ನಗರಸಭೆ, ನಾಡಕಚೇರಿಗೆ ಆಡಳಿತಾಧಿಕಾರಿ ದಿಢೀರ್ ಭೇಟಿ
ಕೆಜಿಎಫ್: ನಗರಸಭೆ ಮತ್ತು ನಾಡಕಚೇರಿಗೆ ಬೆಳಗ್ಗೆ ಧಿಡೀರನೆ ಭೇಟಿ ನೀಡಿದ್ದ ಕೋಲಾರ ಉಪವಿಭಾಗಾಧಿಕಾರಿ ಹಾಗೂ ನಗರಸಭೆ ಆಡಳಿತಾಧಿಕಾರಿ ಸಿ.ಎನ್.ಮಂಜುನಾಥ್ ಅವರು ಅಧಿಕಾರಿಗಳು ಮತ್ತು ಸಿಬ್ಬಂದಿ ಗೈರು ಹಾಜರಾಗಿದ್ದ ಹಿನ್ನೆಲೆಯಲ್ಲಿ ಕಚೇರಿ ವ್ಯವಸ್ಥಾಪಕ ನಂಜುಂಡಪ್ಪ ಅವರಿಗೆ ಕಾರಣ ಕೇಳಿ ನೋಟಿಸ್ ಜಾರಿಮಾಡುವಂತೆ ಸೂಚಿಸಿದರು.
ಹಾಜರಾತಿ ಪರಿಶೀಲಿಸಿದ ಅವರು, ಇದೇ ವೇಳೆ ಸಾರ್ವಜನಿಕರ ಕುಂದು ಕೊರತೆಗಳ ಬಗ್ಗೆ ಸ್ಪಂದಿಸದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಸಾರ್ವಜನಿಕರು ಮತದಾರರ ಗುರುತಿನ ಚೀಟಿಗಳನ್ನು ವಿತರಿಸಲು ಮತ್ತು ಹೆಸರು ಸೇರಿಸಲು ನಗರಸಭೆಯ ಸಂಬಂಧಪಟ್ಟ ಅಧಿಕಾರಿಗಳು ವಿಳಂಬ ಮಾಡುತ್ತಿದ್ದಾರೆ ಮತ್ತು ಈ ಕುರಿತು ಸಾರ್ವಜನಿಕರಿಗೆ ಯಾವುದೇ ಮಾಹಿತಿ ಹಾಗೂ ವಿವರ ನೀಡುತ್ತಿಲ್ಲ ಎಂದು ಆರೋಪಿಸಿದರು. ಸಂಬಂಧಪಟ್ಟ ಅಧಿಕಾರಿಗಳನ್ನು ಕರೆದು ಕೂಡಲೇ ಸಾರ್ವಜನಿಕರ ಸಮಸ್ಯೆಗಳಿಗೆ ಮತ್ತು ಅವರ ಕೆಲಸಗಳನ್ನು ಮಾಡುವಂತೆ ಸೂಚಿಸಿದರು.
ಅದೇ ರೀತಿ ನಾಡಕಚೇರಿಗೆ ಭೇಟಿ ನೀಡಿದ ಸಿ.ಎನ್.ಮಂಜುನಾಥ್, ಉಪತಹಸೀಲ್ದಾರ್ ಮತ್ತು ಇತರೆ ಅಧಿಕಾರಿಗಳನ್ನು ಕರೆದು, ಕಚೇರಿಯಲ್ಲಿ ದಲ್ಲಾಳಿಗಳ ಹಾವಳಿ ಹೆಚ್ಚಾಗಿದ್ದು ಸಾರ್ವಜನಿಕರಿಂದ ಲಂಚವನ್ನು ಪಡೆಯುತ್ತಿರುವ ಬಗ್ಗೆ ತಮಗೆ ಬಂದಿರುವ ದೂರುಗಳ ಕುರಿತು ಪ್ರಶ್ನಿಸಿದ ಅವರು ದಲ್ಲಾಳಿಗಳ ಹಾವಳಿ ತಡೆಯದಿದ್ದರೆ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಸಿಬ್ಬಂದಿ ವಿರುದ್ದ ಸೂಕ್ತ ಕ್ರಮವನ್ನು ಜರುಗಿಸಲಾಗುತ್ತದೆ ಎಂದು ಎಚ್ಚರಿಸಿದರು. ನಂತರ ನೆಮ್ಮದಿ ಕೇಂದ್ರಕ್ಕೂ ಭೇಟಿ ನೀಡಿ ಗಣಕಯಂತ್ರ ಕೊಠಡಿ ಮತ್ತು ಕೆಲವು ದಾಖಲಾತಿಗಳನ್ನು ಪರಿಶೀಲಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

