ರಮೇಶ್ಕುಮಾರ್ ಭೂ ಒತ್ತುವರಿಗೆ ಕೋಲಾರ ಡಿಸಿ ಪತ್ರ ಸಾಕ್ಷಿ: ಹಿರೇಮಠ
ಬೆಂಗಳೂರು: ಶ್ರೀನಿವಾಸಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ.ಆರ್. ರಮೇಶ್ ಕುಮಾರ್ ಅವರು ಅರಣ್ಯ ಭೂಮಿ ಒತ್ತುವರಿ ಮಾಡಿಕೊಂಡಿದ್ದಾರೆ ಎಂಬುದಕ್ಕೆ ಕೋಲಾರದ ಜಿಲ್ಲಾಧಿಕಾರಿ ಕಂದಾಯ ಇಲಾಖೆಗೆ ಬರೆದಿರುವ ಪತ್ರವೇ ಸಾಕ್ಷಿ ಎಂದು ಸಮಾಜ ಪರಿವರ್ತನಾ ಸಮಿತಿ ಮುಖ್ಯಸ್ಥ ಎಸ್.ಆರ್. ಹಿರೇಮಠ್ ಹೇಳಿದ್ದಾರೆ.
ಹೊಸಹುಡ್ಯ ಗ್ರಾಮದಲ್ಲಿ ಸರ್ವೆ ಮಾಡಿದಾಗ ರಮೇಶ್ ಕುಮಾರ್ ಅವರು ಅರಣ್ಯ ಪ್ರದೇಶಕ್ಕೆ ಸೇರಿದ ಜಾಗ ಒತ್ತುವರಿ ಮಾಡಿಕೊಂಡಿರುವುದು ಕಂಡುಬಂದಿದೆ. ಈ ಸಂಬಂಧ ಜಿಲ್ಲಾಧಿಕಾರಿ ಕಂದಾಯ ಇಲಾಖೆಗೆ ಎಂಟು ಪುಟಗಳ ಪತ್ರ ಬರೆದಿದ್ದಾರೆ. ಈ ಪತ್ರವೇ ಒತ್ತುವರಿಗೆ ಪ್ರಮುಖ ದಾಖಲೆಯಾಗಿ ಉಳಿಯುತ್ತದೆ ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ಬುಧವಾರ ತಿಳಿಸಿದರು. ರಮೇಶ್ ಕುಮಾರ್ ತಾನು ಜಮೀನು ಒತ್ತುವರಿ ಮಾಡಿಕೊಂಡಿಲ್ಲ. ಏಳನೇ ವ್ಯಕ್ತಿಯಿಂದ ಖರೀದಿಸಿದ್ದೇನೆ ಎಂದು ಸಮರ್ಥಿಸಿಕೊಳ್ಳುತ್ತಿದ್ದಾರೆ. ಅರಣ್ಯ ಭೂಮಿ ಒತ್ತುವರಿ ಮಾಡಿಲ್ಲ ಎಂದಾದರೆ ಸಾರ್ವಜನಿಕವಾಗಿ ದಾಖಲೆ ಬಿಡುಗಡೆ ಮಾಡುವಂತೆ ಹಿರೇಮಠ್ ಆಗ್ರಹಿಸಿದರು.
ಸರ್ಕಾರಿ ಜಮೀನು ಒತ್ತುವರಿ ಪತ್ತೆ ಕಾರ್ಯಪಡೆಯ ಮುಖ್ಯಸ್ಥರಾಗಿದ್ದ ವಿ.ಬಾಲಸುಬ್ರಹ್ಮಣ್ಯ ನೀಡಿರುವ ವರದಿಗೆ ಸಂಬಂಧಿಸಿದಂತೆ ಅಡ್ವೋಕೇಟ್ ಜನರಲ್ ಪ್ರೊ. ರವಿವರ್ಮ ಕುಮಾರ್ ಅವರು ಮಂಗಳವಾರ ಬಿಡಿಎ, ಬಿಬಿಎಂಪಿ, ಕೆರೆ ಅಭಿವೃದ್ಧಿ ಪ್ರಾಧಿಕಾರ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ. ಇದರಿಂದ ಅವರು ನಗರದಲ್ಲಿ ಒತ್ತುವರಿಯಾಗಿರುವ ಬಗ್ಗೆ ಮಾತ್ರವೇ ಚರ್ಚಿಸಿದ್ದಾರೆ.
