ಕೋಲಾರ

ಟೇಕಲ್ ರಸ್ತೆ ಅಗಲೀಕರಣ ಕಾಮಗಾರಿ ಚುರುಕು

Published On :

ಕೋಲಾರ: ಕಳೆದ ಏಳೆಂಟು ವರ್ಷಗಳಿಂದ ನೆನಗುದಿಗೆ ಬಿದ್ದಿದ್ದ ನಗರದ ಟೇಕಲ್ ರಸ್ತೆಯ ಅಗಲೀಕರಣಕ್ಕೆ ಚಾಲನೆ ನೀಡಿರುವ ಲೋಕೋಪಯೋಗಿ ಇಲಾಖೆ ಒತ್ತುವರಿ ತೆರವುಗೊಳಿಸುವಂತೆ ಸಂಬಂಧಪಟ್ಟವರಿಗೆ ಡಿ.10ರವರೆಗೆ ಗಡುವು ನೀಡಿದೆ.
ಟೇಕಲ್ ರಸ್ತೆಯ ಅಭಿವೃದ್ಧಿಗಾಗಿ ಜನತೆ ನಡೆಸಿದ ಪ್ರತಿಭಟನೆಯಿಂದಾಗಿ ಶನಿವಾರದಿಂದಲೇ ಒತ್ತುವರಿ ತೆರವುಗೊಳಿಸುವುದಕ್ಕೆ ಕಾರ್ಯಾಚರಣೆ ಆರಂಭಿಸಿರುವ ಅಧಿಕಾರಿಗಳು ಸ್ವಯಂ ಪ್ರೇರಣೆಯಿಂದ ಒತ್ತುವರಿ ತೆರವು ಮಾಡದಿದ್ದರೆ ಜೆಸಿಬಿಗಳ ಮೂಲಕ ಕಾರ್ಯಾಚರಣೆ ನಡೆಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಟೇಕಲ್ ರಸ್ತೆಯ ಬಹುತೇಕ ನಿವಾಸಿಗಳು ರಸ್ತೆಯನ್ನು ಒತ್ತುವರಿ ಮಾಡಿಕೊಂಡು ನಿರ್ಮಿಸಿದ್ದ ಕಾಂಪೌಂಡು, ಸಜ್ಜಾಗಳು, ಅಂಗಡಿ ಮುಂದಿನ ಛಾವಣಿಗಳನ್ನು ಸ್ವಯಂ ಪ್ರೇರಣೆಯಿಂದ ತೆರವುಗೊಳಿಸುವ ಮೂಲಕ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಶ್ರಮ ತಪ್ಪಿಸಿದ್ದರೆ, ಬೆರಳೆಣಿಕೆಯಷ್ಟು ಜನರು ಮಾತ್ರ ಅವಕಾಶ ನೀಡದೆ ಕಾರ್ಯಾಚರಣೆ ನಡೆಸಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಒತ್ತುವರಿ ತೆರವು ಮಾಡಲು ಲೋಕೋಪಯೋಗಿ ಇಲಾಖೆಯವರು ಕಟ್ಟಡಗಳ ಮೇಲೆ ಹಾಕಿದ್ದ ಗುರುತುಗಳನ್ನು ಕೆಲವರು ಅಳಿಸಿ ಹಾಕಿದ್ದರಿಂದ ಅಧಿಕಾರಿಗಳು ಮತ್ತೆ ಗುರುತು ಹಾಕಿ. ಒತ್ತುವರಿ ತೆರವು ಮಾಡಲು ಕಾರ್ಯಾಚರಣೆ ಮುಂದುವರೆಸಿದ್ದಾರೆ.
ಕೆಲವರು ನಾವೇ ಒತ್ತುವರಿ ತೆರವು ಮಾಡುತ್ತೇವೆ. ಸ್ವಲ್ಪ ಕಾಲಾವಕಾಶ ನೀಡುವಂತೆ ಮನವಿ ಮಾಡಿರುವುದರಿಂದ, ಅಧಿಕಾರಿಗಳು ಡಿ.10ರೊಳಗೆ ಅಕ್ರಮ ನಿರ್ಮಾಣ ತೆರವು ಮಾಡದಿದ್ದರೆ ಜೆಸಿಬಿಗಳ ಮೂಲಕ ಧ್ವಂಸ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಟೇಕಲ್ ರಸ್ತೆಯಲ್ಲಿ ಪ್ರತಿದಿನ ನೂರಾರು ವಾಹನಗಳು ಓಡಾಡುತ್ತವೆ, ಅಭಿವೃದ್ಧಿ ಇಲ್ಲದೆ ರಸ್ತೆಗಳು ಹಾಳಾಗಿವೆ, ಕಿರಿದಾದ ರಸ್ತೆಗಳಲ್ಲಿ ಸುಗಮ ಸಂಚಾರಕ್ಕೆ ಅಡ್ಡಿಯಾಗಿದೆ, ಕೋಲಾರ ನಗರ ದಿನದಿಂದ ದಿನಕ್ಕೆ ಬೆಳೆಯುತ್ತಿರುವುದರಿಂದ ನಗರದ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ರಸ್ತೆ ಅಗಲೀಕರಣಕ್ಕೆ ಮುಂದಾಗಿರುವುದರಿಂದ ಜನತೆ ಸಹಕಾರ ನೀಡಬೇಕೆಂದು ಅಧಿಕಾರಿಗಳು ಮನವಿ ಮಾಡಿದ್ದಾರೆ. ಕಾನೂನು ಉಲ್ಲಂಘನೆ ಮಾಡಿದಲ್ಲಿ ನ್ಯಾಯಾಲಯದ ಸೂಚನೆಯಂತೆ ಕ್ರಮ ಕೈಗೊಳ್ಳುತ್ತೇವೆ. ಇದಕ್ಕೆ ಅವಕಾಶ ನೀಡದೆ ಅಭಿವೃದ್ಧಿ ಸಹಕಾರ ನೀಡಿ ಎಂದು ತಿಳಿಸಿದ್ದಾರಲ್ಲದೆ, ಡಿ.10ರೊಳಗೆ ಒತ್ತುವರಿ ತೆರವು ಮಾಡದಿದ್ದರೆ ಕಾನೂನು ತನ್ನ ಕೆಲಸ ಮುಂದುವರೆಸುತ್ತದೆ ಎಂದು ಸೂಚ್ಯವಾಗಿ ತಿಳಿಸಿದ್ದಾರೆ.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.