ಕೋಲಾರ

ಸರ್ಕಾರದಿಂದ ಕ್ರೀಡಾ ಇಲಾಖೆ ನಿರ್ಲಕ್ಷ್ಯ

Published On :

ಕನ್ನಡಪ್ರಭ ವಾರ್ತೆ, ಕೋಲಾರ, ಡಿ.12
ರಾಜ್ಯ ಸರ್ಕಾರದ 1.20 ಲಕ್ಷ ಕೋಟಿ ಬಜೆಟ್‌ನಲ್ಲಿ ಕ್ರೀಡಾ ಮತ್ತು ಯುವಜನ ಸಬಲೀಕರಣ ಇಲಾಖೆಗೆ ಕೇವಲ 83.84 ಕೋಟಿ ರು. ಅನುದಾನ ನೀಡುವ ಮೂಲಕ ಇಲಾಖೆಯನ್ನು ನಿರ್ಲಕ್ಷಿಸಿದೆ ಎಂದು ವಿಧಾನ ಪರಿಷತ್ ಸದಸ್ಯ ವೈ.ಎ. ನಾರಾಯಣಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದರು.
ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ದೈಹಿಕ ಶಿಕ್ಷಕರ ಸಂಘ ಹಾಗೂ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘಗಳ ಸಂಯುಕ್ತಾಶ್ರಯದಲ್ಲಿ ಗುರುವಾರ ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಹಮ್ಮಿಕೊಂಡಿದ್ದ ದೈಹಿಕ ಶಿಕ್ಷಣ ಶಿಕ್ಷಕರ 4ನೇ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ರಾಜ್ಯದ 6 ಕೋಟಿ ಜನಸಂಖ್ಯೆಯಲ್ಲಿ 2 ಕೋಟಿ ಯುವಕರಿದ್ದಾರೆ, ಇವರನ್ನು ದೈಹಿಕವಾಗಿ ಸದೃಢರನ್ನಾಗಿಸಿ ದೇಶದ ಅಭಿವೃದ್ಧಿಗೆ ಬಳಕೆ ಮಾಡಿಕೊಳ್ಳಬೇಕಾದದ್ದು ಸರ್ಕಾರದ ಕರ್ತವ್ಯ. ಆದರೆ, ಕ್ರೀಡಾ ಇಲಾಖೆಗೆ ಕಡಿಮೆ ಅನುದಾನ ನೀಡುವ ಮೂಲಕ ಇಲಾಖೆಯ ಉದ್ದೇಶಗಳಿಗೆ ಸರ್ಕಾರ ತಿಲಾಂಜಲಿ ಹೇಳಿದೆ ಎಂದರು.
ರಾಜ್ಯದ 22 ತಾಲೂಕುಗಳಲ್ಲಿ ಕ್ರೀಡಾಂಗಣಗಳಿಲ್ಲ, 56 ತಾಲೂಕುಗಳಲ್ಲಿ ಕಾಮಗಾರಿ ಮಂದ ಗತಿಯಲ್ಲಿ ಸಾಗಿದೆ, 5 ಜಿಲ್ಲಾ ಕೇಂದ್ರಗಳಲ್ಲಿ ಕ್ರೀಡಾಂಗಣಗಳು ಇಲ್ಲ, ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ ಕ್ರೀಡಾಂಗಣದ ಜಾಗ ಒತ್ತುವರಿಯಾಗಿದ್ದು ಇದು ಇಲಾಖೆ ನಿರ್ಲಕ್ಷ್ಯಕ್ಕೆ ಒಳಪಟ್ಟಿರುವುದೇ ಸಾಕ್ಷಿ ಎಂದು ಹೇಳಿದರು.
ಜಿ.ಪಂ ಅಧ್ಯಕ್ಷ ತೂಪಲ್ಲಿ ನಾರಾಯಣಸ್ವಾಮಿ, ಶಿಸ್ತುಬದ್ಧ ಸಮಾಜ ನಿರ್ಮಾಣದಲ್ಲಿ ದೈಹಿಕ ಶಿಕ್ಷಕರ ಪಾತ್ರ ಹೆಚ್ಚಿನದು. ಮಕ್ಕಳ ಉತ್ತಮ ಆರೋಗ್ಯ ರಕ್ಷಣೆಯೊಂದಿಗೆ ಅವರು ಪಠ್ಯದತ್ತಲೂ ಹೆಚ್ಚಿನ ಗಮನ ಹರಿಸಲು ದೈಹಿಕ ಶಿಕ್ಷಣ ದಾರಿ ಮಾಡಿಕೊಡುತ್ತಿದೆ ಎಂದರು.
ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಬಸವರಾಜ್ ಚಿಲಕಾಂತಮಠ್, ಪ್ರಾಸ್ತಾವಿಕವಾಗಿ ಮಾತನಾಡಿ, ದೈಹಿಕ ಶಿಕ್ಷಕರ ಬೇಡಿಕೆಗಳ ಕುರಿತು ಗಮನ ಸೆಳೆದು ದೈಹಿಕ ಶಿಕ್ಷಣವನ್ನು ಪಠ್ಯದಲ್ಲಿ ಸೇರಿಸುವ ಕುರಿತು ಸಂತಸ ವ್ಯಕ್ತಪಡಿಸಿದರು.
ಜಿ.ಪಂ ಉಪಾಧ್ಯಕ್ಷೆ ಅಲುವೇಲಮ್ಮ ದೈಹಿಕ ಶಿಕ್ಷಕರ ವಾರ್ಷಿಕ ಕ್ರಿಯಾ ಯೋಜನೆ ಕ್ಯಾಲೆಂಡರ್ ಬಿಡುಗಡೆ ಮಾಡಿದರು. ತಾಲೂಕಿನ ಸೂಲೂರು ಗ್ರಾಮದ ಜಿ.ಎನ್. ಶ್ರೀನಿವಾಸ್ ಬರೆದ ಭಾರತೀಯ ಆಟ ಖೋ-ಖೋಪುಸ್ತಕ ಹಾಗೂ ದೈಹಿಕ ಶಿಕ್ಷಣಕ್ಕೆ ಸಂಬಂಧಿಸಿದ ರೇಖಾಪಟವನ್ನು ಅನಾವರಣಗೊಳಿಸಲಾಯಿತು.
ಇದೇ ಸಂದರ್ಭದಲ್ಲಿ ಸಂಚಾರಿ ಮುಖ್ಯಪೇದೆ ಮೆಹಬೂಬ್ ಪಾಷ, ನಿವೃತ್ತ ವಿಷಯ ಪರೀಕ್ಷಕ ಕೆ.ಶ್ರೀನಿವಾಸಗೌಡ, ನಿವೃತ್ತ ಮುಖ್ಯ ಶಿಕ್ಷಕ ಸೋಮಣ್ಣ ಹಾಗೂ ಜಿಲ್ಲೆಯಲ್ಲಿ ಈ ವರ್ಷ ನಿವೃತ್ತ ದೈಹಿಕ ಶಿಕ್ಷಕರನ್ನು ಸನ್ಮಾನಿಸಲಾಯಿತು.
ಡಿಡಿಪಿಐ ಎಸ್.ವಿ. ಪದ್ಮನಾಭ್, ಗುಡುಗುಂಜಗುರ್ಕಿಯ ಭದ್ರಕಾಳಿ ಮಠದ ಪ್ರಕಾಶ್ ಸ್ವಾಮೀಜಿ, ವಿವಿಧ ತಾಲೂಕುಗಳ ಶಿಕ್ಷಣಾಧಿಕಾರಿಗಳಾದ ಜಗದೀಶ್, ಸುಬ್ರಹ್ಮಣ್ಯಂ, ಕೃಷ್ಣಮೂರ್ತಿ, ದೇವರಾಜ್, ಸರ್ಕಾರಿ ನೌಕರರ ಸಂಘದ ಪ್ರತಿನಿಧಿಗಳಾಗಿ ಆಯ್ಕೆಯಾಗಿರುವ ದೈಹಿಕ ಶಿಕ್ಷಕರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚೌಡಪ್ಪ, ನೌಕರರ ಸಂಘದ ಜಂಟಿ ಕಾರ್ಯದರ್ಶಿ ಮುರಳಿಮೋಹನ್ ಮತ್ತಿತರರನ್ನು ಸನ್ಮಾನಿಸಲಾಯಿತು.