ಇದು ಕೇವಲ ಬೆಂಗಳೂರಿಗೆ ಮಾತ್ರ ಸೀಮಿತವಾಗಬಾರದು. ರಾಜ್ಯದಲ್ಲಿ 11 ಲಕ್ಷ ಎಕರೆ ಸರ್ಕಾರಿ ಜಮೀನು ಒತ್ತುವರಿಯಾಗಿದೆ. ಡಿ.21ಕ್ಕೆ ಮತ್ತೊಂದು ಸಭೆ ನಡೆಯುತ್ತಿದ್ದು, ಈ ಬಗ್ಗೆ ವಿಶೇಷ ಗಮನಹರಿಸಬೇಕು ಎಂದು ಹಿರೇಮಠ್ ಒತ್ತಾಯಿಸಿದ್ದಾರೆ.
ಆರ್.ಆಶೋಕ್ ಹಸ್ತಕ್ಷೇಪ ಸಾಬೀತು: ಬೆಂಗಳೂರಿನ ಉತ್ತರಹಳ್ಳಿ ಹೋಬಳಿಯ ಸೋಮನಹಳ್ಳಿ ಗ್ರಾಮದ ಸರ್ವೇ ಸಂಖ್ಯೆ 242ರಲ್ಲಿ ಮಾಜಿ ಮೇಯರ್ ಡಿ.ವೆಂಕಟೇಶಮೂರ್ತಿ ಹಾಗೂ ಅವರ ಪತ್ನಿ ಕೆ. ಪ್ರಭಾ ಅವರ ಹೆಸರಿನಲ್ಲಿ ನಾಲ್ಕು ಎಕರೆ ಜಮೀನನ್ನು ಕ್ಷೇತ್ರದ ಶಾಸಕರಾಗಿದ್ದ ಆರ್.ಅಶೋಕ ಅವರಿಂದ ಮಂಜೂರು ಮಾಡಿಸಿಕೊಂಡಿದ್ದಾರೆ.
ವೆಂಕಟೇಶಮೂರ್ತಿ ಅವರು ನನ್ನ ಹೆಸರಿನಲ್ಲಿ ಜಮೀನು ಇಲ್ಲ ಎಂದು ಪತ್ನಿ ಹೆಸರಿನಲ್ಲಿ ನಾಲ್ಕು ಎಕರೆ ಸಾರ್ವಜಿಕ ಜಮೀನನ್ನು ಪಡೆದುಕೊಂಡಿದ್ದಾರೆ. ಇದರಲ್ಲಿ ಆರ್.ಅಶೋಕ ಹಸ್ತಕ್ಷೇಪ ಇರುವುದು ಸಾಬೀತಾಗಿರುವುದರಿಂದ ಜಮೀನು ವಾಪಸು ಪಡೆದು ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಬೇಕು ಎಂದು ಒತ್ತಾಯಿಸಿದರು. ರಾಜ್ಯದಲ್ಲಿ ಎಲ್ಲೆಂದರಲ್ಲಿ ತಲೆ ಎತ್ತಿರುವ ಮೆಕ್ ಡೊನಾಲ್ಡ್, ಕಾಫಿ ಡೇ ಸಂಸ್ಥೆಗಳು ಭೂಮಿ ಒತ್ತುವರಿ ಮಾಡಿಕೊಂಡಿರುವ ಕುರಿತು ಮುಂದಿನ ದಿನಗಳಲ್ಲಿ ಸೂಕ್ತ ದಾಖಲೆ ಬಿಡುಗಡೆ ಮಾಡಲಿದ್ದೇನೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

