್ದಾರಿ 7 ರ ಬೈಪಾಸ್ ರಸ್ತೆ ನಿರ್ಮಾಣಕ್ಕೆ ಸ್ವಾಧೀನಪಡಿಸಿಕೊಂಡಿರುವ ರೈತರ ಜಮೀನಿಗೆ ತ್ವರಿತವಾಗಿ ನ್ಯಾಯಯುತ ಪರಿಹಾರ ನೀಡಬೇಕೆಂದು ಒತ್ತಾಯಿಸಿ ರೈತ ಮುಖಂಡರು ನಡೆಸುತ್ತಿರುವ ಅಹೋರಾತ್ರಿ ಧರಣಿ ಮೂರನೇ ದಿನವೂ ಜಿಲ್ಲಾಡಳಿತದ ವಿರುದ್ಧ ಆಕ್ರೋಶ ವ್ಯಕ್ತವಾಯಿತು.
ನ್ಯಾಯಯುತ ಬೇಡಿಕೆ ಈಡೇರಿಸುವವರೆಗೂ ಪ್ರತಿಭಟನೆ ಕೈ ಬಿಡುವುದಿಲ್ಲ ಎಂದು ಪಟ್ಟು ಹಿಡಿದ ರೈತ ಮುಖಂಡರು, ಸ್ಥಳಕ್ಕೆ ಸಂಬಂಧಪಟ್ಟ ಜನಪ್ರತಿನಿಧಿಗಳು ಮತ್ತು ಜಿಲ್ಲಾಧಿಕಾರಿಗಳು ಭೇಟಿ ನೀಡಿ ಸ್ಪಂದಿಸಬೇಕೆಂದು ಆಗ್ರಹಿಸಿದರು.
ಡಿ.2 ರಂದು ಜಾನುವಾರುಗಳ ಸಮೇತ ನಗರದ ಹೊರ ವಲಯದ ಅಣಕನೂರು ಬಳಿ ಇರುವ ನೂತನ ಜಿಲ್ಲಾಡಳಿತದ ಭವನಕ್ಕೆ ಮುತ್ತಿಗೆ ಹಾಕಿದ ಪ್ರತಿಭಟನಾ ನಿರತ ರೈತರನ್ನು ಒಳಗೆ ಬಿಡಲಾಯಿತಾದರೂ ಜಾನುವಾರುಗಳಿಗೆ ಅವಕಾಶ ಕೊಡಲಿಲ್ಲ. ಇದರಿಂದ ರೈತರು ಭವನ ಮುಂಭಾಗದ ಗೇಟಿನ ಮುಂದೆಯೇ ಜಾನುವಾರುಗಳೊಂದಿಗೆ ಪ್ರತಿಭಟನೆ ನಡೆಸಿದ್ದು ಇದೀಗ ಭವನದೊಳಗಡೆ ಫೆಂಡಾಲ್ ಹಾಕಿಕೊಂಡು ರೈತರು ಪ್ರತಿಭಟನೆಯಲ್ಲಿ ನಿರತರಾಗಿದ್ದಾರೆ.
2007 ರಲ್ಲಿ ಎನ್.ಎಚ್ 7 ಬೈಪಾಸ್ ರಸ್ತೆ ಮತ್ತು ರಸ್ತೆ ಅಗಲೀಕರಣಕ್ಕೆ ಭೂಮಿಯನ್ನು ರೈತರಿಂದ ಸ್ವಾಧೀನಪಡಿಸಿಕೊಳ್ಳಲಾಯಿತಾದರೂ ಈವರೆಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ಜಿಲ್ಲಾಡಳಿತದ ಕೈಯಲ್ಲಿ ಸಂಪೂರ್ಣವಾಗಿ ಎಲ್ಲಾ ರೈತರಿಗೂ ಪರಿಹಾರ ನೀಡಲು ಸಾಧ್ಯವಾಗಿಲ್ಲ. ಬದಲಿಗೆ ಪರಿಹಾರ ವಿತರಣೆಯಲ್ಲಿ ತಾರತಮ್ಯ ನೀತಿ ಅನುಸರಿಸಿ ರೈತರಲ್ಲಿನ ಒಗ್ಗಟ್ಟನ್ನೇ ಚೂರು ಮಾಡಿದೆ.ಅಲ್ಲದೇ ಪ್ರಾರಂಭದಲ್ಲಿ ಕೊಟ್ಟ ಭರವಸೆಗೆ ಅನುಗುಣವಾಗಿ ನಡೆದುಕೊಳ್ಳುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈಗಾಗಲೇ ಭೂಮಿ ಕಳೆದುಕೊಂಡು, ಇತ್ತ ಪರಿಹಾರವೂ ಕೈಗೆ ಸಿಗದೇ ರೈತರು ತತ್ತರಿಸುತ್ತಿದ್ದಾರೆ. ಒಂದು ಕಡೆ ಭೂಮಿಯ ಮಾರುಕಟ್ಟೆ ಮೌಲ್ಯ ಹೆಚ್ಚಳವಾಗುತ್ತಿದೆ. ಇದರಿಂದ ಮುಂದೆ ಭೂಮಿಯನ್ನು ಕೊಂಡುಕೊಳ್ಳಲು ಸಾಧ್ಯವಾಗದೇ ರೈತರು ಭೂ ವಂಚಿತರಾಗಬೇಕಾಗಿದೆ. ಅಲ್ಲದೇ ಮಾಡಿದ ಸಾಲ ತೀರಿಸಲಾಗದೇ ಆರ್ಥಿಕ ನಷ್ಟಕ್ಕೆ ಗುರಿಯಾಗಬೇಕಾಗಿದ್ದು ತ್ವರಿತವಾಗಿ ಜಿಲ್ಲಾಡಳಿತ ಸ್ಪಂದಿಸದಿದ್ದಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವುದೇ ಉಳಿದಿರುವ ಮಾರ್ಗವಾಗಿದೆ ಎಂದು ಎಚ್ಚರಿಕೆ ನೀಡಿದರು. ಪ್ರತಿಭಟನೆಯಲ್ಲಿ ಯಲುವಹಳ್ಳಿ ಸೊಣ್ಣೇಗೌಡ, ಭಕ್ತರಹಳ್ಳಿ ಭೈರೇಗೌಡ, ಮಳ್ಳೂರು ಹರೀಶ್, ಮನೋಹರ್, ರಾಮಕೃಷ್ಣಪ್ಪ, ನಾರಾಯಣಸ್ವಾಮಿ, ಶ್ರೀನಿವಾಸ್, ಬಾಬುರೆಡ್ಡಿ, ಸೋಮಶೇಖರ್, ಆನಂದಮೂರ್ತಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.