ದೈಹಿಕ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಇ. ಶ್ರೀನಿವಾಸಗೌಡ ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ, ಸಂಪನ್ಮೂಲ ವ್ಯಕ್ತಿ ಎಸ್.ಎಸ್.ಎನ್.ಎಸ್. ಹುಸೇನ್‌ಸಾಬ್, ಜಿ.ಪಂ ಸದಸ್ಯರಾದ ಮಂಗಮ್ಮ ಮುನಿಸ್ವಾಮಿ, ಅ.ಮು.ಲಕ್ಷ್ಮೀನಾರಾಯಣ, ಜಿಲ್ಲಾ ನೌಕರರ ಸಂಘದ ಅಧ್ಯಕ್ಷ ಕೆ.ಎನ್. ಮಂಜುನಾಥ್, ಕೆಜಿಎಫ್ ಘಟಕದ ಅಧ್ಯಕ್ಷ ಪಲ್ಲವಿ ಮಣಿ, ಸರ್ವ ಶಿಕ್ಷಣ ಅಭಿಯನಾಧಿಕಾರಿ ಸಿದ್ದಗಂಗಯ್ಯ, ಶಿಕ್ಷಣಾಧಿಕಾರಿ ಜಯರಾಮರೆಡ್ಡಿ, ಸರ್ಕಾರಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಅಶೋಕ್, ಉಪನ್ಯಾಸಕರ ಸಂಘದ ಅಧ್ಯಕ್ಷ ಟಿ.ಕೆ. ನಟರಾಜ್, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಡಿ.ವಿ. ರಾಮಚಂದ್ರಪ್ಪ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಅನಿಲ್‌ಕುಮಾರ್, ಸಹ್ಯಾದ್ರಿ ಕಾಲೇಜಿನ ಆಡಳಿತಾಧಿಕಾರಿ ಉದಯಕುಮರ್, ಚು.ಸಾ.ಪ ಅಧ್ಯಕ್ಷ ಜಿ.ಶ್ರೀನಿವಾಸ್, ಖಾಸಗಿ ಶಾಲೆಗಳ ಅಧ್ಯಕ್ಷ ಮುನಿಯಪ್ಪ ಇದ್ದರು. ದೈ.ಶಿ. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚೌಡಪ್ಪ ಸ್ವಾಗತಿಸಿ, ತಾಲೂಕು ಅಧ್ಯಕ್ಷ ನಾಗರಾಜ್ ನಿರೂಪಿಸಿದರು.

'ಮೇಕೆದಾಟು ಬಳಿ ಅಣೆಕಟ್ಟೆ ನಿರ್ಮಿಸಿ'
ಕೋಲಾರ:
ಕರ್ನಾಟಕ ಮತ್ತು ತಮಿಳುನಾಡಿನ ಗಡಿ ಭಾಗಕ್ಕೆ ಹೊಂದಿಕೊಂಡಿರುವ ಮೇಕೆದಾಟು ಬಳಿ ಶೀಘ್ರವೇ ಜಲಾಶಯ ನಿರ್ಮಾಣ ಮಾಡಲು ಸರ್ಕಾರ ಮುಂದಾಗಬೇಕೆಂದು ವಿಧಾನ ಪರಿಷತ್ ಸದಸ್ಯ ವೈ.ಎ. ನಾರಾಯಣಸ್ವಾಮಿ ಆಗ್ರಹಿಸಿದರು.
ನಗರದ ಟಿ. ಚನ್ನಯ್ಯ ರಂಗಮಂದಿರದಲ್ಲಿ ಜಿಲ್ಲಾ ದೈಹಿಕ ಶಿಕ್ಷಕರ ಸಂಘದಿಂದ ಹಮ್ಮಿಕೊಂಡಿದ್ದ ಜಿಲ್ಲಾ 4ನೇ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿ, ಕಾವೇರಿ ನೀರಿನ ವಿಚಾರದಲ್ಲಿ ಅನಗತ್ಯವಾಗಿ ಖ್ಯಾತೆ ತೆಗೆಯುತ್ತಿರುವ ವ್ಯಕ್ತಿಗಳಿಗೆ ಸುಪ್ರೀಂ ಕೋರ್ಟ್ ತಪರಾಕಿ ನೀಡಿರುವುದರಿಂದ ರಾಜ್ಯ ಸರ್ಕಾರ ಕಾನೂನು ತಜ್ಞರ ಸಲಹೆ ಪಡೆದು ಅದಷ್ಟು ಬೇಗನೆ ಮೇಕೆದಾಟು ಬಳಿ ನೀರು ನಿಯಂತ್ರಣ ಮತ್ತು ನೀರು ಸಂಗ್ರಹಣೆಗಾಗಿ ಜಲಾಶಯ ನಿರ್ಮಿಸುವ ಮೂಲಕ ಬರ ಪೀಡಿತ ಪ್ರದೇಶಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕೆಂದು ತಿಳಿಸಿದರು.
ಮೇಕೆದಾಟು ಬಳಿ ಅಣೆಕಟ್ಟೆ ನಿರ್ಮಿಸುವ ಮೂಲಕ ಮಳೆಗಾಲದಲ್ಲಿ ಸಮುದ್ರಕ್ಕೆ ಹರಿದು ಹೋಗುವ ನೀರನ್ನು ತಡೆದು ಕುಡಿಯುವ ನೀರಿನ ಯೋಜನೆಗಳ ಕಾಮಗಾರಿ ಕೈಗೆತ್ತಿಕೊಳ್ಳುವಂತೆ ತಾವು 2008 ರಿಂದಲೇ ರಾಜ್ಯ ಸರ್ಕಾರವನ್ನು ಒತ್ತಾಯಿಸುತ್ತಾ ಬಂದಿದ್ದೇನೆ, ವಿಧಾನ ಪರಿಷತ್ತಿನಲ್ಲಿ ಸರ್ಕಾರದ ಗಮನ ಸೆಳೆದಿದ್ದೇನೆಂದ ವೈ.ಎ.ನಾರಾಯಣಸ್ವಾಮಿ, ತಮಿಳುನಾಡು ಸರ್ಕಾರ ಕಾವೇರಿ ಜಲಾಶಯದಿಂದ ಪ್ರತಿ ವರ್ಷ 205 ಟಿಎಂಸಿ ನೀರು ಕೇಳಿತ್ತು. ಆದರೆ, ಸುಪ್ರೀಂ ಕೋರ್ಟ್ ಕರ್ನಾಟಕದ ಪರಿಸ್ಥಿತಿ ಅರಿತು 195 ಟಿಎಂಸಿ ನೀರು ಬಿಡಲು ಸೂಚನೆ ನೀಡಿರುವುದರಿಂದ 10 ಟಿಎಂಸಿ ನೀರು ಉಳಿತಾಯವಾಗುತ್ತದೆ. ಜೊತೆಗೆ ಮಳೆಗಾಲದಲ್ಲಿ ಪ್ರತಿವರ್ಷ 30 ರಿಂದ 40 ಟಿಎಂಸಿ ನೀರು ಸಮುದ್ರ ಪಾಲು ಆಗುತ್ತಿರುವುದರಿಂದ ರಾಜ್ಯ ಸರ್ಕಾರ ಸಮಗ್ರವಾದ ಯೋಜನೆ ರೂಪಿಸಿ ಮೇಕೆದಾಟು ಬಳಿ ಜಲಾಶಯ ನಿರ್ಮಿಸಿದಲ್ಲಿ ಕುಡಿಯುವ ನೀರಿನ ಯೋಜನೆ ಅನುಷ್ಠಾನಕ್ಕೆ ತರಬಹುದಾಗಿದೆ ಎಂದರು.
ಎತ್ತಿನಹೊಳೆ ಜ.15 ರಂದು ಶಂಕುಸ್ಥಾಪನೆ: ಬಯಲು ಸೀಮೆ ಪ್ರದೇಶಗಳಿಗೆ ಶಾಶ್ವತ ನೀರಾವರಿ ಯೋಜನೆ ಅನುಷ್ಠಾನ ಸಂಬಂಧ ಬರುವ 2014ರ ಜನವರಿ 15 ರಂದು ಶಂಕುಸ್ಥಾಪನೆ ನೆರವೇರಲಿದೆ. ಶಾಸಕ ರಮೇಶ್ ಕುಮಾರ್ ಅಧ್ಯಕ್ಷತೆಯಲ್ಲಿ ರಚಿಸಿರುವ ಸಮಿತಿಗೆ ತಾವು ಸಂಚಾಲಕರಾಗಿದ್ದು, ಬಯಲು ಸೀಮೆಗೆ ಸೇರಿದ ಜಿಲ್ಲೆಗಳ ಶಾಸಕರು ಸಭೆ ಸೇರಿ ಯೋಜನೆ ಅನುಷ್ಠಾನಕ್ಕೆ ಒತ್ತಾಯಿಸಿರುವ ಪರಿಣಾಮ ಯೋಜನೆ ಅನುಷ್ಟಾನಕ್ಕೆ ಸರ್ಕಾರ ಮುಂದಾಗಿದೆ ಎಂದು ಹೇಳಿದರು.
ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿನ 4 ಸಾವಿರಕ್ಕೂ ಅಧಿಕ ಕೆರೆಗಳನ್ನು ನಿರ್ಮಾಣ ಮಾಡಿದ್ದು ಮೈಸೂರು ಮಹಾರಾಜರು ಎಂದು ಸ್ಮರಿಸಿಕೊಂಡ ಶಾಸಕ ವೈ.ಎ. ನಾರಾಯಣಸ್ವಾಮಿ, ಈ ಮನೆತನಕ್ಕೆ ಸೇರಿದ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ನಿಧನದಿಂದ ರಾಜ್ಯ ಶೋಕ ಸಾಗರದಲ್ಲಿ ಮುಳುಗುವಂತಾಗಿದೆ ಎಂದು ಸಂತಾಪ ವ್ಯಕ್ತಪಡಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.